ಸಾರಾಂಶ
ಮಂಡ್ಯ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 1913 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಇದುವರೆಗೆ 1338 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಪೈಕಿ 35 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ವರದಿ ಪಡೆದುಕೊಂಡರು.ಸಚಿವರು ವಿಡಿಯೋ ಸಂವಾದದಲ್ಲಿ ವರದಿ ನೀಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಸೋಮನಹಳ್ಳಿ ಗ್ರಾಪಂ ವ್ಯಾಪ್ತಿಯ ಅಗರಲಿಂಗನದೊಡ್ಡಿ, ಹುಣಸೆಮರದದೊಡ್ಡಿ ಹಾಗೂ ತೈಲೂರು ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು.
ಯೋಜನೆ ಅನುಷ್ಠಾನ ಕುರಿತು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ದೂರುಗಳು ಸ್ವೀಕೃತವಾಗುತ್ತಿರುವ ಹಿನ್ನೆಲೆಯಲ್ಲಿ ಜಿಪಂ ಸಿಇಒ ಪ್ರತಿ ತಾಲೂಕಿನಲ್ಲಿ 5 ಕಾಮಗಾರಿಗಳನ್ನು ಜು.15 ರಿಂದ 31ರವರೆಗೆ ಅಭಿಯಾನ ಮಾದರಿಯಲ್ಲಿ ಖುದ್ದು ಸ್ಥಳ ಪರಿಶೀಲಿಸಿ ನಿಗಧಿತ ನಮೂನೆಯಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಮಂಗಳವಾರ ತಾಲೂಕಿನ 3 ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಯೋಜನೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದರು.ಮಂಡ್ಯ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 1913 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಇದುವರೆಗೆ 1338 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಪೈಕಿ 35 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಈ ವೇಳೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮಧುಸೂದನ್, ಕಿರಿಯ ಅಭಿಯಂತರರಾದ ಮಹದೇವ್, ಶರತ್, ನರಸಿಂಹ ಮೂರ್ತಿ, ಜಲ ಜೀವನ್ ಮಿಷನ್ ಯೋಜನೆ ಜಿಲ್ಲಾ ಯೋಜನಾ ವ್ಯವಸ್ಥಾಪಕ ಯೋಗೇಶ್ ಸೇರಿದಂತೆ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.