ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರೊಂದಿಗೆ ಮಾಜಿ ಪ್ರಧಾನಿ ಜವಾಹರ ಲಾಲ್‌ ನೆಹರು ಅವರು ಹೆಗಲಿಗೆ ಹೆಗಲು ಕೊಟ್ಟು ಸತ್ಯ, ಧರ್ಮ, ಅಹಿಂಸೆ ಮಾರ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ದುಡಿದು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ಹೇಳಿದ್ದಾರೆ.

- ಕಾಂಗ್ರೆಸ್‌ ಮುಖಂಡ ಡಿ.ಬಸವರಾಜ್ ಸ್ಮರಣೆ । ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೆಹರು 137ನೇ ಜನ್ಮ ದಿನಾಚರಣೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರೊಂದಿಗೆ ಮಾಜಿ ಪ್ರಧಾನಿ ಜವಾಹರ ಲಾಲ್‌ ನೆಹರು ಅವರು ಹೆಗಲಿಗೆ ಹೆಗಲು ಕೊಟ್ಟು ಸತ್ಯ, ಧರ್ಮ, ಅಹಿಂಸೆ ಮಾರ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ದುಡಿದು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ಹೇಳಿದರು.

ಶನಿವಾರ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ನೆಹರು ಅವರ 137ನೇ ಜನ್ಮ ದಿನಾಚರಣೆಯಲ್ಲಿ ನೆಹರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಆಗರ್ಭ ಶ್ರೀಮಂತ ಕುಟುಂಬದಲ್ಲಿ ಜನಿಸಿದ ನೆಹರು ವಿದೇಶದಲ್ಲಿ ಶಿಕ್ಷಣ ಪಡೆದು ಭಾರತಕ್ಕೆ ಮರಳಿದಾಗ ಬ್ರಿಟಿಷ್ ದಬ್ಬಾಳಿಕೆಯಲ್ಲಿ ದೇಶ ನಲುಗುತ್ತಿತ್ತು. ದೇಶದ ಸ್ವಾತಂತ್ರ್ಯಕ್ಕಾಗಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ನೇತೃತ್ವದಲ್ಲಿ ದೇಶಾದ್ಯಂತ ದೊಡ್ಡ ಹೋರಾಟ ನಡೆದಿತ್ತು. ನೆಹರು ಅವರು ಗಾಂಧೀಜಿಯವರ ಪರಮಶಿಷ್ಯರಾಗಿ ಸ್ವಾತಂತ್ರ್ಯ ಚಳವಳಿಗೆ ಧುಮಿಕಿದರು 9 ವರ್ಷಗಳ ಕಾಲ ಜೈಲು ವಾಸ ಅನುಭವಿಸಿದರು. ಸ್ವಾತಂತ್ರ್ಯ ಹೋರಾಟಗಾರ ಆಧುನಿಕ ಭಾರತದ ಶಿಲ್ಪಿ ಪಂಡಿತ್ ಜವಾಹರಲಾಲ್ ನೆಹರು ಅವರ ದೇಶ ಸೇವೆ ಅನನ್ಯ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಎಸ್ಸಿ ವಿಭಾಗದ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ ಮಾತನಾಡಿ, ದೇಶದ ಅಭಿವೃದ್ಧಿಗೆ ಶ್ರಮಿಸಿದ ಪಂಡಿತ್ ನೆಹರು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವಮಾನಿಸುವುದನ್ನು ತೀವ್ರವಾಗಿ ಖಂಡಿಸಿದರು. ನೆಹರು ಅಧಿಕಾರಕ್ಕೆ ಬಂದಾಗ ಬ್ರಿಟಿಷರ ಆಡಳಿತದಿಂದಾಗಿ ಭಾರತ ಬಡವಾಗಿತ್ತು. ರಾಷ್ಟ್ರವನ್ನು ಕಟ್ಟುವ ಕೆಲಸಕ್ಕೆ ಕೈ ಹಾಕಿದ ನೆಹರುರವರು ಪಂಚ ವಾರ್ಷಿಕ ಯೋಜನೆಗಳನ್ನು ಜಾರಿಗೊಳಿಸಿದರು ಎಂದರು.

ಕೃಷಿಗೆ ನೀರು ಒದಗಿಸಲು ಭಾಕ್ರಾನಂಗಲ್‌ ಮತ್ತು ರಾಕುಡ್ ಜಲಾಶಯಗಳನ್ನು ನಿರ್ಮಿಸಿದರು. ಭೀಲಾಯ್ ಮತ್ತು ರೂರ್ಕೆಲಾ ಉಕ್ಕಿನ ಕಾರ್ಖಾನೆಗಳನ್ನು ಸ್ಥಾಪಿಸಿದರು. ವಿಮಾನ ಮತ್ತು ಹಡಗು ನಿರ್ಮಾಣಕ್ಕೆ ಆದ್ಯತೆ ನೀಡಿದರು. ಬ್ರಿಟಿಷ್ ಆಡಳಿತದಿಂದ ದಿವಾಳಿಯಾಗಿದ್ದ ಭಾರತಕ್ಕೆ ಶಕ್ತಿಯನ್ನು ತುಂಬಲು ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡು ಪಂಚವಾರ್ಷಿಕ ಯೋಜನೆಗಳ ಮೂಲಕ ದೇಶ ಕೃಷಿ, ಕೈಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಬಾಹ್ಯಾಕಾಶ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆ ಮಾಡಿದರು ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಸ್.ಮಲ್ಲಿಕಾರ್ಜುನ, ಪುಟ್ಬಾಲ್ ಗಿರೀಶ್, ಎಲ್ಎಂಎಚ್ ಸಾಗರ್, ದಾಕ್ಷಣಮ್ಮ, ಕವಿತಾ ಚಂದ್ರಶೇಖರ, ರಾಜೇಶ್ವರಿ, ರಾಕೇಶ್, ಹನುಮಂತಪ್ಪ ಇತರರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ಸ್ ವಿತರಿಸಲಾಯಿತು.

- - -

-14ಕೆಡಿವಿಜಿ36: ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನೆಹರು ಜನ್ಮ ದಿನಾಚರಣೆ ಆಚರಿಸಲಾಯಿತು.