ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು. ಅಲ್ಲದೇ, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಕಾರ್ಯಕರ್ತರು ಸಕ್ರಿಯವಾಗಿ ತೊಡಬೇಕು.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಜೆಡಿಎಸ್ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಎಲ್ಲಾ ಅರ್ಹ ಮತದಾರರು ಪಟ್ಟಿಯಿಂದ ಕೈ ಬಿಡದಂತೆ ನೋಡಿಕೊಂಡು ಪಕ್ಷ ಸಂಘಟನೆಗೆ ನೆರವಾಗಬೇಕು ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಕರೆ ನೀಡಿದರು.ಸಮೀಪದ ದೊಡ್ಡರಸಿನಕೆರೆ ಗೇಟ್ ಬಳಿ ಇರುವ ಎಸ್‌ವೈಎಸ್ ಸಮುದಾಯದ ಭವನದಲ್ಲಿ ಜೆಡಿಎಸ್ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ವಿಶೇಷ ಸಮಗ್ರ ಪರಿಷ್ಕರಣೆ ಬಿಎಲ್‌ಎ-2 ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು. ಅಲ್ಲದೇ, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಕಾರ್ಯಕರ್ತರು ಸಕ್ರಿಯವಾಗಿ ತೊಡಬೇಕು ಎಂದರು.ಜಿಪಂ, ತಾಪಂ, ಗ್ರಾಪಂ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಬೂತ್ ಮಟ್ಟದಲ್ಲಿ ನಾಯಕನನ್ನು ಆಯ್ಕೆ ಮಾಡಲು ಸಿದ್ಧತೆ ನಡೆಸುತ್ತಿದೆ. ಜೆಡಿಎಸ್ ಪಕ್ಷದ ಸಂಘಟನಾತ್ಮಕ ಸುಧಾರಣೆ ಮತ್ತು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ನಡೆಸುತ್ತಿರುವ ಮತದಾರರ ಪರಿಷ್ಕರಣೆ ಕಾರ್ಯದಲ್ಲಿ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳುವುದು ಅನಿವಾರ್ಯ ಎಂದರು.
ಅಧಿಕಾರಿಗಳು ಮನೆ ಮನೆಗೆ ಬಂದಾಗ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೆ ಕಡ್ಡಾಯವಾಗಿ ಪಾಲ್ಗೊಂಡು ಮಹತ್ವದ ಜವಾಬ್ದಾರಿಯಾದ ಮತದಾರರ ಹೆಸರನ್ನು ನೋಂದಾಯಿಸಲು ಕಾರ್ಯ ನಿರತರಾಗಬೇಕು ಎಂದರು.ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಮಾತನಾಡಿ, ಬೂತ್ ಮಟ್ಟದ ಕಾರ್ಯಕರ್ತರು ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಮತದಾನ ಪ್ರಕ್ರಿಯೆಯಲ್ಲಿ ವೇಳೆ ಪ್ರತಿ ಒಂದು ಮತವು ಅತ್ಯವಶ್ಯಕ ಎಂಬುದನ್ನು ಅರಿತು ಈ ಬಾರಿ ರಾಜ್ಯದಲ್ಲಿ ಮತ್ತೊಮ್ಮೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗುವ ಅವಕಾಶಕ್ಕೆ ಕೈ ಜೋಡಿಸಬೇಕು. ಮದ್ದೂರು ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣರ ಕೈ ಬಲಪಡಿಸಬೇಕು ಎಂದು ಕರೆ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಮತದಾನ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅಧಿಕಾರಿಗಳು ನಿಮ್ಮ ಬಾಗಿಲಿಗೆ ಬಂದಾಗ ಮನೆ ಸದಸ್ಯರು ಸೂಕ್ತ ಮಾಹಿತಿ ನೀಡಿ ಮತದಾನ ಪಟ್ಟಿಯಲ್ಲಿ ಹೆಸರನ್ನು ಅಗತ್ಯ ದಾಖಲಾತಿಗಳನ್ನು ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಮತದಾನ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆ ಅಥವಾ ಹೆಸರು ಕೈ ಬಿಟ್ಟಿದೆಯೇ ಎಂಬುವುದು ಪರಿಶೀಲಿಸಿ ಮಾಹಿತಿ ಪಡೆಯಬೇಕು ಎಂದರು.ಈ ವೇಳೆ ರಾಜ್ಯ ಜೆಡಿಎಸ್ ಕಾನೂನು ವಿಭಾಗದ ಮುಖ್ಯಸ್ಥ ಪ್ರದೀಪ್, ಜೆಡಿಎಸ್ ವಕ್ತಾರ ಮಹೇಶ್ ಅವರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಎಲ್.ಎ -2ಗಳು ಯಾವ ರೀತಿ ಕರ್ತವ್ಯ ನಿರ್ವಹಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಪುರಸಭೆ ಮಾಜಿ ಅಧ್ಯಕ್ಷ ಎಂ.ಐ.ಪ್ರವೀಣ್, ಗ್ರಾಪಂ ಮಾಜಿ ಅಧ್ಯಕ್ಷ ಕರಡಕೆರೆ ಹನುಮಂತೇಗೌಡ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ರಾಮಚಂದ್ರು, ಮುಖಂಡರಾದ ಮಹೇಶ್, ಗುರುದೇವರಹಳ್ಳಿ ಅರವಿಂದ್, ಕೊಳಗೆರೆ ಶೇಖರ್, ಕೆ.ಪಿ.ದೊಡ್ಡಿ ಶಿವರಾಮು, ಕೆಸ್ತೂರು ರಾಜಣ್ಣ, ವೆಂಕಟಾಚಲಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.