ಮುಡಾ ಸೈಟ್‌ ಹಗರಣ ಆರೋಪ ವಿಚಾರಣೆಗೆ ನ್ಯಾಯಾಂಗ ಆಯೋಗ

| Published : Jul 15 2024, 01:56 AM IST / Updated: Jul 15 2024, 06:31 AM IST

ಮುಡಾ ಸೈಟ್‌ ಹಗರಣ ಆರೋಪ ವಿಚಾರಣೆಗೆ ನ್ಯಾಯಾಂಗ ಆಯೋಗ
Share this Article
  • FB
  • TW
  • Linkdin
  • Email

ಸಾರಾಂಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದ ಆರೋಪಗಳ ಬೆನ್ನಲ್ಲೇ ಆರೋಪಗಳ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

 ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದ ಆರೋಪಗಳ ಬೆನ್ನಲ್ಲೇ ಆರೋಪಗಳ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಶುರುವಾಗುತ್ತಿರುವ ಹೊತ್ತಿನಲ್ಲೇ ಭಾನುವಾರ ಏಕ ಸದಸ್ಯ ವಿಚಾರಣಾ ಆಯೋಗವನ್ನು ದಿಢೀರ್ ರಚನೆ ಮಾಡಿದ್ದು, ಆರು ತಿಂಗಳ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ ತಿಳಿಸಿದೆ.

ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ದುಬಾರಿ ಬೆಲೆಯ ಬದಲಿ ನಿವೇಶನ ಪಡೆದಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿತ್ತು. ಕಳೆದ ಮೂರು ವಾರದಿಂದಲೂ ಮುಡಾ ನಿವೇಶನ ಹಂಚಿಕೆ ಬಗ್ಗೆಯೇ ಆರೋಪ-ಪ್ರತ್ಯಾರೋಪಗಳು ಜೋರಾಗಿ ನಡೆದಿದ್ದವು.

ಸೋಮವಾರದಿಂದ ಆರಂಭವಾಗುವ ಅಧಿವೇಶನದಲ್ಲೂ ಬಿಜೆಪಿ ಇದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಹೋರಾಟ ಮಾಡಲು ಅಣಿಯಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣಾ ಆಯೋಗ ರಚನೆ ಮಾಡಿ ಅಧಿಸೂಚನೆ ಹೊರಡಿಸಿದೆ.

ವಿಚಾರಣೆ ನಡೆಸಿ ಆರು ತಿಂಗಳ ಒಳಗಾಗಿ ಪೂರ್ಣಗೊಳಿಸಿದ ವರದಿಯನ್ನು ಸಲ್ಲಿಸಬೇಕು. ಸಂಬಂಧಪಟ್ಟವರು ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆ ಒದಗಿಸಲು ಸಹಕರಿಸಬೇಕು. ಜತೆಗೆ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಳ್ಳಬೇಕು. ಜತೆಗೆ ಆಯೋಗಕ್ಕೆ ವಿಚಾರಣೆಗೆ ಅಗತ್ಯವಿರುವ ಎಲ್ಲಾ ಕಡತ, ದಾಖಲಾತಿ ಒದಗಿಸಬೇಕು ಎಂದು ಒಳಾಡಳಿತ ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.