ಉಡುಪಿ: ಪತ್ರಕರ್ತರು ಮಾಡುವ ಸುದ್ದಿಯಿಂದ ಸಮಾಜಕ್ಕೆ ಪ್ರಯೋಜನವಾದರೆ ಮಾತ್ರ ಈ ವೃತ್ತಿ ಸಾರ್ಥಕ ಎನಿಸುತ್ತದೆ. ಪತ್ರಕರ್ತರಿಗೆ ಸಾಮಾಜಿಕ ಪ್ರಜ್ಞೆ ಅತ್ಯಂತ ಮುಖ್ಯವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.ಉಡುಪಿ ಶನಿವಾರ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಮತ್ತು ಕಾರ್ಕಳ, ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ, ಹೆಬ್ರಿ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ನೂತನ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಉಸ್ತುವಾರಿ ಹಾಗೂ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮತ್ತು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಘದ ಮಾಸ ಪತ್ರಿಕೆ ‘ಸನ್ಮತಿ’ಯನ್ನು ರಾಜ್ಯಾಧ್ಯಕ್ಷರು ಬಿಡುಗಡೆಗೊಳಿಸಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ರಾಜ್ಯ ಸಮಿತಿ ಸದಸ್ಯ ಅಸ್ಟೋ ಮೊಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಹಾಗೂ ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ, ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದನ ಕೊಡವೂರು ಹಾಗೂ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ ಪುರಸ್ಕೃತೆ ಯಶೋಧಾ ಕೇಶವ್ ಅವರನ್ನು ಸನ್ಮಾನಿಸಲಾಯಿತು.ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ನೂತನ ಪದಾಧಿಕಾರಿಗಳ ಪಟ್ಟಿಯನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ್ ಆರಾಡಿ ವಾಚಿಸಿದರು. ರಾಮಾಂಜಿ ಆಶಯಗೀತೆ ಹಾಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಚೇತನ್ ಮಟಪಾಡಿ ವಂದಿಸಿದರು. ಹಿರಿಯ ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.