ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಭವ್ಯ ಇತಿಹಾಸವಿದೆ. ದೇಶದಲ್ಲಿಯೇ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿರುವ ಹೆಗ್ಗಳಿಕೆ ಕನ್ನಡ ಭಾಷೆಗಿದ್ದು, ಇದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿಯಾಗಿದೆ
ಹೊಸಪೇಟೆ: ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದ್ದು, ಆಧುನಿಕ ತಂತ್ರಜ್ಞಾನದ ಎಲ್ಲ ಕ್ಷೇತ್ರಗಳಲ್ಲೂ ಕನ್ನಡ ಬೆಳೆಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಕರೆ ನೀಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಭವ್ಯ ಇತಿಹಾಸವಿದೆ. ದೇಶದಲ್ಲಿಯೇ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿರುವ ಹೆಗ್ಗಳಿಕೆ ಕನ್ನಡ ಭಾಷೆಗಿದ್ದು, ಇದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದರು.
ವಿಜಯನಗರ ಸಾಮ್ರಾಜ್ಯ ಭಾರತದ ಇತಿಹಾಸದಲ್ಲಿ ಸುವರ್ಣ ಯುಗ ಸೃಷ್ಟಿಸಿದ್ದು, ವಿಶ್ವ ಪಾರಂಪರಿಕ ತಾಣವಾದ ಹಂಪಿ ನಮ್ಮ ಜಿಲ್ಲೆಯಲ್ಲಿರುವುದು ಹೆಮ್ಮೆಯ ಸಂಗತಿ. ಸುಮಾರು ನೂರು ವರ್ಷಗಳ ಹೋರಾಟದ ಫಲವಾಗಿ 1956ರ ನ.1ರಂದು ಕನ್ನಡ ಭಾಷಾವಾರು ಪ್ರದೇಶಗಳು ಒಂದಾಗಿ ಕರ್ನಾಟಕ ಏಕೀಕರಣಗೊಂಡವು. ಈ ಹೋರಾಟದಲ್ಲಿ ತ್ಯಾಗ ಮಾಡಿದ ಆಲೂರು ವೆಂಕಟರಾಯರು ಸೇರಿದಂತೆ ಎಲ್ಲ ಮಹನೀಯರು ಹಾಗೂ ಹೋರಾಟಗಾರರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.1973ರ ನ. 1ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಆಡಳಿತದಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸುವ ಮೂಲಕ ಕನ್ನಡ ಭಾಷೆಯ ರಕ್ಷಣೆಗೆ ಆದ್ಯತೆ ನೀಡಿದೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಕನ್ನಡದಲ್ಲಿಯೂ ಬರೆಯಲು ಅವಕಾಶವಿದೆ ಎಂದರು.
ಪೋಷಕರು ಮಕ್ಕಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಬೇಕು. ಇಂಗ್ಲಿಷ್ ಕಲಿಕೆಗೆ ಆದ್ಯತೆ ನೀಡುವುದರ ಜತೆಗೆ ಮಾತೃಭಾಷೆಯ ಮಹತ್ವ ತಿಳಿಸಬೇಕು. ಜಿಲ್ಲೆಯಾದ್ಯಂತ ನವೆಂಬರ್ ತಿಂಗಳಿಡೀ ಕನ್ನಡ ಹಬ್ಬದ ವಾತಾವರಣ ನಿರ್ಮಿಸಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ಸಹಬಾಳ್ವೆ, ಶಾಂತಿಯಿಂದ ನಾಡಿನ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.ಶಾಸಕ ಎಚ್.ಆರ್. ಗವಿಯಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ನಗರಸಭೆ ಅಧ್ಯಕ್ಷ ಎನ್. ರೂಪೇಶ್ ಕುಮಾರ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ್, ಎಸ್ಪಿ ಜಾಹ್ನವಿ, ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಉಪವಿಭಾಗಾಧಿಕಾರಿ ವಿವೇಕಾನಂದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಿಲ್ಲೆಯ 14 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಪರೇಡ್ ಕಮಾಂಡರ್ ಗೋವಿಂದ ನೇತೃತ್ವದಲ್ಲಿ ನಡೆದ ಪಥಸಂಚಲನದಲ್ಲಿ ಪೊಲೀಸ್ ಇಲಾಖೆ, ಮಹಿಳಾ ಪೊಲೀಸ್, ಗೃಹರಕ್ಷಕ ದಳ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಶಿಸ್ತಿನಿಂದ ಹೆಜ್ಜೆ ಹಾಕಿ ಗಮನ ಸೆಳೆದರು.