ವಿಜಯಪುರದಲ್ಲಿಂದು ಜೆಡಿಎಸ್ ‘ಬೆಳ್ಳಿ ಹಬ್ಬ’ ಸಂಭ್ರಮ
ಕನ್ನಡಪ್ರಭ ವಾರ್ತೆ ವಿಜಯಪುರಜೆಡಿಎಸ್ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪಕ್ಷ ‘ಬೆಳ್ಳಿ ಹಬ್ಬ’ ಆಚರಿಸಿಕೊಳ್ಳುತ್ತಿದ್ದು, ‘ಕಿತ್ತೂರು ಕರ್ನಾಟಕ ಜನತಾ ಸಮಾವೇಶ’ದ ಮೂಲಕ ಉತ್ತರ ಕರ್ನಾಟಕದಲ್ಲಿ ಪಕ್ಷವನ್ನು ಪುನರುಜ್ಜೀವನಗೊಳಿಸಲು ಯತ್ನಿಸುತ್ತಿದೆ. ಇದರ ಅಂಗವಾಗಿ ಮೊದಲ ಹಂತದ ಬೃಹತ್ ಜನತಾ ಸಮಾವೇಶವನ್ನು ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದೆ. ಆ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯ ಸಿದ್ಧತೆ ನಡೆಸುತ್ತಿದೆ.
ವಿಜಯಪುರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ ಬಳಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜನೆಗೊಂಡಿದೆ. ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಹಿರಿಯ ನಾಯಕರು, ಕಿತ್ತೂರು ಕರ್ನಾಟಕದ ಪ್ರಮುಖರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ಅಂದಾಜು 2 ಲಕ್ಷ ಜನ ಭಾಗವಹಿಸಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲಾಗುತ್ತಿದೆ. ನಿಖಿಲ್ ಅವರು ಈಗಾಗಲೇ 60 ಕ್ಷೇತ್ರಗಳಲ್ಲಿ ‘ಜನರೊಂದಿಗೆ ಜನತಾದಳ’ ಅಭಿಯಾನ ನಡೆಸಿ ಸದಸ್ಯತ್ವ ನೋಂದಣಿಗೆ ದೊಡ್ಡ ಪ್ರಮಾಣದಲ್ಲಿ ಚಾಲನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಬಲಿಷ್ಠಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
----------ಕೋಟ್....ರಾಜ್ಯದ ಎಲ್ಲ ಭಾಗದಲ್ಲಿಯೂ ಪಕ್ಷದ ಸಂಘಟನೆಯನ್ನು ಗಟ್ಟಿ ಮಾಡುವುದು ನಮ್ಮ ಉದ್ದೇಶ. ಮುಖ್ಯವಾಗಿ ಕಿತ್ತೂರು ಭಾಗಕ್ಕೂ ನಮ್ಮ ಪಕ್ಷಕ್ಕೂ ಅವಿನಾಭಾವ ಸಂಬಂಧ ಇದೆ. ವಿಶೇಷವಾಗಿ ದೇವೇಗೌಡರಿಗೆ ಈ ಭಾಗದ ಜತೆ ಕರುಳಬಳ್ಳಿಯ ಬಾಂಧವ್ಯ ಇದೆ. ಕೃಷ್ಣ ಮೇಲ್ದಂಡೆ ಯೋಜನೆ ಸಾಕಾರದಲ್ಲಿ ಅವರ ಪಾತ್ರ ಬಹಳ ದೊಡ್ಡದು.- ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವರು.