ಕರ್ನಾಟಕ ಹಾಲು ಮಹಾಮಂಡಳದ ವತಿಯಿಂದ ವಿತರಿಸುವ ಹಾಲು, ಮೊಸರು, ತುಪ್ಪ, ಬೆಣ್ಣೆ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆಯನ್ನು ₹8ರಿಂದ ₹35ರ ವರೆಗೆ ಹೆಚ್ಚಿಸಿರುವುದನ್ನು ಮರುಪರಿಶೀಲಿಸಿ ಹಿಂಪಡೆಯಬೇಕು.

ಹುಬ್ಬಳ್ಳಿ:

ಹಾಲು ಹಾಗೂ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಮತ್ತು ಬಸ್ ಪ್ರಯಾಣ ದರ ಹೆಚ್ಚಳ ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಶುಕ್ರವಾರ ನಗರದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.

ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ಹಾಲು ಮಹಾಮಂಡಳದ ವತಿಯಿಂದ ವಿತರಿಸುವ ಹಾಲು, ಮೊಸರು, ತುಪ್ಪ, ಬೆಣ್ಣೆ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆಯನ್ನು ₹8ರಿಂದ ₹35ರ ವರೆಗೆ ಹೆಚ್ಚಿಸಿರುವುದನ್ನು ಮರುಪರಿಶೀಲಿಸಿ ಹಿಂಪಡೆಯಬೇಕು. ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವನ್ನು ಶೇ.23ರಷ್ಟು ಹೆಚ್ಚಿಸಿರುವ ನಿರ್ಧಾರವನ್ನೂ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಜೆಡಿಎಸ್ ಮುಖಂಡ ಬಿ.ಬಿ. ಗಂಗಾಧರಮಠ ಮಾತನಾಡಿ, ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ, ಕೆಳಮಧ್ಯಮ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಮತ್ತಷ್ಟು ಹೊರೆಯಾಗಿದೆ. ಇವು ನಿತ್ಯ ಬಳಕೆಯ ಅಗತ್ಯ ಆಹಾರ ಪದಾರ್ಥಗಳಾಗಿದ್ದು, ಬೆಲೆ ಹೆಚ್ಚಳ ಜನರ ಜೀವನ ನಿರ್ವಹಣೆಯ ಮೇಲೆ ನೇರ ಪರಿಣಾಮ ಬೀರಲಿದೆ ಎಂದರು.

ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿಯಿಂದ ರೈತರು ಹಾಗೂ ಗ್ರಾಮೀಣ ಜನತೆ ಸಂಕಷ್ಟದಲ್ಲಿದ್ದಾರೆ. ಕುಡಿಯುವ ನೀರು, ಜಾನುವಾರುಗಳ ಮೇವು ಹಾಗೂ ನೀರಿನ ಕೊರತೆಯ ಜತೆಗೆ ಕೃಷಿ ಉತ್ಪಾದನೆಯೂ ಕುಸಿದಿದೆ. ಅಕ್ಕಿ, ಸಕ್ಕರೆ, ಬೇಳೆಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಹೊರಿಸಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ದರ ಹೆಚ್ಚಳದ ಹೊರೆಯನ್ನು ಸಾರ್ವಜನಿಕರ ಮೇಲೆ ಹಾಕುವ ಬದಲು ಸರ್ಕಾರವೇ ಭರಿಸಬೇಕು. ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯುವ ಜತೆಗೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು. ಬರಪೀಡಿತ ಗ್ರಾಮಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು, ನೀರಿನ ವ್ಯವಸ್ಥೆ ಕಲ್ಪಿಸಬೇಕು. ರೈತರು ಮತ್ತು ಗ್ರಾಮೀಣ ಕುಟುಂಬಗಳಿಗೆ ವಿಶೇಷ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಸಚಿವ ಕೆ.ಎನ್. ಗಡ್ಡಿ, ನವೀನಕುಮಾರ ಮಡಿವಾಳರ, ರಾಜಶೇಖರ ಮತ್ತಿಹಳ್ಳಿ, ಡಾ. ಇಸ್ಮಾಯಿಲ್ ಬನ್ನಿಗೊಳ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.