ಸಮಾಜದ ದುರ್ಬಲ ಹಾಗೂ ಅವಕಾಶ ವಂಚಿತ ವರ್ಗಗಳಿಗೆ ಸುಲಭವಾಗಿ ನ್ಯಾಯ ದೊರಕಿಸಿಕೊಡುವಲ್ಲಿ ಕಾನೂನು ಸೇವೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಡಿ.ಕೆ.ವೇಲಾ ತಿಳಿಸಿದ್ದಾರೆ.

- ರಾಷ್ಟ್ರೀಯ ಕಾನೂನು ಸೇವೆಗಳ ದಿನ ಕಾರ್ಯಕ್ರಮದಲ್ಲಿ ನ್ಯಾ.ವೇಲಾ ಸಲಹೆ

- - -

ಕನ್ನಡಪ್ರಭ ವಾರ್ತೆ ​ದಾವಣಗೆರೆ

ಸಮಾಜದ ದುರ್ಬಲ ಹಾಗೂ ಅವಕಾಶ ವಂಚಿತ ವರ್ಗಗಳಿಗೆ ಸುಲಭವಾಗಿ ನ್ಯಾಯ ದೊರಕಿಸಿಕೊಡುವಲ್ಲಿ ಕಾನೂನು ಸೇವೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಡಿ.ಕೆ.ವೇಲಾ ತಿಳಿಸಿದರು.

​ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರ್.ಎಲ್. ಕಾನೂನು ಕಾಲೇಜು ಹಾಗೂ ದಾವಣಗೆರೆ ವಕೀಲರ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರಿಗೆ ಕಾನೂನು ನೆರವು ಮತ್ತು ನ್ಯಾಯದ ಲಭ್ಯತೆ ಕುರಿತು ಅರಿವು ಮೂಡಿಸುವಲ್ಲಿ ಕಾನೂನು ಸಂಸ್ಥೆಗಳ ಪಾತ್ರ ಹಿರಿದು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ರಂಗೇಗೌಡ ಮಾತನಾಡಿ, ಸಾರ್ವಜನಿಕರಿಗೆ ತಮ್ಮ ಕಾನೂನು ಹಕ್ಕುಗಳು ಮತ್ತು ಪರಿಹಾರಗಳ ಬಗ್ಗೆ ಸ್ಪಷ್ಟ ಜಾಗೃತಿ ಮೂಡಿಸಬೇಕಿದೆ. ಅರ್ಹ ಫಲಾನುಭವಿಗಳಿಗೆ ಉಚಿತ ಕಾನೂನು ನೆರವು ಒದಗಿಸುವುದು, ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಯುವ ಕಾನೂನು ವಿದ್ಯಾರ್ಥಿಗಳು ಮತ್ತು ವಕೀಲರು ಮುಂಚೂಣಿಯಲ್ಲಿ ಇರಬೇಕು ಎಂದು ತಿಳಿಸಿದರು.

​ಕಾಲೇಜಿನ ನಿರ್ದೇಶಕ ಡಾ. ಎಂ.ಸೋಮಶೇಖರಪ್ಪ ಮಾತನಾಡಿ, ಕೇವಲ ಕಾನೂನು ಶಿಕ್ಷಣ ಪಡೆಯುವುದಷ್ಟೇ ಅಲ್ಲದೆ, ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾನೂನು ಜಾಗೃತಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

ಪ್ರಾಂಶುಪಾಲ ಪ್ರೊ. ಬಿ.ಪಿ. ಬಸವನಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸಂವಿಧಾನದ ಸಮಾನತೆ ಮತ್ತು ನ್ಯಾಯದ ಮೌಲ್ಯಗಳನ್ನು ಅಳವಡಿಸಿಕೊಂಡು ಸಾರ್ವಜನಿಕ ಸೇವೆಗೆ ಸದಾ ಸಿದ್ಧರಿರಬೇಕು ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ.ಆರ್. ಗುರುಬಸವರಾಜ್, ಪ್ರಾಧ್ಯಾಪಕರು, ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪಸ್ಥಿತರಿದ್ದರು. ಕಾಲೇಜಿನ ಕಾನೂನು ನೆರವು ಕೋಶದ ಸಂಚಾಲಕ ಡಾ. ಟಿ.ವಿದ್ಯಾಧರ ವೇದವರ್ಮ ಸ್ವಾಗತಿಸಿ, ಸಹಾಯಕ ಪ್ರಾಧ್ಯಾಪಕಿ ಎಂ. ಕಿರಣ್ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕಿ ಜಿ.ಎಚ್‌.ತೃಪ್ತಿ ವಂದಿಸಿದರು.

- - -

-11ಕೆಡಿವಿಜಿ40: ದಾವಣಗೆರೆಯ ಆರ್‌.ಎಲ್‌. ಕಾನೂನು ಕಾಲೇಜಿನಲ್ಲಿ ಬುಧವಾರ ನಡೆದ ‘ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ’ ಕಾರ್ಯಕ್ರಮವನ್ನು ನ್ಯಾ. ಡಿ.ಕೆ.ವೇಲಾ ಉದ್ಘಾಟಿಸಿದರು.