ಕಾಂತೂರು ಮೂರ್ನಾಡಿನಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಉದ್ಘಾಟನೆ

| Published : Nov 07 2025, 03:00 AM IST

ಕಾಂತೂರು ಮೂರ್ನಾಡಿನಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಲಜೀವನ್‌ ಮಿಷನ್‌ ಯೋಜನೆಯಡಿ ಕಾರ್ಯಗತಗೊಳಿಸಲಾದ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಸಂಸದರು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನಗೊಳಿಸಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯಗತಗೊಳಿಸಲಾದ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕರಾದ ಡಾ.ಮಂತರ್‌ ಗೌಡ ಉದ್ಘಾಟಿಸಿದರು.

ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 6 ಜನ ವಸತಿಗಳು ಒಳಗೊಂಡಿದ್ದು, ಸುಮಾರು 9995 ಜನಸಂಖ್ಯೆಗೆ ಸೇವೆ ಸಲ್ಲಿಸಲಾಗುತ್ತಿದೆ. ಒಟ್ಟು 1980 ಮನೆಗಳಿಗೆ ನೀರು ಸರಬರಾಜು ಮಾಡಲು 11.63 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಜನವಸತಿಗಳ ಪೈಕಿ ಕಿಗ್ಗಾಲು ಹಾಗೂ ಕಾಂತೂರು ಮೂರ್ನಾಡು ವಸತಿಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ಗ್ರಾಮ ಪಂಚಾಯಿತಿಗೆ ಅಧಿಕೃತವಾಗಿ ಹಸ್ತಾಂತರಿಸಿ 24x7 ನೀರು ಸರಬರಾಜು ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ. ಉಳಿದ ವಸತಿಗಳ ಕಾಮಗಾರಿಯನ್ನು 2025ರ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸದರು, ಜಲ್ ಜೀವನ್ ಮಿಷನ್ ಯೋಜನೆಯ ಕಾರ್ಯಗತಗೊಳಿಸುವುದು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಲಭ್ಯತೆಯ ಮಹತ್ವದ ಹೆಜ್ಜೆ ಎಂದು ಪ್ರಶಂಸಿಸಿದರು. ಯೋಜನೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿರುವ ಇಲಾಖೆಯ ಅಧಿಕಾರಿಗಳು, ಇಂಜಿನಿಯರ್‌ ಗಳು ಹಾಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮತ್ತು ಕಾಮಗಾರಿಯನ್ನು ನಿರ್ವಹಿಸಲು ಸಹಕರಿಸಿದ ಗ್ರಾಮಸ್ಥರಿಗೆ ಅಭಿನಂದಿಸಿದರು. ಜಿಲ್ಲಾದ್ಯಂತ ಇದೇ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಸಂಬಂಧಿತ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿದಲ್ಲಿ ಯೋಜನೆಗಳನ್ನು ಉತ್ತಮವಾಗಿ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ಸಂದರ್ಭದಲ್ಲಿ ತಿಳಿಸಿದರು.

ಶಾಸಕ ಡಾ.ಮಂತರ್ ಗೌಡ ಮಾತನಾಡಿ ಜಲ‌ ಜೀವನ್ ಯೋಜನೆ ಎಲ್ಲಾ ಕುಟುಂಬಕ್ಕೂ ತಲುಪುವಂತಾಗಬೇಕು. ಶುದ್ದ ಕುಡಿಯುವ ನೀರು ಪೂರೈಸಬೇಕು ಎಂದರು.

ಈ ಸಂದರ್ಭ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಮಡಿಕೇರಿ ಉಪವಿಭಾಗದ ಅಧಿಕಾರಿಗಳು, ಇಂಜಿನಿಯರ್‌, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರು, ಇತರೆ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.