ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನೂ ಪತ್ರಿಕಾರಂಗ ಮಾಡುತ್ತಿದೆ. ಹೀಗಾಗಿ ಪತ್ರಕರ್ತರ ಜವಾಬ್ದಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ ಸಮಾಜದ ಆಗುಹೋಗುಗಳನ್ನು ಜನರಿಗೆ ತಿಳಿಸುವ ಜವಾಬ್ದಾರಿಯುತ ಕಾರ್ಯ ನಿರ್ವಹಿಸುತ್ತಿದೆ. ಜನಪ್ರತಿನಿಧಿಗಳಾದ ನಮ್ಮ ಸರಿ-ತಪ್ಪುಗಳನ್ನೂ ಪತ್ರಕರ್ತರು ತಮ್ಮ ಬರವಣಿಗೆಯ ಮೂಲಕ ಚಾಟಿ ಬೀಸುವಂತೆ ಎತ್ತಿ ತೋರಿಸಿದಾಗ ಮಾತ್ರ ಆಡಳಿತ ವ್ಯವಸ್ಥೆ ಮತ್ತಷ್ಟು ಸುಧಾರಿಸಲು ಸಾಧ್ಯ ಎಂದರು.

ಕನ್ನಡಪ್ರಭ ವಾರ್ತೆ ಆಲೂರು

ಸಮಾಜದ ಆಗುಹೋಗುಗಳನ್ನು ನಿರಂತರವಾಗಿ ಗಮನಿಸಿ, ಸರಿ-ತಪ್ಪುಗಳನ್ನು ಜನತೆಯ ಮುಂದಿಡುವ ಮೂಲಕ ಪತ್ರಕರ್ತರು ಸಮಾಜದ ಪ್ರಮುಖ ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾರ್ಜುವಳ್ಳಿ ಮಠದ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಾಧ್ಯಮ ದಿನಾಚರಣೆಯ ಸಾನ್ನಿಧ್ಯ ವಹಿಸಿ ಮಾತನಾಡಿದ‌ ಅವರು, ಸಮಾಜದಲ್ಲಿ ನಡೆಯುವ ಪ್ರತಿಯೊಂದು ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುವ ಪತ್ರಕರ್ತರು, ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆ. ಆಡಳಿತ ವ್ಯವಸ್ಥೆಯ ಲೋಪದೋಷಗಳನ್ನು ಬೆಳಕಿಗೆ ತಂದು ಸಂಬಂಧಪಟ್ಟವರ ಗಮನ ಸೆಳೆಯುವುದರ ಜತೆಗೆ, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನೂ ಪತ್ರಿಕಾರಂಗ ಮಾಡುತ್ತಿದೆ. ಹೀಗಾಗಿ ಪತ್ರಕರ್ತರ ಜವಾಬ್ದಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ ಸಮಾಜದ ಆಗುಹೋಗುಗಳನ್ನು ಜನರಿಗೆ ತಿಳಿಸುವ ಜವಾಬ್ದಾರಿಯುತ ಕಾರ್ಯ ನಿರ್ವಹಿಸುತ್ತಿದೆ. ಜನಪ್ರತಿನಿಧಿಗಳಾದ ನಮ್ಮ ಸರಿ-ತಪ್ಪುಗಳನ್ನೂ ಪತ್ರಕರ್ತರು ತಮ್ಮ ಬರವಣಿಗೆಯ ಮೂಲಕ ಚಾಟಿ ಬೀಸುವಂತೆ ಎತ್ತಿ ತೋರಿಸಿದಾಗ ಮಾತ್ರ ಆಡಳಿತ ವ್ಯವಸ್ಥೆ ಮತ್ತಷ್ಟು ಸುಧಾರಿಸಲು ಸಾಧ್ಯ ಎಂದರು.ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಮುಂದಿನ ದಿನಗಳಲ್ಲಿ ತನ್ನದೇ ಆದ ಸ್ವಂತ ಕಟ್ಟಡ ನಿರ್ಮಿಸುವ ಉದ್ದೇಶ ಹೊಂದಿದ್ದು, ಭವನ ನಿರ್ಮಾಣಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಮಾತನಾಡಿ, ಪತ್ರಕರ್ತರು ಸಮಾಜದ ಜ್ಞಾನಿಗಳಾಗಿದ್ದು, ಸಮಾಜದಲ್ಲಿರುವ ಅಂಕುಡೊಂಕುಗಳನ್ನು ತಿದ್ದುವ ಜತೆಗೆ ನವ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದರು.ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿಯೂ ಪತ್ರಿಕೆಗಳು ಮತ್ತು ಪತ್ರಕರ್ತರು ವಹಿಸಿದ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು. ತಮ್ಮ ಹರಿತವಾದ ಲೇಖನಿಗಳ ಮೂಲಕ ಅಂದಿನ ಹಲವು ಸಾಮಾಜಿಕ ಸಮಸ್ಯೆಗಳನ್ನು ಜನರ ಮುಂದಿಟ್ಟು ಅವುಗಳಿಗೆ ಪರಿಹಾರ ದೊರಕಿಸುವಲ್ಲಿ ಪತ್ರಕರ್ತರು ಪ್ರಮುಖ ಪಾತ್ರ ವಹಿಸಿದ್ದರು ಎಂದರು. ಮಾಜಿ ಶಾಸಕ ಎಚ್. ಕೆ. ಕುಮಾರಸ್ವಾಮಿ ಮಾತನಾಡಿ, ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ಜತೆಗೆ ಪತ್ರಿಕಾರಂಗವೂ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜದಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸುವ ಹಾಗೂ ಜನರ ಧ್ವನಿಯಾಗುವ ಮಹತ್ವದ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ ಎಂದರು.ಜಿಲ್ಲಾ ಸಂಘದ ಅಧ್ಯಕ್ಷ ಕೆಂಚೇಗೌಡ ಹಾಗೂ ರಾಜ್ಯ ಸಂಘದ ಉಪಾಧ್ಯಕ್ಷ ಮದನ್ ಗೌಡ ಮಾತನಾಡಿ, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪ್ರತಿವರ್ಷವೂ ವಿಭಿನ್ನ ಹಾಗೂ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಜ್ಯ ಮಟ್ಟದಲ್ಲಿ ತನ್ನದೇ ಆದ ಹೆಸರು ಗಳಿಸಿದೆ ಎಂದರು. ರಾಷ್ಟ್ರೀಯ ಮಂಡಳಿ ಸದಸ್ಯ ರವಿ ನಾಕಲಗೂಡು ಮಾತನಾಡಿ, ಜಿಲ್ಲೆಯ ಅತ್ಯಂತ ಚಿಕ್ಕ ತಾಲೂಕುಗಳಲ್ಲೊಂದಾಗಿರುವ ಈ ತಾಲೂಕಿನಲ್ಲಿ ಪತ್ರಕರ್ತರ ಭವನ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ನಡೆಯಲಿ ಎಂದು ಆಶಿಸಿದರು.ತಾಲೂಕು ಸಂಘದ ಅಧ್ಯಕ್ಷ ಆದಿಲ್, ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ಮಂಜೇಗೌಡ, ಕಬ್ಬಿನಳ್ಳಿ ಜಗದೀಶ್, ತಾಲೂಕು ದಂಡಾಧಿಕಾರಿ ಮಲ್ಲಿಕಾರ್ಜುನ್, ತಾಲೂಕು ಪಂಚಾಯಿತಿ ಸುಬ್ರಮಣ್ಯ ಶರ್ಮ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್‌ ನಾಗೆಂದ್ರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್, ಬಿಇಒ ಕೃಷ್ಣೇಗೌಡ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಮೋದ್, ಜಿಲ್ಲಾ ಉಪಾಧ್ಯಕ್ಷರಾದ ನಂಜುಂಡೇಗೌಡ, ಪ್ರಕಾಶ್, ಪ್ರ.ಕಾರ್ಯದರ್ಶಿ ಕೆ.ಜಿ. ಸುರೇಶ್, ಕಾರ್ಯದರ್ಶಿ ಹರೀಶ್‌, ತಾಲೂಕು ನೌಕರರ ಸಂಘದ ಅಧ್ಯಕ್ಷ ವರದರಾಜು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜಿಲ್ಲಾ ಹಾಗೂ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.ಸನ್ಮಾನ:

ಮಾಧ್ಯಮ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಗುಲಾಂ ಸತ್ತಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಉದಯ ರವಿ, ಪತ್ರಕರ್ತ ವಿಶ್ವನಾಥ್, ಹಿರಿಯ ಪತ್ರಕರ್ತ ಎಂ.ಡಿ. ಚಂದ್ರಶೇಖರ್‌, ನಿವೃತ್ತ ಶಿಕ್ಷಕ ಸಿದ್ದಯ್ಯ, ಚೆಸ್ಕಾಂನ ರವಿಕುಮಾರ್, ಪೌರಕಾರ್ಮಿಕ ಕಿರಣ್ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎನ್.ಎಂ.ಎನ್. ವರ್ಷಿಣಿ ಅವರ ಕುಟುಂಬದವರನ್ನು ಸನ್ಮಾನಿಸಿ ಗೌರವಿಸಲಾಯಿತು.