ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಸ್ಥಳೀಯ ಸಚಿವರು, ಜನಪ್ರತಿನಿಧಿಗಳ ಸಹಯೋಗದಲ್ಲಿ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಜಿಲ್ಲೆಯ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದೆ. ಇದರಿಂದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ರಾಜ್ಯ, ರಾಷ್ಟ್ರಕ್ಕೆ ಮಾದರಿ ಸಂದೇಶ ಹೋಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಜಿಪಂ ಕಾರ್ಯಾಲಯದ ಎನ್.ಎಸ್.ಸಿ ಸಭಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲಾಮಟ್ಟದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಅಧಿಕಾರಿಗಳು, ಅನುಷ್ಠಾನ ಸಮಿತಿ ಸದಸ್ಯರು ನಿರಂತರ ಶ್ರಮಿಸತ್ತಿದ್ದಾರೆ. ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಿ ಎಲ್ಲ ಜನರಿಗೆ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.ಗೃಹಲಕ್ಷ್ಮೀ ಹಣದಿಂದ ರಾಯಬಾಗ ತಾಲೂಕಿನ ವೃದ್ಧೆ ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿಸಿದರು. ಗೋಕಾಕ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳಿಗೆ ತೊಡಗಿಕೊಳ್ಳಲು ಎತ್ತು ಖರೀದಿಸಿದ್ದಾರೆ. ಇದು ಗ್ಯಾರಂಟಿ ಯೋಜನೆಗಳ ಬಳಕೆಯ ಹೆಮ್ಮೆಯ ವಿಚಾರ ಎಂದರು.ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಯೋಜನೆ ಸರಿಯಾಗಿ ತಲುಪಬೇಕು. 3 ತಿಂಗಳಿಂದ ಪಡಿತರ ಪಡೆಯದ ಫಲಾನುಭವಿಗಳ ಪಟ್ಟಿ ಮಾಡಬೇಕು. ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿದವರು ಪಡಿತರ ಪಡೆಯದೆ ಇದ್ದಲ್ಲಿ ಅಂತಹವರನ್ನು ಪಟ್ಟಿ ಮಾಡಿ ಜಿಲ್ಲಾ ಸಮಿತಿಗೆ ವರದಿ ಸಲ್ಲಿಸಬೇಕು. ಪಡಿತರ ಪಡೆಯಲು ಬಾರದ ಅಂಗವಿಕಲರ ಮನೆಗಳಿಗೆ ಓಟಿಪಿ ಆಧಾರಿತ ಪಡಿತರ ತಲುಪಿಸಬೇಕು. ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಗೃಹ ಬಳಕೆಯ ಅಂದಾಜು 10 ಲಕ್ಷ 34 ಸಾವಿರ ಜನರು 200 ಯುನಿಟ್ ಒಳಗೆ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ. 35 ಸಾವಿರ ಅರ್ಹ ಜನರು ಗೃಹಜ್ಯೋತಿ ಯೋಜನೆ ಬಳಕೆ ಮಾಡುತ್ತಿಲ್ಲ. ಹಾಗಾಗಿ ಹಂತವರಿಗೆ ಇದರ ಕುರಿತು ಮಾಹಿತಿ ನೀಡಿ ನೋಂದಣಿ ಮಾಡಿಸಲಾಗುತ್ತಿದೆ. ಯೋಜನೆಗೆ ಪ್ರತಿ ವರ್ಷಕ್ಕೆ ಸುಮಾರು ₹ 531 ಕೋಟಿ ವೆಚ್ಚ ತಗುಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು.ಗೃಹಲಕ್ಷ್ಮೀ ಯೋಜನೆಯಡಿ 10 ಲಕ್ಷ 77 ಸಾವಿರ ಫಲಾನುಭವಿಗಳಿದ್ದು, ಹಣ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲತೆ ಹೊಂದಿರುವ ಫಲಾನುಭವಿಗಳನ್ನು ಗುರುತಿಸಿ ಅವರ ಕುರಿತು ಪ್ರಚಾರ ಮಾಡಬೇಕು. ಯುವ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 11 ಲಕ್ಷ 30 ಸಾವಿರ ಪದವಿಧರರು, ಡಿಪ್ಲೋಮಾ ಮಾಡಿದವರಿಗೆಹಣ ಸಂದಾಯ ಮಾಡಲಾಗಿದೆ ಎಂದು ತಿಳಿಸಿದರು.ಶಕ್ತಿ ಯೋಜನೆಯಡಿ 3 ವಿಭಾಗಗಳಲ್ಲಿ 15 ಘಟಕಗಳಿವೆ. ಜಾರಿಯಾದ 496 ದಿನಗಳಲ್ಲಿ ಪ್ರತಿ ದಿನ 4 ಲಕ್ಷ 89 ಸಾವಿರ ಮಹಿಳೆಯರು ಪ್ರಯಾಣಿಸಿದ್ದಾರೆ. ಇದಕ್ಕೆ ಸರ್ಕಾರ 1.15 ಕೋಟಿ ವೆಚ್ಚ ಭರಿಸುತ್ತಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ವಿವರಿಸಿದರು.ಬೆಳಗಾವಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿದರು.
ಜಿಪಂ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಸಭೆ ನಿರ್ವಹಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ನಾಗರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸಮಿತಿ ಸದಸ್ಯರು ಸಭೆಯಲ್ಲಿ ಇದ್ದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗದಂತೆ ನಿಗಾವಹಿಸಿ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸದಸ್ಯರು ಕಾರ್ಯ ನಿರ್ವಹಿಸಬೇಕು.
- ಎಸ್.ಆರ್.ಪಾಟೀಲ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷರು.