ಕನ್ನಡ ಭಾಷೆ ನಮ್ಮ ನಾಡಿನ ಅಸ್ಮಿತೆ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ. ಕನ್ನಡ ನಾಡು–ನುಡಿಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಶಾಸಕ ಸಮರ್ಥ್ ಶಾಮನೂರು ಆಶಯ ವ್ಯಕ್ತಪಡಿಸಿದ್ದಾರೆ.

- ಗುಂಡಿ ಸರ್ಕಲ್‌ನಲ್ಲಿ ರಾಜ್ಯೋತ್ಸವ-ಸಾಂಸ್ಕೃತಿಕ ವೈಭವ-2026

- - -

ದಾವಣಗೆರೆ: ಕನ್ನಡ ಭಾಷೆ ನಮ್ಮ ನಾಡಿನ ಅಸ್ಮಿತೆ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ. ಕನ್ನಡ ನಾಡು–ನುಡಿಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಶಾಸಕ ಸಮರ್ಥ್ ಶಾಮನೂರು ಆಶಯ ವ್ಯಕ್ತಪಡಿಸಿದರು.

ನಗರದ ಗುಂಡಿ ಸರ್ಕಲ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶುಕ್ರವಾರ ಸಂಜೆ ಆಯೋಜಿಸಲಾಗಿದ್ದ 21ನೇ ಕನ್ನಡ ರಾಜ್ಯೋತ್ಸವ ಹಾಗೂ ಸಾಂಸ್ಕೃತಿಕ ವೈಭವ–2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವಿದೆ. ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಮೂಲಕ ಕನ್ನಡ ನಾಡು ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿದೆ. ಈ ಹಿರಿಮೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದರೊಂದಿಗೆ ಕನ್ನಡ ಭಾಷೆಯ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಕನ್ನಡ ನಾಡು–ನುಡಿಯ ಬಗ್ಗೆ ಅಭಿಮಾನ ಬೆಳೆಸುವಲ್ಲಿ ಕನ್ನಡಪರ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಸಂಘಟನೆಗಳ ಕಾರ್ಯ ಶ್ಲಾಘನೀಯ. ವಿಶೇಷವಾಗಿ ಯುವಜನತೆಯಲ್ಲಿ ಕನ್ನಡಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.

ಕನ್ನಡ ರಾಜ್ಯೋತ್ಸವ ಕೇವಲ ಆಚರಣೆಗೆ ಸೀಮಿತವಾಗದೇ, ನಿತ್ಯದ ಬದುಕಿನಲ್ಲಿಯೂ ಕನ್ನಡ ಭಾಷೆಗೆ ಆದ್ಯತೆ ನೀಡುವ ಸಂಕಲ್ಪವಾಗಬೇಕು. ಕನ್ನಡದ ಗೌರವವನ್ನು ಎತ್ತಿಹಿಡಿಯುವ ಪ್ರತಿಯೊಂದು ಪ್ರಯತ್ನಕ್ಕೂ ಪ್ರೋತ್ಸಾಹ ದೊರೆಯಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭ ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಂ.ಎಸ್‌. ರಾಮೇಗೌಡ, ವಾಸುದೇವ ರಾಯ್ಕರ್‌, ಸಾಂಸ್ಕೃತಿಕ ಘಟಕದ ಅಧ್ಯಕ್ಷ ಎಚ್. ಧರ್ಮರಾಜ್, ಕಾರ್ಯದರ್ಶಿ ಈ. ಪರಮೇಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು, ಕನ್ನಡಪ್ರೇಮಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

- - -

-21ಕೆಡಿವಿಜಿ33: ದಾವಣಗೆರೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶಾಸಕ ಸಮರ್ಥ ಶಾಮನೂರು ಉದ್ಘಾಟಿಸಿದರು.