ಸಾರಾಂಶ
ಹೊಸಪೇಟೆ: ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ತನಿಖೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಶಿಷ್ಟಾಚಾರ ಉಲ್ಲಂಘಿಸಿ ಟೀಕಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಹಲವು ಭ್ರಷ್ಟಾಚಾರದ ಆರೋಪಗಳಿವೆ. ಹಲವು ಆಯಕಟ್ಟಿನ ಜಾಗಗಳಲ್ಲಿ ಕೆಲಸ ನಿರ್ವಹಿಸಿರುವ ಇವರ ವಿರುದ್ಧ ಆರೋಪಗಳಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಲೋಕಾಯುಕ್ತ ಎಡಿಜಿಪಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಟೀಕಿಸಿದ್ದಾರೆ. ಇದರ ಹಿಂದೆ ಬೇರೆಯವರ ಕೈವಾಡ ಇರುವ ಶಂಕೆ ಇದೆ. ಇಡೀ ಪ್ರಕರಣವನ್ನು ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. 1998ರ ಕೇಡರ್‌ನ ಅಧಿಕಾರಿಯಾಗಿರುವ ಚಂದ್ರಶೇಖರ್, ಮೂಲತಃ ಹಿಮಾಚಲಪ್ರದೇಶ ಕೇಡರ್‌ನ ಅಧಿಕಾರಿಯಾಗಿದ್ದಾರೆ. ಸುಳ್ಳು ನೆಪ ಹೇಳಿ ಕರ್ನಾಟಕ ಕೇಡರ್‌ಗೆ ಬಂದಿದ್ದಾರೆ. ರಾಜ್ಯದಲ್ಲಿ ಆಯಕಟ್ಟಿನ ಜಾಗಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ಇವರ ವಿರುದ್ಧ ಹಲವು ಆರೋಪಗಳು ಇದ್ದರೂ ಸರಿಯಾಗಿ ತನಿಖೆ ಆಗಿಲ್ಲ. ಹಾಗಾಗಿ ಇವರ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿಪತ್ರ ರವಾನಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ. ಕೊಟ್ರೇಶ್, ಮುಖಂಡರಾದ ನಾಣ್ಯಾಪುರ ಕೃಷ್ಣಮೂರ್ತಿ, ಬಿ.ಎಂ. ಸೋಮಶೇಖರ್, ವೈ. ಮಲ್ಲಿಕಾರ್ಜುನ, ಎಸ್. ಕೊಟ್ರೇಶ್, ಕಪ್ಲಿ ಚಂದ್ರಕಾಂತ್, ಕಾರ್ಯಪ್ಪ ಮತ್ತಿತರರಿದ್ದರು.ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.