ಸಾರಾಂಶ
ಕನ್ನಡಪ್ರಭ ವಾರ್ತೆ ಬಂಟ್ವಾಳ
ದ.ಕ. ಜಿಲ್ಲಾ ಪೊಲೀಸ್ ಇಲಾಖೆ, ವಿವಿಧ ಇಲಾಖೆ, ಶಿಕ್ಷಣ ಸಂಸ್ಥೆಗಳು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ‘ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ’ ಕಾಲ್ನಡಿಗೆ ಮತ್ತು ಮ್ಯಾರಥಾನ್ ಅಭಿಯಾನ – 2024 ಕಾರ್ಯಕ್ರಮ ಜ.7 ರಂದು ಬಿಸಿರೋಡಿನ ಮಿನಿವಿಧಾನ ಸೌಧದ ಕಚೇರಿ ಮುಂಭಾಗದಲ್ಲಿ ನಡೆಯಿತು.ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ರಿಷ್ಯಂತ್ ಉದ್ಘಾಟಿಸಿ ಮಾತನಾಡಿ, ಮಾದಕ ವಸ್ತುಗಳ ಉಪಯೋಗ ಅಪರಾಧವಾಗಿದ್ದು, ಮಾದಕ ವಸ್ತುಗಳ ಸೇವನೆ ಮಾಡುವುದು ಕಂಡುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದ ಅವರು, ವಿದ್ಯಾರ್ಥಿಗಳು ಮಾದಕವಸ್ತುಗಳ ಬಲೆಗೆ ಬೀಳಬಾರದು ಎಂಬ ಎಚ್ಚರಿಕೆಯನ್ನು ನೀಡಿ, ಇದರಿಂದ ಇಡೀ ಕುಟುಂಬ ಸರ್ವನಾಶವಾಗುತ್ತದೆ. ಹಾಗಾಗಿ ಇಂತಹ ಚಟುವಟಿಕೆಗಳಿಂದ ದೂರ ಇರುವಂತೆ ಮನವಿ ಮಾಡಿದರು. ಮಾದಕ ಸೇವನೆ ಮಾಡುವವರ ಮೇಲೆ ಪ್ರಕರಣ ದಾಖಲಿಸುವುದು ನಮ್ಮ ಉದ್ದೇಶವಲ್ಲ, ಆದರೆ ಉತ್ತಮ ಸಮಾಜ ನಿರ್ಮಾಣಕ್ಕೆ ಅನಿವಾರ್ಯವಾಗಿ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಣ ಮಾಡಲೇಬೇಕು ಎಂದು ಅವರು ಹೇಳಿದರು. ಕಳೆದ ವರ್ಷದಿಂದ ಈ ವರ್ಷ ಮಾದಕ ವಸ್ತುಗಳ ಮಾರಾಟ ಮಾಡುವವರ ಸಂಖ್ಯೆ ಹೆಚ್ಚಳವಾಗಿದ್ದು, ಉತ್ತಮ ಬೆಳವಣಿಗೆ ಅಲ್ಲ ಎಂದರು.ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳು ಹೆಚ್ಚಿನ ಸಹಕಾರ ನೀಡಬೇಕು. ಜೊತೆಗೆ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದರು.ಅಡಿಸನಲ್ ಎಸ್.ಪಿ.ಧರ್ಮಪ್ಪ, ಡಿ.ವೈ.ಎಸ್.ಪಿ. ವಿಜಯಪ್ರಕಾಶ್ , ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.