ಅನಿಷ್ಠ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಠ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಬಾಲ್ಯ ವಿವಾಹ-ಫೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯ ವಸತಿ ನಿಲಯಗಳ ವಾರ್ಡ್‌ನ ಹಾಗೂ ಶಾಲಾ ಶಿಕ್ಷಕರು ಈ ಕಾಯ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವ್ಯಾಪಕ ಜಾಗೃತಿ ಮೂಡಿಸಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯ ವಿವಾಹ ತಡೆಗೆ ಕೈಜೊಡಿಸಬೇಕು ಎಂದರು.ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ಮಕ್ಕಳ ಕ್ಷೇತ್ರಗಳ ಕಾಯ್ದೆಗಳ ಬಗ್ಗೆ ಅರಿವು ಮತ್ತು ಜಾಗೃತಿ ಅಗತ್ಯವಾಗಿದೆ. ನಮಗೆ ಹಾಕಿಕೊಟ್ಟ ಕಾರ್ಯನಿರ್ವಹಣೆಯ ಪರಿಧಿಯನ್ನು ಹೊರತುಪಡಿಸಿ,ಸಾಮಾಜಿಕ ಕಳ-ಕಳಿಯ ಹೊಂದಿ, ಸಮಾಜಮುಖಿಯಾಗಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ನಾವೆಲ್ಲರೂ ಕಾರ್ಯನಿರ್ವಹಿಸಿ,ಸಾಮಾಜಿಕ ಬದ್ಧತೆಯನ್ನು ಮೆರೆಯೋಣ.ಮಕ್ಕಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು ಅರಿತುಕೊಂಡು ಪರಿಹರಿಸಿ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಮಾತನಾಡಿ, ಮಕ್ಕಳಿಗೆ ಪಠ್ಯ ಬೋಧನೆ ಜೊತೆಗೆ ಮಕ್ಕಳಲ್ಲಿ ಸಂಸ್ಕತಿ,ಮಕ್ಕಳ ರಕ್ಷಣೆಗಾಗಿ ಇರುವ ಹಕ್ಕುಗಳ ಬಗ್ಗೆ ತಿಳಿಸಿಕೊಡಬೇಕು. ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯಲ್ಲಿ ಕಾನೂನು ಅರಿವು ಮೂಡಿಸುವ ಮೂಲಕ ಕಾಯ್ದೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಬೇಕು. ಮಕ್ಕಳ ಹಿತದೃಷ್ಟಿಯಿಂದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಕಾರ್ಯಾಗಾರದಲ್ಲಿನ ಮಾಹಿತಿಯನ್ನು ಮನೆ-ಮನೆಗೂ ಹಾಗೂ ಮಗು-ಮಗುವಿಗೂ ತಲುಪಿಸಬೇಕು ಎಂದು ಹೇಳಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಸೈಬರ್ ಅಪರಾಧದ ಕುರಿತು ಜಾಗೃತಿ ಹೊಂದುವುದು ಅತಿ ಅಗತ್ಯವಾಗಿದೆ. ಆನ್‌ಲೈನ್ ಆ್ಯಪ್ ನಂಬಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಅಪರಾಧಗಳ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಬೇಕು. ವಂಚಕರು ಎಸಗುವ ಆಮಿಷಕ್ಕೆ ಒಳಗಾಗದೇ ಸಾರ್ವಜನಿಕರು ಜಾಗೃತಿ ವಹಿಸಬೇಕು. ಸೈಬರ್ ವಂಚನೆಗೆ ಒಳಗಾದ ಸಂದರ್ಭದಲ್ಲಿ 1930 ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅವರು ಹೇಳಿದರು. ಜಿಪಂ ಸಿಇಒ ರಿಷಿ ಆನಂದ ಮಾತನಾಡಿದರು.
ವಕೀಲರು ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀಧರ ಕುಲಕರ್ಣಿ ಅವರು, ಬಾಲ್ಯ ವಿವಾಹ ಕಾಯ್ದೆ ಬಗ್ಗೆ, ವಕೀಲರು ಹಅಊ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ಪ್ರಶಾಂತ ದೇಶಪಾಂಡೆ ಅವರು ಫೋಕ್ಷೊ ಕಾಯ್ದೆಯ ಕುರಿತು, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಅವರು ಬಾಲಕಾರ್ಮಿಕ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಯ ಬಗ್ಗೆ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ಆತ್ಮಹತ್ಯೆ ತಡೆ ವಿಷಯದ ಕುರಿತಾಗಿ ಮನೋವೈದ್ಯ ಡಾ.ಮಂಜುನಾಥ ಮಸಳಿ ಅವರು ವಿಷಯ ಮಂಡಿಸಿದರು.ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಬಸಮ್ಮ ಹತ್ತರಕಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ ಹೊಸಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ, ವಾರ್ತಾಧಿಕಾರಿ ಅಮರೇಶ ದೊಡಮನಿ ಸೇರಿದಂತೆ ಜಿಲ್ಲೆಯ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ವಸತಿ ನಿಲಯಗಳ ವಾರ್ಡ್‌ನ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.