ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು, ಕೂಲಿ ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ

ಬಳ್ಳಾರಿ: ಹಾಲು, ಮೊಸರು, ತುಪ್ಪ ಸೇರಿದಂತೆ ವಿವಿಧ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಾಗೂ ಸರ್ಕಾರಿ ಬಸ್‌ಗಳ ಪ್ರಯಾಣ ದರ ಹೆಚ್ಚಳ ಖಂಡಿಸಿ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದಿಂದ ಬುಧವಾರ ನಗರದ ಗಡಗಿಚನ್ನಪ್ಪ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮುಖವಾಡ ಧರಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಬೆಲೆ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ, ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು, ಕೂಲಿ ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲು, ಮೊಸರು, ತುಪ್ಪ, ಬೆಣ್ಣೆ, ಪನ್ನೀರ್ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಿಸಿರುವುದು ಜನಸಾಮಾನ್ಯರ ಜೀವನ ನಿರ್ವಹಣೆಗೆ ಮತ್ತಷ್ಟು ಹೊರೆಯಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳು ಪ್ರತಿಯೊಂದು ಕುಟುಂಬದ ದೈನಂದಿನ ಅಗತ್ಯ ವಸ್ತುಗಳಾಗಿವೆ. ಇವುಗಳ ಬೆಲೆ ಏರಿಕೆಯು ನೇರವಾಗಿ ಬಡ ಕುಟುಂಬಗಳ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಬೇಕು. ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳದ ನಿರ್ಧಾರ ತಕ್ಷಣ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆ ರೈತರು, ಗ್ರಾಮೀಣ ಕುಟುಂಬಗಳು ಹಾಗೂ ಜಾನುವಾರು ಸಾಕಾಣಿಕೆದಾರರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸುವುದು ಜನರ ಮೇಲೆ ಮತ್ತಷ್ಟು ಹೊರೆ ಹೊರಿಸಿದಂತಾಗುತ್ತದೆ. ಬರಪೀಡಿತ ರೈತರು ಹಾಗೂ ಜಾನುವಾರು ಸಾಕಾಣಿಕೆದಾರರಿಗೆ ವಿಶೇಷ ಪರಿಹಾರ ಮತ್ತು ಪ್ಯಾಕೇಜ್ ಘೋಷಿಸಬೇಕು. ಬರಪೀಡಿತ ಗ್ರಾಮಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು.

ಅಕ್ಕಿ, ಸಕ್ಕರೆ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ನಿಯಂತ್ರಣಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಜನಸಾಮಾನ್ಯರ ಸಂಕಷ್ಟ ಗಂಭೀರವಾಗಿ ಪರಿಗಣಿಸಿ ಬೆಲೆ ಏರಿಕೆ ನಿಯಂತ್ರಣಕ್ಕೆ ಮುಂದಾಗಬೇಕು. ಇಲ್ಲವಾದಲ್ಲಿ ಜೆಡಿಎಸ್ ವತಿಯಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಕ್ಷದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಎಸ್.ಯಲ್ಲನಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಮಧುರೈ ವಿಜಯಕುಮಾರ್, ಅಶೋಕ್ ಸಂಗನಕಲ್ಲು, ಬಾಷಾ, ಬಾವಿ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಜೆ.ಪುಷ್ಪಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.