ಶಿಕ್ಷಕರಿಗೆ ಅತ್ಯುನ್ನತ ಗೌರವ ಮತ್ತು ಸ್ಥಾನಮಾನವನ್ನು ಕಲ್ಪಿಸಿದ ಕಾಂಗ್ರೆಸ್ ಸರ್ಕಾರ, ನಿರಂತರವಾಗಿ ಅವರ ಹಕ್ಕು ಹಾಗೂ ಹಿತ ಕಾಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಕನ್ನಡಪ್ರಭ ವಾರ್ತೆ ಬೀದರ್
ಶಿಕ್ಷಕರಿಗೆ ಅತ್ಯುನ್ನತ ಗೌರವ ಮತ್ತು ಸ್ಥಾನಮಾನವನ್ನು ಕಲ್ಪಿಸಿದ ಕಾಂಗ್ರೆಸ್ ಸರ್ಕಾರ, ನಿರಂತರವಾಗಿ ಅವರ ಹಕ್ಕು ಹಾಗೂ ಹಿತ ಕಾಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.ಅವರು ಇದೇ ಅ. 23ರಂದು ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಪರ ಇಲ್ಲಿನ ಕೆಆರ್ಇ ಸಂಸ್ಥೆಯಲ್ಲಿ ಪ್ರಚಾರ ನಡೆಸಿ, ಶ್ರೇಷ್ಠ ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ದೇಶದ ರಾಷ್ಟ್ರಪತಿಯನ್ನಾಗಿ ಮಾಡಿದ ಕಾಂಗ್ರೆಸ್ ಸರ್ಕಾರ, ಶಿಕ್ಷಕ ವೃತ್ತಿಯ ಘನತೆಯನ್ನು ಎತ್ತಿಹಿಡಿಯಿತು ಎಂದರು.
ಕಲ್ಯಾಣ ಕರ್ನಾಟಕಕ್ಕೆ 7 ಸಾವಿರ ಹುದ್ದೆಗಳು: ಶಿಕ್ಷಕರ ಮೇಲಿನ ಒತ್ತಡ ತಗ್ಗಿಸಲು ಮತ್ತು ಗುಣಮಟ್ಟದ ಶಿಕ್ಷಣ ನೀಡಲು, 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದಲ್ಲೇ 7 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ, ಹೆಚ್ಚುವರಿಯಾಗಿ 5 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ಧಿ ಮತ್ತು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಶಿಕ್ಷಕರ ಧ್ವನಿಯಾಗಿ ಈ ಹಿಂದೆಯೂ ಮಟ್ಟೂರು ಅವರು ಪರಿಷತ್ತಿನಲ್ಲಿ ಕಾರ್ಯನಿರ್ವಹಿಸಿದ್ದಾರೆ. ನಿಮ್ಮ ನ್ಯಾಯಸಮ್ಮತ ಬೇಡಿಕೆಗಳಿಗೆ ಮುಂದೆಯೂ ಧ್ವನಿಯಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಹೀಮ್ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಕಾರ್ಯದರ್ಶಿ ಸತೀಶ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು.ಕಲ್ಯಾಣ ಕರ್ನಾಟಕಕ್ಕೆ 371(ಜೆ) ನೀಡಿದ್ದು ಕಾಂಗ್ರೆಸ್: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವೇಗ ನೀಡಲು ಹಾಗೂ ಈ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಮೀಸಲು ಕಲ್ಪಿಸಲು ಸಂವಿಧಾನದ 371(ಜೆ)ಗೆ ತಿದ್ದುಪಡಿ ತಂದಿದ್ದೇ ಕಾಂಗ್ರೆಸ್ ಸರ್ಕಾರ ಎಂದ ಅವರು, ಜ್ಞಾನವಂತರಾದ ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದರು.