ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಪರಿಸರದಲ್ಲಿ ಆಗುತ್ತಿರುವ ಬದಲಾವಣೆ ಮತ್ತು ಆಧುನಿಕ ಜೀವನಶೈಲಿಯಿಂದ ಮಾನವ ಹೊಸ ಹೊಸ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ. ಇಂತಹ ಸಂಕಷ್ಟದ ಪರಿಸರದಿಂದ ಹೊರ ಬರಲು ಆಯುರ್ವೇದ ಚಿಕಿತ್ಸೆ ಅನಿವಾರ್ಯ ಆಗಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಕುಲಪತಿ ಡಾ.ಎಂ.ಕೆ. ರಮೇಶ್ ತಿಳಿಸಿದರು.ನಗರದ ಜೆಎಸ್ಎಸ್ ಆಯುರ್ವೇದ ವೈದ್ಯಕೀಯ ಕಾಲೇಜು ವತಿಯಿಂದ ಜೆಎಸ್ಎಸ್ ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ವಿಶಿಖಾನುಪ್ರವೇಶ- 2024ನೇ ಸಾಲಿನ ಪದವಿ ಪ್ರದಾನ ಸಮಾರಂಭವನ್ನು ಅವರು ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಅಧ್ಯಯನ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಂಡರೆ ಪಾಶ್ಚಾತ್ಯ ಚಿಕಿತ್ಸಾ ವಿಧಾನಕ್ಕಿಂತಲೂ ಅತ್ಯಂತ ಸಮರ್ಥವಾಗಿ ಅಯುರ್ವೇದ ಚಿಕಿತ್ಸೆ ಬೆಳೆಸಬಹುದು ಎಂದು ಅವರು ಹೇಳಿದರು. ಪ್ರಸ್ತುತ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿವೆ. ಹೀಗಾಗಿ, ವಿದ್ಯಾರ್ಥಿಗಳು ಅಧ್ಯಯನಶೀಲತೆ, ಕುತೂಹಲಕಾರಿ ಮನಸ್ಥಿತಿ, ಸಂವಹನ ಕಲೆ ಮತ್ತು ಮಾನವೀಯ ಗುಣಗಳನ್ನು ರೂಢಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಈ ಕಾರ್ಯಕ್ರಮದಲ್ಲಿ 103 ಸ್ನಾತಕ ಮತ್ತು 23 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು. ಜೆಎಸ್ಎಸ್ ಮಹಾವಿದ್ಯಾಪೀಠದ ಕಾಯನಿರ್ವಾಹಕ ಕಾಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಆರ್. ಮಹೇಶ್, ಕಾಲೇಜಿನ ಪ್ರಾಂಶುಪಾಲ ಡಾ. ಸರ್ಬೇಶ್ವರ್ ಕರ್ ಮೊದಲಾದವರು ಇದ್ದರು.