ಸಾರಾಂಶ
ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಹನೂರು
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು.ನಂತರ ಮಾತನಾಡಿದ ಅವರು, ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ 27 ಮಂದಿ ಪತ್ರಕರ್ತರಿದ್ದು, ಬಹುತೇಕ ಮಂದಿ ಮಧ್ಯಮ ವರ್ಗಕ್ಕೆ ಸೇರಿದ್ದು, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ, ಪತ್ರಕರ್ತರು ಒಂದು ಸ್ವಂತ ಮನೆ ನಿರ್ಮಿಸಿಕೊಳ್ಳಲು ರಾಜ್ಯದ ಇತರೆ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ನೀಡಿರುವಂತೆ ಹನೂರು ಕೇಂದ್ರದಲ್ಲಿ ನಿವೇಶನ ನೀಡಿದರೆ ಅನುಕೂಲವಾಗಲಿದೆ ಎಂದು ತಿಳಿಸಿದರು.ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಾದೇಶ್ ಮಾತನಾಡಿ, ಹನೂರು ಪತ್ರಕರ್ತರು ಸಂಕಷ್ಟದಲ್ಲಿದ್ದು ಶಾಸಕ ಎಂ.ಆರ್.ಮಂಜುನಾಥ್ ಹಾಗೂ ಮಾಜಿ ಶಾಸಕ ಆರ್.ನರೇಂದ್ರ ಅವರಿಗೆ ನಿವೇಶನ ಕೊಡಿಸುವಂತೆ ಮನವಿ ಮಾಡಲಾಗಿತ್ತು. ಮಾಜಿ ಶಾಸಕ ಆರ್.ನರೇಂದ್ರ ಅವರು ಕಾರ್ಯನಿಮಿತ್ತ ಕೊಳ್ಳೇಗಾಲಕ್ಕೆ ಆಗಮಿಸಿದ್ದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರ ಗಮನಕ್ಕೂ ತರಲಾಗಿ ಸೂಕ್ತ ನಿವೇಶನವಿದ್ದರೆ ಮಂಜೂರು ಮಾಡಿಕೊಡುವಂತೆ ತಿಳಿಸಿದ್ದ ಹಿನ್ನೆಲೆ ಮನವಿ ಸಲ್ಲಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಮನವಿ ಸ್ವೀಕರಿಸಿ ಮಾತನಾಡಿ, ಹನೂರು ಕೇಂದ್ರ ಸ್ಥಾನದಲ್ಲಿ ಸರ್ಕಾರಿ ಜಾಗ ಗುರುತಿಸಿ ನಿವೇಶನ ನೀಡಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದೇ ವೇಳೆ ತಾಲೂಕು ಗೌರವಾಧ್ಯಕ್ಷ ದೇವರಾಜ ನಾಯ್ಡು, ಪ್ರಧಾನ ಕಾರ್ಯದರ್ಶಿ ಬಸವರಾಜು, ಸಹ ಕಾರ್ಯದರ್ಶಿ ಗೋವಿಂದ್, ಖಜಾಂಜಿ ಮಹಾದೇವಸ್ವಾಮಿ, ಸದಸ್ಯರಾದ, ನಿರಂಜನ್, ನಿರ್ದೇಶಕ ರಮೇಶ್ ಶಿವಕುಮಾರ್,ರಾಜೇಶ್, ವಿಜಯ ಕುಮಾರ್ ಇದ್ದರು.