ಕನ್ನಡಪ್ರಭ ವಾರ್ತೆ ಪಾಂಡವಪುರ

ಪಟ್ಟಣದ‌ ಪಾಂಡವ ಕ್ರೀಡಾಂಗಣದ ಎದುರು ಮೇ 7ರಂದು ನಡೆಯಲಿರುವ ಮೇಲುಕೋಟೆ ವಿಧಾ‌ನಸಭಾ ವ್ಯಾಪ್ತಿಯ ಜನರೊಂದಿಗೆ ಜನತಾದಳ ಕಾರ್ಯಕ್ರಮ ಹಾಗೂ ಜೆಡಿಎಸ್ ಪಕ್ಷದ 25ನೇ ವರ್ಷದ ಬೆಳ್ಳಿಹಬ್ಬ ಆಚರಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ಭಾವಚಿತ್ರಗಳಿರುವ ಪ್ಲೆಕ್ಸ್ ಗಳು, ಬ್ಯಾನರ್‌ಗಳು ರಾರಾಜಿಸುತ್ತಿವೆ.

ಹೆದ್ದಾರಿ, ಮುಖ್ಯ ರಸ್ತೆಯ ಬದಿಗಳಲ್ಲಿ, ವಿದ್ಯುತ್ ಕಂಬಗಳಲ್ಲಿ‌ ಜೆಡಿಎಸ್ ನಾಯಕರ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಇಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಡಾ.ರಾಜ್ ಕುಮಾರ್ ವೃತ್ತ (ಮಂಡ್ಯ ಸರ್ಕಲ್)ನಿಂದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರನ್ನು ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುವುದು.

ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಮಟ್ಟದ ನಾಯಕರು, ಜಿಲ್ಲಾ ಮಟ್ಟದ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಎಂಎಲ್ಸಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಭಾಗವಹಿಸಲಿದ್ದಾರೆ. ಮೇಲುಕೋಟೆ ವಿಧಾನಸಭಾ ವ್ಯಾಪ್ತಿಯ ಹಳ್ಳಿಹಳ್ಳಿಂದ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ಮಹಿಳೆಯರು, ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರ ಭಾಗವಹಿಸಲಿದ್ದಾರೆ.


ವಿಶೇಷವಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬರುವ ಎಲ್ಲ ಮುಖಂಡರು, ಕಾರ್ಯಕರ್ತರಿಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಸಿಲು ಹೆಚ್ಚು ಇರುವುದರಿಂದ ನಿಗಧಿತ ಸಮಯಕ್ಕೆ ಕಾರ್ಯಕ್ರಮ ಆರಂಭಿಸಿ ಮುಕ್ತಾಯಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಜಿಪಂ‌ ಮಾಜಿ ಸದಸ್ಯ ಸಿ.ಅಶೋಕ್ ತಿಳಿಸಿದ್ದಾರೆ.

ಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಈಗಾಗಲೇ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಯುವ ನಾಯಕ ಸಿ.ಪಿ.ಶಿವರಾಜು, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಮನ್ಮುಲ್ ನಿರ್ದೇಶಕ ಶಿವಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಮಲ್ಲೇಶ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಮುಂಚೂಣಿ ನಾಯಕರು ಹಳ್ಳಿಹಳ್ಳಿಗಳಿಗೆ ಭೇಟಿ ನೀಡಿ ಸಭೆ ಮಾಡಿ ಪಕ್ಷದ ಸ್ಥಳೀಯ ಹಿರಿಯ ಮುಖಂಡರು, ಯುವಕರೊಂದಿಗೆ ಚರ್ಚೆ ನಡೆಸಿ ಸಮಾರಂಭದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.