ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ಮುಖಂಡರ ಒತ್ತಾಯ

| Published : Oct 21 2024, 12:47 AM IST / Updated: Oct 21 2024, 01:23 PM IST

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ಮುಖಂಡರ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

  ಚನ್ನಪಟ್ಟಣ    ತಾಲೂಕಿನ ಜೆಡಿಎಸ್ ಮುಖಂಡರು ಕ್ಷೇತ್ರವನ್ನು ಪಕ್ಷಕ್ಕೆ ಉಳಿಸಿಕೊಂಡು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸುವಂತೆ ಒಕ್ಕೊರಲ ನಿರ್ಧಾರ ಕೈಗೊಂಡಿದ್ದಾರೆ.

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಟಿಕೆಟ್‌ಗಾಗಿ ಜೆಡಿಎಸ್-ಬಿಜೆಪಿ ಮಧ್ಯೆ ಜಟಾಪಟಿ ಮುಂದುವರಿದಿರುವ ಮಧ್ಯೆಯೇ ತಾಲೂಕಿನ ಜೆಡಿಎಸ್ ಮುಖಂಡರು ಕ್ಷೇತ್ರವನ್ನು ಪಕ್ಷಕ್ಕೆ ಉಳಿಸಿಕೊಂಡು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸುವಂತೆ ಒಕ್ಕೊರಲ ನಿರ್ಧಾರ ಕೈಗೊಂಡಿದ್ದಾರೆ.

ಭಾನುವಾರ ಅನೌಪಚಾರಿಕ ಸಭೆ ನಡೆಸಿರುವ ಜೆಡಿಎಸ್ ಮುಖಂಡರು, ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ಗೆದ್ದ ಕ್ಷೇತ್ರವಾಗಿದೆ. ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಷೇತ್ರವನ್ನು ಜೆಡಿಎಸ್‌ಗೆ ಉಳಿಸಿಕೊಂಡು ನಿಖಿಲ್ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿಯಾಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಶಕ್ತಿ ಪ್ರದರ್ಶನಕ್ಕೆ ಜೆಡಿಎಸ್ ಸಜ್ಜು: ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಬಲಿಷ್ಠವಾಗಿದೆ. ಈ ಹಿಂದಿನ ಎರಡು ಚುನಾವಣೆಯಲ್ಲಿ ಜೆಡಿಎಸ್ ಅತಿಹೆಚ್ಚು ಮತಗಳಿಂದ ಗೆಲುವು ಸಾಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಜೆಡಿಎಸ್ ಗೆಲುವು ಸಾಧಿಸಿರುವ ಕ್ಷೇತ್ರದ ಟಿಕೆಟ್‌ಗಾಗಿ ಇಷ್ಟು ಗೊಂದಲ ನಡೆದಿರುವುದು ವಿಷಾದನೀಯ. ಈ ಹಿನ್ನೆಲೆಯಲ್ಲಿ ಮಂಗಳವಾರ ದೊಡ್ಡಮಟ್ಟದಲ್ಲಿ ಸಭೆ ನಡೆಸುವ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಸುವ ಕುರಿತು ಕೆಲ ಮುಖಂಡರು ಆಗ್ರಹಿಸಿದ್ದಾರೆ.

ಸಿ.ಪಿ.ಯೋಗೇಶ್ವರ್ ಅವರ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಇನ್ನು ೨ ವರ್ಷ ಇದೆ. ಈ ಹಿನ್ನೆಲೆಯಲ್ಲಿ ಅವರು ಕ್ಷೇತ್ರದ ಟಿಕೆಟ್‌ಗಾಗಿ ಹಠ ಹಿಡಿಯದೇ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕು. ಆ ಮೂಲಕ ಅವರೇ ನಿಂತು ಮೈತ್ರಿ ಧರ್ಮ ಪಾಲನೆಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಡುವುದೇ ಸೂಕ್ತ. ಇದನ್ನು ಬಿಜೆಪಿ ವರಿಷ್ಠರು ಮನಗಾಣಬೇಕು ಎಂದು ತಿಳಿಸಿದ್ದಾರೆ.

ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು, ಮುಖಂಡ ಪ್ರಸನ್ನ ಪಿ.ಗೌಡ, ಒಕ್ಕಲಿಗರ ಸಂಘದ ನಿರ್ದೇಶಕ ಹಾಪ್‌ಕಾಮ್ಸ್ ನಾಗರಾಜು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಮು ಇತರರಿದ್ದರು.

ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಟಿಕೆಟ್ ಅನ್ನು ಕ್ಷೇತ್ರಕ್ಕೆ ಉಳಿಸಿಕೊಂಡು ನಿಖಿಲ್‌ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿ ಮಾಡಬೇಕೆಂಬುದು ಕಾರ್ಯಕರ್ತರ ಒತ್ತಾಸೆ. ಈ ಹಿನ್ನೆಲೆಯಲ್ಲಿ ಒಂದು ಸಭೆ ನಡೆಸಿ ಒಗ್ಗಟ್ಟು ಪ್ರದರ್ಶಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ವಿಚಾರವನ್ನು ಪಕ್ಷದ ವರಿಷ್ಠರಾದ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಗಮನಕ್ಕೆ ತರಲಾಗುವುದು.

-ಜಯಮುತ್ತು, ಜೆಡಿಎಸ್ ತಾಲೂಕು ಅಧ್ಯಕ್ಷ