ಸಾರಾಂಶ
ಕನ್ನಡಪ್ರಭ ವಾರ್ತೆ ಧಾರವಾಡ
ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ನಿಭಾಯಿಸಲು ಅಗತ್ಯವಿರುವಷ್ಟು ಅನುದಾನ ಬಿಡುಗಡೆ ಮಾಡಬೇಕು. ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹25 ಸಾವಿರ ಬೆಳೆಹಾನಿ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಜೆಡಿಎಸ್ ಉಗ್ರ ಹೋರಾಟ ನಡೆಸುತ್ತದೆ ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.ಕಳೆದ ಮೂರು ದಿನಗಳಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ಅಧ್ಯಯನ ನಡೆಸಿದ ಜೆಡಿಎಸ್ ಮುಖಂಡರ ತಂಡ ಸೋಮವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಈ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಬರೋಬ್ಬರಿ ₹33 ಸಾವಿರ ಕೋಟಿ ಬರದಿಂದಾಗಿ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರವೇ ಹೇಳಿಕೊಂಡಿದೆ. ಧಾರವಾಡ ಜಿಲ್ಲೆಯಲ್ಲಿ ₹1000 ಕೋಟಿಗೂ ಅಧಿಕ ಹಾನಿಯಾಗಿದೆ. ಆದರೆ, ಜಿಲ್ಲೆಗೆ ಬರೀ ₹12 ಕೋಟಿ ಮಾತ್ರ ನೀಡಲಾಗಿದೆ. ಈ ಹಣದಲ್ಲಿ ಬರ ಪರಿಹಾರ ಕೈಗೊಳ್ಳುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.ಎಲ್ಲೂ ಬೆಳೆಯೇ ಇಲ್ಲ. ಅದೆಷ್ಟೋ ಜಮೀನುಗಳಲ್ಲಿ ರೈತರು ಬಿತ್ತನೆಯನ್ನೇ ಮಾಡಿಲ್ಲ. ಕೆಲವೆಡೆ ಬಿತ್ತನೆ ಮಾಡಿದ್ದರೂ ಬೆಳೆ ಬಂದಿಲ್ಲ. ಬಂದರೂ ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ಕೆಲವೆಡೆ ಬೆಳೆ ಉಳಿಸಿಕೊಳ್ಳಲು ಚೊಂಬಿನಿಂದ ನೀರುಣಿಸುವ ಕೆಲಸದಲ್ಲಿ ರೈತಾಪಿ ವರ್ಗ ನಿರತವಾಗಿದೆ. ಆದರೆ, ಸರ್ಕಾರ ಮಾತ್ರ ಇದ್ಯಾವುದನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಎಲ್ಲೂ ಬರ ಪರಿಹಾರ ಕಾಮಗಾರಿಗಳು ನಡೆಯುತ್ತಲೇ ಇಲ್ಲ. ನರೇಗಾ ಕಾಮಗಾರಿಗಳು ನಡೆಯುತ್ತಿಲ್ಲ. ಇನ್ನು ಮಳೆಯಿಲ್ಲದ ಕಾರಣ ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ. ಇನ್ನಷ್ಟು ದಿನ ಕಳೆದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಸರ್ಕಾರದ ಮಂತ್ರಿಗಳು, ಶಾಸಕರು ಬರೀ ಪಟ್ಟಣ, ನಗರ ಪ್ರದೇಶಗಳಿಗೆ ಸೀಮಿತವಾಗಿದ್ದಾರೆ. ಹಳ್ಳಿಗಳತ್ತ ತೆರಳುತ್ತಲೇ ಇಲ್ಲ ಎಂದು ಕಿಡಿಕಾರಿದ್ದಾರೆ.ಕೂಡಲೇ ಬರ ಪರಿಹಾರ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ಕೂಲಿ ಅರಸಿ ವಲಸೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ನೀಡಬೇಕು. ಪ್ರತಿ ಎಕರೆಗೆ ಕನಿಷ್ಠವೆಂದರೂ ₹25 ಸಾವಿರ ಬೆಳೆಹಾನಿ ಪರಿಹಾರ ನೀಡಬೇಕು. ಅದಕ್ಕಾಗಿ ತಕ್ಷಣವೇ ಅನುದಾನ ಬಿಡುಗಡೆ ಮಾಡಬೇಕು ಎಂದು ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ.
ಮೂರು ದಿನಗಳ ಕಾಲ ಅಮ್ಮಿನಬಾವಿ, ನರೇಂದ್ರ, ಕಲಘಟಗಿ, ಹುಬ್ಬಳ್ಳಿ, ಕುಂದಗೋಳ ನವಲಗುಂದ ಅಣ್ಣಿಗೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬರ ಅಧ್ಯಯನ ಕೈಗೊಳ್ಳಲಾಯಿತು.ಮನವಿ ಸಲ್ಲಿಸುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಆಲ್ಕೋಡ ಹನುಮಂತಪ್ಪ, ತೀವ್ರ ಸ್ವರೂಪದ ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ. ವೈಜ್ಞಾನಿಕವಾಗಿ ಬರಗಾಲ ಅಧ್ಯಯನ ನಡೆದಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿನ ಬರಗಾಲದ ಸ್ಥಿತಿ ಕುರಿತು ಅಧಿಕಾರಿಗಳಿಗೆ ಸರಿಯಾದ ಮಾಹಿತಿ ಇಲ್ಲ, ಬೆಳೆ ಹಾನಿಯಾಗಿರುವ ರೈತರಿಗೆ ವೈಜ್ಞಾನಿಕ ಪರಿಹಾರ ವಿತರಣೆ ಮಾಡಲು ಸರ್ಕಾರ ವಿಫಲವಾಗಿದೆ ಎಂದರು.ರೈತರ ಹೊಲಗಳಿಗೆ ಧಾರವಾಡ ಜಿಲ್ಲಾ ಜೆಡಿಎಸ್ ಘಟಕದ ಬರ ಅಧ್ಯಯನ ತಂಡ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿ ಕುರಿತು ಅಧ್ಯಯನ ಮಾಡಿದಾಗ ರೈತರು ತಮ್ಮ ಅಳಲು ತೋಡಿಕೊಂಡಿದ್ದು, ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಬರ ಪರಿಹಾರ ಶೀಘ್ರವಾಗಿ ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಬರ ಅಧ್ಯಯನ ತಂಡದಲ್ಲಿ ಮಾಜಿ ಸಚಿವ ಕೆ.ಎನ್. ಗಡ್ಡಿ, ಜೆಡಿಎಸ್ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ಗ್ರಾಮೀಣ ಜಿಲ್ಲಾಧ್ಯಕ್ಷ ಬಿ.ಬಿ. ಗಂಗಾಧರಮಠ, ಮಂಜುನಾಥ ಹಗೇದಾರ ಸೇರಿದಂತೆ ಹಲವರು ಇದ್ದರು.