ಕನ್ನಡಪ್ರಭ ವಾರ್ತೆ ಹಾಸನ
ಬಿಡದಿ ಟೌನ್ ಶಿಪ್ ಭೂಸ್ವಾಧೀನ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವು ರೈತ ವಿರೋಧಿಯಾಗಿದ್ದು, ಕೃಷಿ ಭೂಮಿ ರಕ್ಷಿಸುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲು ಹಾಗೂ ಸರ್ಕಾರದ ಗಮನ ಸೆಳೆಯಲು ಜೂನ್ ೨೧ರಂದು ಜೆಡಿಎಸ್ ವತಿಯಿಂದ ಬೃಹತ್ ರೈತ ಜಾಥಾವನ್ನು ಬೆಂಗಳೂರಿನ ಹೊಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಮೇಲೆ ಬಿಡದಿ ಭೂ ಸ್ವಾಧೀನ ವಿಚಾರವನ್ನು ಏಕೆ ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಇದು ಅನುಪಯುಕ್ತ ಭೂಮಿಯಲ್ಲ. ಇದು ರಾಜ್ಯದ ರೈತರ ಭೂ ಹಕ್ಕುಗಳು, ಕೃಷಿ ಆಧಾರಿತ ಜೀವನ ಹಾಗೂ ಭೂ ಸಂರಕ್ಷಣೆಗೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ. ಸರ್ಕಾರ ಯಾವುದೇ ಯೋಜನೆಯನ್ನು ಜಾರಿಗೆ ತರುವ ಮುನ್ನ ರೈತರು ಮತ್ತು ಸ್ಥಳೀಯ ನಿವಾಸಿಗಳ ಅಭಿಪ್ರಾಯವನ್ನು ಗೌರವಿಸಬೇಕು. ಆದರೆ ಈ ಪ್ರಕರಣದಲ್ಲಿ ಜನರ ವಿಶ್ವಾಸ ಗಳಿಸುವ ಬದಲು ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಜನರ ಅಭಿಪ್ರಾಯ ಪರಿಗಣಿಸದೆ ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಬಿಡದಿ ಭಾಗದ ಜಮೀನುಗಳನ್ನು ಕೈಗಾರಿಕಾ ಹಾಗೂ ವಾಣಿಜ್ಯ ಉದ್ದೇಶಗಳಿಗೆ ಬಳಸುವ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಣುತ್ತಿಲ್ಲ. ಭೂ ಬಳಕೆ ಬದಲಾವಣೆ, ಭೂಸ್ವಾಧೀನ ಪ್ರಕ್ರಿಯೆ, ಹೂಡಿಕೆದಾರರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ಹಾಗೂ ರೈತರಿಗೆ ನೀಡಲಾಗುತ್ತಿರುವ ಭರವಸೆಗಳ ಬಗ್ಗೆ ಸರ್ಕಾರ ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಇಲ್ಲವಾದರೆ ಸರ್ಕಾರದ ಉದ್ದೇಶದ ಬಗ್ಗೆ ಇನ್ನಷ್ಟು ಅನುಮಾನಗಳು ಮೂಡುವ ಸಾಧ್ಯತೆ ಇದೆ ಎಂದು ಹೇಳಿದರು.ರೈತರ ಧ್ವನಿಯನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಹಾಗೂ ಕೃಷಿ ಭೂಮಿಯ ಸಂರಕ್ಷಣೆಗಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೂನ್ ೨೧ರಂದು ಬೆಳಗ್ಗೆ ೯ ಗಂಟೆಗೆ ಅಂಜಿಪುರ ಗ್ರಾಮದಿಂದ ರೈತ ಜಾಥಾ ಆರಂಭವಾಗಲಿದೆ. ಈ ಜಾಥಾವು ವಿವಿಧ ಗ್ರಾಮಗಳ ಮೂಲಕ ಸಂಚರಿಸಿ ಹೊಸೂರಿನಲ್ಲಿ ಸಮಾರೋಪಗೊಳ್ಳಲಿದ್ದು, ಸಾವಿರಾರು ರೈತರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು. ಈ ಜಾಥಾ ಯಾವುದೇ ವ್ಯಕ್ತಿ ಅಥವಾ ಪಕ್ಷದ ವಿರುದ್ಧದ ರಾಜಕೀಯ ಕಾರ್ಯಕ್ರಮವಲ್ಲ, ಬದಲಾಗಿ ರೈತರ ಹಕ್ಕುಗಳ ರಕ್ಷಣೆ ಮತ್ತು ಕೃಷಿ ಭೂಮಿಯ ಸಂರಕ್ಷಣೆಯ ಪರವಾಗಿ ನಡೆಯುವ ಜನಾಂದೋಲನವಾಗಿದೆ. ರಾಜ್ಯದ ರೈತರು ತಮ್ಮ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕಾದ ಅಗತ್ಯವಿದೆ ಎಂದು ಹೇಳಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಿಲ್ಲೆಯ ಅಭಿವೃದ್ಧಿ, ನೀರಾವರಿ ಯೋಜನೆಗಳ ಅನುಷ್ಠಾನ, ರಸ್ತೆ ಮೂಲಸೌಕರ್ಯ, ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಜನಪ್ರತಿನಿಧಿಗಳು ಜಿಲ್ಲೆಯ ಹಿತಾಸಕ್ತಿಗಾಗಿ ಒಂದಾಗಿ ಕೆಲಸ ಮಾಡುವ ವಾತಾವರಣ ನಿರ್ಮಾಣವಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಮಾಧ್ಯಮ ವಕ್ತಾರ ಹೊಂಗೆರೆ ರಘು ಹೊಂಗೆರೆ ಇತರರು ಉಪಸ್ಥಿತರಿದ್ದರು.