ಸತೀಶ್ ಜಾರಕಿಹೊಳಿ ಹಾಗೂ ಅವರಿಗೆ ಸಂಬಂಧಿಸಿದ ಸುಮಾರು 18 ಸ್ಥಳಗಳಲ್ಲಿ ಇಡಿ ಶೋಧ ನಡೆಸಿದ್ದು, ₹ 3 ಕೋಟಿಗೂ ಅಧಿಕ ನಗದು ಹಾಗೂ ವಿದೇಶಿ ಕರೆನ್ಸಿ ಪತ್ತೆಯಾಗಿದೆ ಎಂದು ಇಡಿ ನೀಡಿರುವ ಮಾಹಿತಿಯಲ್ಲಿ ತಿಳಿದುಬಂದಿದೆ.

ಹುಬ್ಬಳ್ಳಿ:

ಜಾರಿ ನಿರ್ದೇಶನಾಲಯ (ಇಡಿ) ದಾಳಿ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಅವರು ತನಿಖೆ ಪೂರ್ಣಗೊಳ್ಳುವ ವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹಾಗೂ ಅವರಿಗೆ ಸಂಬಂಧಿಸಿದ ಸುಮಾರು 18 ಸ್ಥಳಗಳಲ್ಲಿ ಇಡಿ ಶೋಧ ನಡೆಸಿದ್ದು, ₹ 3 ಕೋಟಿಗೂ ಅಧಿಕ ನಗದು ಹಾಗೂ ವಿದೇಶಿ ಕರೆನ್ಸಿ ಪತ್ತೆಯಾಗಿದೆ ಎಂದು ಇಡಿ ನೀಡಿರುವ ಮಾಹಿತಿಯಲ್ಲಿ ತಿಳಿದುಬಂದಿದೆ. ಜಾರಕಿಹೊಳಿ ಹಾಗೂ ಅವರ ಕುಟುಂಬದವರು ವಿದೇಶಿ ಕಂಪನಿಗಳಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಮಾಡಿರುವ ಬಗ್ಗೆಯೂ ತನಿಖೆಯಲ್ಲಿ ಮಾಹಿತಿ ಹೊರಬಂದಿದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದ ಕಂಪನಿಯೊಂದಕ್ಕೆ ₹2,477 ಕೋಟಿ ಮೊತ್ತದ ಟೆಂಡರ್‌ ಅನ್ನು ನಿಯಮ ಉಲ್ಲಂಘಿಸಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೂಡಿಕೆಯ ಹಣದ ಮೂಲವೇನು? ಯಾವ ಕಂಪನಿಗಳಿಗೆ ಹಣ ವರ್ಗಾವಣೆಯಾಗಿದೆ, ಟೆಂಡರ್‌ ನೀಡುವಲ್ಲಿ ಕಿಕ್‌ಬ್ಯಾಕ್ ನಡೆದಿದೆಯೇ ಎಂಬುದನ್ನು ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರೇ ಇಲಾಖೆಯ ಮುಖ್ಯಸ್ಥರಾಗಿರುವುದು ಸೂಕ್ತವಲ್ಲ. ತನಿಖೆಯಲ್ಲಿ ಸತೀಶ್ ಜಾರಕಿಹೊಳಿ ನಿರ್ದೋಷಿ ಎಂದು ಸಾಬೀತಾದರೆ ಮತ್ತೆ ಸಚಿವರಾಗುವುದಕ್ಕೆ ಬಿಜೆಪಿಯ ತಕರಾರಿಲ್ಲ. ತಪ್ಪಿತಸ್ಥರಾದರೆ ಕಾನೂನು ಕ್ರಮ ಎದುರಿಸಬೇಕು ಎಂದರು.

10 ದಿನ ಅಧಿವೇಶನ ನಡೆಸಲಿ:

ಬರ ಪರಿಸ್ಥಿತಿ ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಸರ್ಕಾರ ಕರೆದಿರುವ 3 ದಿನಗಳ ಅಧಿವೇಶನ ಸಾಲದು. ಕನಿಷ್ಠ 10 ದಿನಗಳ ಅಧಿವೇಶನ ನಡೆಸಬೇಕು. ಬರಪೀಡಿತ ತಾಲೂಕುಗಳ ಘೋಷಣೆ ಸಮರ್ಪಕವಾಗಿಲ್ಲ. ರೈತರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಯಬೇಕು ಎಂದ ಅವರು, ಕೆಪಿಎಸ್‌ಸಿ ನೇಮಕಾತಿ ಅಕ್ರಮದಲ್ಲೂ ಕೇವಲ ಇಬ್ಬರನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ಮುಗಿಸಬಾರದು. ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳು ಹಾಗೂ ಸಚಿವರ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರು ಯಾವುದೇ ಪಕ್ಷದವರಾಗಿದ್ದರೂ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಿವೈವಿ ಅಸ್ತಿತ್ವದ ಪಾದಯಾತ್ರೆಯಲ್ಲ:

ಬಳ್ಳಾರಿ ಪಾದಯಾತ್ರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅಸ್ತಿತ್ವಕ್ಕಾಗಿ ನಡೆಯುತ್ತಿಲ್ಲ. ಎಸ್‌ಸಿ-ಎಸ್‌ಟಿ ಮೀಸಲಾತಿ ಹಾಗೂ ₹187 ಕೋಟಿ ಹಗರಣದ ಹಣ ವಾಪಸ್ ಪಡೆಯುವಂತೆ ಒತ್ತಾಯಿಸಿ ಹೋರಾಟ ನಡೆಸಲಾಗುತ್ತಿದೆ. ಬಿಜೆಪಿ-ಜೆಡಿಎಸ್‌ ಒಟ್ಟಾಗಿ ವಿವಿಧ ಹೋರಾಟಗಳಲ್ಲಿ ಭಾಗವಹಿಸುತ್ತಿವೆ ಎಂದು ಬೆಲ್ಲದ ಹೇಳಿದರು.