ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಕೈಜೋಡಿಸಿ

| Published : Sep 15 2024, 01:58 AM IST

ಸಾರಾಂಶ

ರಾಮನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೆ.15ರಂದು ಹಮ್ಮಿಕೊಳ್ಳಲಾಗಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಸಂಬಂಧಿಸಿದ ಎಲ್ಲಾ ಇಲಾಖೆಗಳು ಅಧಿಕಾರಿಗಳು, ಸಿಬ್ಬಂದಿ, ನೋಡಲ್ ಅಧಿಕಾರಿಗಳು ಯಶಸ್ವಿಗೊಳಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸೂಚನೆ ನೀಡಿದರು.

ರಾಮನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೆ.15ರಂದು ಹಮ್ಮಿಕೊಳ್ಳಲಾಗಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಸಂಬಂಧಿಸಿದ ಎಲ್ಲಾ ಇಲಾಖೆಗಳು ಅಧಿಕಾರಿಗಳು, ಸಿಬ್ಬಂದಿ, ನೋಡಲ್ ಅಧಿಕಾರಿಗಳು ಯಶಸ್ವಿಗೊಳಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ಹೆಜ್ಜಾಲದಿಂದ ಪ್ರಾರಂಭಗೊಂಡು ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಗಡಿವರೆಗೆ ಮಾನವ ಸರಪಳಿ ನಿರ್ಮಿಸಬೇಕಿದೆ. ಜಿಲ್ಲೆಯಲ್ಲಿ ಮಾನವ ಸರಪಳಿ ಹಾದು ಹೋಗುವ ಮಾರ್ಗದಲ್ಲಿ ಪ್ರತಿ ನೂರು ಮೀಟರ್ ಹಾಗೂ ಪ್ರತಿ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅಧಿಕಾರಿಗಳು, ಸಿಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಗದಿತ ಸಮಯದೊಳಗೆ ಹಾಜರಾಗಿ ಸರಪಳಿ ನಿರ್ಮಿಸಲು ಅನುಕೂಲವಾಗುವಂತೆ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ಸಮಪರ್ಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಯಾವುದೇ ರೀತಿಯ ಸಂವಹನ ಕೊರತೆ ಎದುರಾಗಬಾರದು. ಪ್ರತಿಯೊಬ್ಬ ಅಧಿಕಾರಿಯೂ ತಮಗೆ ನೀಡಿರುವ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಈ ಮಾನವ ಸರಪಳಿಗೆ ಮಾನವ ಸಂಪನ್ಮೂಲವನ್ನು ತರಲು ಅಗತ್ಯವಿರುವೆಡೆ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಈ ಸರಪಳಿಯು ಹಾದು ಹೋಗುವ ಮಾರ್ಗಸೂಚಿ ಬಗ್ಗೆ ಹಾಗೂ ಅಲ್ಲಿ ನಿಯೋಜಿಸಿರುವ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಪೂರ್ವ ಮಾಹಿತಿ ನೀಡಬೇಕು. ಅಂದು ಬೆಳಿಗ್ಗೆ 8 ಗಂಟೆಗೆ ಸ್ಥಳದಲ್ಲಿ ಹಾಜರಿರಬೇಕು. ಈ ಕಾರ್ಯಕ್ರಮ ಬೆಳಿಗ್ಗೆ 8.30ರಿಂದ 10.30ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿಯವರು ಅಂದು ಈ ಮಾರ್ಗದಲ್ಲಿ ವಾಹನ ದಟ್ಟಣೆ ಇರದಂತೆ ಎಚ್ಚರ ವಹಿಸಲಾಗಿದೆ ಎಂದು ಯಶವಂತ್ ತಿಳಿಸಿದರು.

ಅಂದು ಸೆ.15 ಭಾನುವಾರವಾದರೂ ಕಾರ್ಯಕ್ರಮಕ್ಕೆ ಅಧಿಕಾರಿಗಳು, ಸಿಬ್ಬಂದಿಗೆ ರಜೆ ಇರುವುದಿಲ್ಲ, ಅವರೆಲ್ಲರೂ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲೇಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ತಮಗೆ ನೀಡಿದ ಪಾಯಿಂಟ್ ಮಾರ್ಗದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳನ್ನು ಸಮಯಕ್ಕೆ ಸರಿಯಾಗಿ ಕರೆ ತರಬೇಕು, ಶಾಲಾ ವಿದ್ಯಾರ್ಥಿಗಳನ್ನು ಆಯಾ ಶಾಲಾ ವ್ಯಾಪ್ತಿಯಲ್ಲೇ ನಿಯೋಜಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್‌................

ಮಾನವ ಸರಪಳಿ ನಿರ್ಮಾಣಕ್ಕೆ ಸಹಕರಿಸಿ: ಡಿಸಿ

ರಾಮನಗರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಜಿಲ್ಲೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಮಾನವ ಸರಪಳಿ ಕಾರ್ಯಕ್ಕೆ ಜಿಲ್ಲೆಯ ಎಲ್ಲಾ ಸಂಘ-ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳೆಲ್ಲರೂ ಭಾಗವಹಿಸಿ ಭಾರತೀಯ ಸಂವಿಧಾನದ ಆಶೋತ್ತರಗಳನ್ನು ಈಡೇರಿಸಬೇಕು, ಸಂಘ-ಸಂಸ್ಥೆಗಳ ಸಹಕಾರದಿಂದ ಈ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಲಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ವಿಶ್ವಾಸ ವ್ಯಕ್ತ ಪಡಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಕುರಿತು ಜಿಲ್ಲೆಯ ಸಂಘ-ಸಂಸ್ಥೆಗಳ ಪ್ರಮುಖರೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮಾನವ ಸರಪಳಿ ನಿರ್ಮಾಣದ ಕುರಿತು ನಗರ ಸಭೆ ವಾಹನಗಳ ಮೂಲಕ ಗೀತೆ ಮತ್ತು ಪ್ರಜಾಪ್ರಭುತ್ವದ ಮಹತ್ವ ಸಾರುವ ಹಾಡುಗಳ ಮೂಲಕ ಪ್ರಚಾರ ಮಾಡಲಾಗುವುದು. ನೀಡಿರುವ ಪಾಯಿಂಟ್‌ಗಳಲ್ಲಿ ಸಾರ್ವಜನಿಕರನ್ನು ಸೇರಿಸಿ ಮಾನವ ಸರಪಳಿಯನ್ನು ಅಂದು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಯವರು ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪ್ರಮುಖರನ್ನು ಕೋರಿದರು.

ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಕಾರ್ಯಕ್ರಮ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಮುಖಂಡರಾದ ಚಲುವರಾಜು, ವೆಂಕಟೇಶ್, ಹರೀಶ್ ಬಾಲು, ಗೋವಿಂದರಾಜು, ಶ್ರೀನಿವಾಸ್, ಶಿವಣ್ಣ, ನೀಲಿ ರಮೇಶ್, ಗುರುಮೂರ್ತಿ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

14ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ದ ಕುರಿತು ಜಿಲ್ಲೆಯ ಸಂಘ-ಸಂಸ್ಥೆಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಯಶವಂತ್ ಸಭೆ ನಡೆಸಿದರು.