ಸಾರಾಂಶ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸೋಮವಾರ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ, ಬಸವಟ್ಟಿ ಮತ್ತು ಬಾಣಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸೋಮವಾರ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ, ಬಸವಟ್ಟಿ ಮತ್ತು ಬಾಣಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ತಾಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 483 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಈವರೆಗೆ 391 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 101 ಕಾಮಗಾರಿಗಳನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈ ಪೈಕಿ 5 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಪರಿಶೀಲನೆ ನಡೆಸಲಾಯಿತು.ಜೆಜೆಎಂ ಯೋಜನೆಯಡಿ ಅಳವಡಿಸಿರುವ ಕಾರ್ಯಾತ್ಮಕ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಮತ್ತು ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿ ಅಳವಡಿಕೆ ಮತ್ತು ನೀರು ಸರಬರಾಜು ಗ್ರಾಮ ಘೋಷಣೆ ಕುರಿತು ವರದಿಗಳನ್ನು ಸಿಇಒ ಅವರು ಪರಿಶೀಲಿಸಿ, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದರು.
ಬಳಿಕ ಬಾಣಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ನರೇಗಾ ಯೋಜನೆಯಡಿ ತೆಗೆದುಕೊಂಡಿರುವ ಶಾಲಾ ಸುತ್ತುಗೋಡೆ, ಶೌಚಾಲಯ ಕಾಮಗಾರಿಯನ್ನು ಪರಿಶೀಲಿಸಿ, ಶಾಲಾ ಮಕ್ಕಳ ಕುಂದು ಕೊರತೆಗಳನ್ನು ಆಲಿಸಿದರು.ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ಎಸ್. ಜಗದೀಶ್, ಸಹಾಯಕ ಎಂಜಿನಿಯರ್ ಪುರುಷೋತ್ತಮ್, ಜೆಜೆಎಂ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಸಿ.ಎಂ. ಆಶಾ ಹಾಜರಿದ್ದರು.