ಕನ್ನಡಪ್ರಭ ವಾರ್ತೆ ಮೈಸೂರು

ಸಂಗೀತವು ಮನಸ್ಸುಗಳನ್ನು ಬೆಸೆಯುವ ಅದ್ಭುತ ಶಕ್ತಿ ಹೊಂದಿದೆ. ರಂಗಗೀತೆಗಳು ವಿಶ್ವಪ್ರಜ್ಞೆಯನ್ನು ಮೂಡಿಸುತ್ತದೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಎಚ್. ಜನಾರ್ಧನ್ ತಿಳಿಸಿದರು.

ನಗರದ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ನಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ, ಏಕತಾರಿ ಸಾಂಸ್ಕೃತಿಕ ಸಂಘಟನೆ ಸಂಯುಕ್ತವಾಗಿ ಆಯೋಜಿಸಿದ್ದ ರಂಗಗೀತೆಗಳ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಏಕತಾರಿ ತಂಡವು ನಿಮ್ಮೆಲ್ಲರ ಸಂತೋಷಕ್ಕಾಗಿ ಈ ರಂಗಗೀತೆಗಳನ್ನು ಪ್ರಸ್ತುತಪಡಿಸುತ್ತಿದೆ. ಈ ಗಾಯನ ನಿಮ್ಮ ಮನಸ್ಸಿಗೆ ಆನಂದವನ್ನು ನೀಡಲಿ ಎಂದರು.

ವಿಶೇಷಚೇತನ ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆ ಅಡಗಿದ್ದು, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಅವರ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಮೂಡಿಸಲು ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ ಪ್ರಾಂಶುಪಾಲ ಶಿವಕುಮಾರಸ್ವಾಮಿ ಮಾತನಾಡಿ, ಶಿಕ್ಷಣದ ಜೊತೆಗೆ ಕಲೆ, ಸಂಗೀತ ಮತ್ತು ಸಂಸ್ಕೃತಿಯ ಪರಿಚಯವು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅತ್ಯಗತ್ಯ. ವಿಶೇಷಚೇತನ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ಜೀವನೋತ್ಸಾಹವನ್ನು ಹೆಚ್ಚಿಸುವ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಅಗತ್ಯವಿದೆ ಎಂದು ತಿಳಿಸಿದರು.


ರಂಗಭೀಷ್ಮ ಬಿ.ವಿ. ಕಾರಂತ್ ಹಾಗೂ ಎಚ್. ಜನಾರ್ಧನ್ ಅವರು ರಾಗ ಸಂಯೋಜಿಸಿರುವ ಆಯ್ದ ರಂಗಗೀತೆಗಳನ್ನು ಏಕತಾರಿ ತಂಡವು ಮನಮೋಹಕವಾಗಿ ಪ್ರಸ್ತುತಪಡಿಸಿ, ವಿಶೇಷಚೇತನ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಉಪಸ್ಥಿತರಿದ್ದ ಪ್ರೇಕ್ಷಕರ ಮನಸೂರೆಗೊಂಡಿತು.

ಏಕತಾರಿ ಸಾಂಸ್ಕೃತಿಕ ಸಂಘಟನೆಯ ಸಂಸ್ಥಾಪಕ, ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ದೇವಾನಂದ ವರಪ್ರಸಾದ್, ಸಮರ್ಥನಂ ಅಂಗವಿಕಲರ ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥ ಶಿವರಾಜು, ಜೆಎಸ್ಎಸ್ ಮಹಾವಿದ್ಯಾಪೀಠದ ಎಂಜಿನಿಯರ್ ವಿಭಾಗದ ಸಹಾಯಕ ನಿರ್ದೇಶಕ ಎಚ್.ಪಿ. ಮಲ್ಲಿಕಾರ್ಜುನ, ಕಾಲೇಜಿನ ಉದ್ಯೋಗಾಧಿಕಾರಿ ಕುಶಾಲ್ ಮೊದಲಾದವರು ಇದ್ದರು.