ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಯುವಜನರನ್ನು ತಂಬಾಕು ವ್ಯಸನದಿಂದ ಮುಕ್ತಗೊಳಿಸುವ ಉದ್ದೇಶದಿಂದ 60 ದಿನಗಳ ತಂಬಾಕು ಮುಕ್ತ ಯುವ ಅಭಿಯಾನ ಹಮ್ಮಿಕೊಂಡಿದೆ.

ಹೊಸಪೇಟೆ: ಯುವ ಸಮುದಾಯ ತಂಬಾಕು ಮತ್ತು ನಿಕೋಟಿನ್ ವ್ಯಸನದಿಂದ ದೂರವಿರಿಸಿ ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಯುವಕರು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡಮನಿ ಹೇಳಿದರು.

ನಗರದ ಮಹಾವೀರ ಜೈನ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಯುವಜನರನ್ನು ತಂಬಾಕು ವ್ಯಸನದಿಂದ ಮುಕ್ತಗೊಳಿಸುವ ಉದ್ದೇಶದಿಂದ 60 ದಿನಗಳ ತಂಬಾಕು ಮುಕ್ತ ಯುವ ಅಭಿಯಾನ ಹಮ್ಮಿಕೊಂಡಿದೆ. ಡಿ.26ರವರೆಗೆ ನಡೆಯುವ ಈ ಅಭಿಯಾನ ಜಿಲ್ಲೆಯಾದ್ಯಂತ ತಂಬಾಕಿಗೆ ಬೇಡ ಎನ್ನಿ ಎಂಬ ಘೋಷವಾಕ್ಯದೊಂದಿಗೆ ವಿವಿಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಶಾಲಾ ​ಕಾಲೇಜುಗಳನ್ನು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳನ್ನಾಗಿ ರೂಪಿಸಲು ಅಗತ್ಯ ಮಾರ್ಗಸೂಚಿ ಜಾರಿಗೊಳಿಸಲಾಗುತ್ತಿದೆ. ಕೋಟ್ಪಾ​2003 ಕಾಯ್ದೆಯಡಿ ಶಿಕ್ಷಣ ಸಂಸ್ಥೆಗಳ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಲಾಗುತ್ತಿದೆ. 18 ವರ್ಷದೊಳಗಿನವರಿಗೆ ತಂಬಾಕು ಮಾರಾಟ ನಿಷೇಧ ಸೇರಿದಂತೆ ಇ​ಸಿಗರೇಟ್ ನಿಷೇಧಕ್ಕೆ ಸಂಬಂಧಿಸಿದ ಕಾನೂನುಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸ್ಥಳೀಯ ಗ್ರಾಪಂ ಸಹಕಾರದೊಂದಿಗೆ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಮೈ ಭಾರತ್ ಸ್ವಯಂಸೇವಕರ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮತ್ತು ಜಾಗೃತಿ ಸಂದೇಶ ಹಂಚಿಕೊಳ್ಳುವ ಮೂಲಕ ಯುವಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ntcp.mohfw.gov.in ಪೋರ್ಟಲ್ ಮೂಲಕ ತಂಬಾಕು ವಿರೋಧಿ ಪ್ರತಿಜ್ಞೆ ಸ್ವೀಕರಿಸಿ ಪ್ರಮಾಣಪತ್ರ ಪಡೆಯಬಹುದು. ಅದಲ್ಲದೇ ತಂಬಾಕು ವ್ಯಸನದಿಂದ ಹೊರಬರಲು ಬಯಸುವವರು ರಾಷ್ಟ್ರೀಯ ಉಚಿತ ಸಹಾಯವಾಣಿ 1800​112​356 ಸಂಪರ್ಕಿಸಿ ಉಚಿತ ಆಪ್ತಸಮಾಲೋಚನೆ ಪಡೆಯಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡ, ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್, ಆರೋಗ್ಯ ನಿರೀಕ್ಷಣಾಧಿಕಾರಿ ಭೀಮೇಶ್, ಎನ್‌ಟಿಸಿಪಿ ಸಮಾಜ ಕಾರ್ಯಕರ್ತ ಭೋಜರಾಜ್, ಕಾಲೇಜಿನ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.