ಸಾರಾಂಶ
ಮತಾಂತರ ಪಿಡುಗಿನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಮುಖರು ಗೋಣಿಕೊಪ್ಪದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.
ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ
ಮತಾಂತರ ಪಿಡುಗಿನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಪರಿವಾರ ಸಂಘಟನೆಯ ಪ್ರಮುಖರು ಗೋಣಿಕೊಪ್ಪದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.ಶ್ರೀ ಮಹಾಲಕ್ಷ್ಮೀ ದೇವಾಲಯದ ಆವರಣದಿಂದ ಆತೂರು ವರೆಗೆ ಜಾಥಾ ನಡೆಸಿದ ಪ್ರತಿಭಟನಾಕಾರರು ಇತ್ತೀಚೆಗೆ ಖಾಸಗಿ ಶಾಲೆಯ ಸಭಾಂಗಣವೊಂದರಲ್ಲಿ ಮತಾಂತರದ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿಣಿಯ ಪ್ರಮುಖ ಕುಕ್ಕೇರ ಅಜಿತ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಮತಾಂತರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಖಾಸಗಿ ಶಾಲೆಯ ಸಭಾಂಗಣದಲ್ಲಿ ನಡೆದ ಮತಾಂತರ ಪ್ರಯತ್ನದ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.ವಿಶ್ವ ಹಿಂದೂ ಪರಿಷತ್, ಪರಿವಾರ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡು ಮತಾಂತರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.