ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗೊಳಿಸಲು ಮತ್ತು ಗುಣಮಟ್ಟ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ.ಫೌಜಿಯಾ ತರನ್ನುಮ್ ಬಿ. ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಗಳೂರು: ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗೊಳಿಸಲು ಮತ್ತು ಗುಣಮಟ್ಟ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ.ಫೌಜಿಯಾ ತರನ್ನುಮ್ ಬಿ. ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಯೋಜನೆಗೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಕಾಮಗಾರಿಗೆ ಬಳಕೆ ಮಾಡಿ, ಬಾಕಿ ಉಳಿದ ಯೋಜನೆಯ ಎಲ್ಲ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಶೀಘ್ರ ಪೂರ್ಣಗೊಳಿಸಬೇಕು. ಆಗಾಗ್ಗೆ ಕಾಮಗಾರಿಗಳನ್ನು ಪರಿಶೀಲಿಸುತ್ತಿರಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಕಡಬ ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಜಲ ಶುದ್ಧೀಕರಣ ಘಟಕ, ಮಲತ್ಯಾಜ್ಯ ಸಂಸ್ಕರಣಾ ಘಟಕ, ಏಕಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ, ಜಾಕ್‍ವೆಲ್ ಕಾಮಗಾರಿ, ಮೆಟೀರಿಯಲ್ ರಿಕವರಿ ಫೆಸಿಲಿಟಿಗೆ ಸಂಬಂಧಿಸಿದಂತೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಮಾತನಾಡಿ, ಈ ಯೋಜನೆಯ ಅನುಷ್ಠಾನದಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದರು.
ಇದಕ್ಕೂ ಮೊದಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ.ಫೌಜಿಯಾ ತರನ್ನುಮ್ ಬಿ. ವಿವಿಧ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜೆ.ಜೆ.ಎಂ.ನ ಗುತ್ತಿಗೆದಾರರು, ತಾಲ್ಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.