ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)-2026ರ ಪರೀಕ್ಷೆಯು ನಗರದಲ್ಲಿ ಅ. 11ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)-2026ರ ಪರೀಕ್ಷೆಯು ನಗರದಲ್ಲಿ ಅ. 11ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ತಿಳಿಸಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಶಿವಮೊಗ್ಗ ನಗರದಲ್ಲಿ ಮಾತ್ರವೇ ಒಟ್ಟು 22 ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗಿದೆ. ಈ ಪರೀಕ್ಷೆಗೆ ಒಟ್ಟು 6588 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಭದ್ರತೆ ಮತ್ತು ನಿಷೇಧಾಜ್ಞೆ: ಪರೀಕ್ಷೆಯು ನ್ಯಾಯಸಮ್ಮತವಾಗಿ ನಡೆಯಲು ಪರೀಕ್ಷಾ ದಿನದಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ 22 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ ಎಸ್ ಎಸ್ )-2023 ರ ಸೆಕ್ಷನ್ 163 ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದರು.ಪರೀಕ್ಷಾ ವ್ಯವಸ್ಥೆ: ಪ್ರಶ್ನೆಪತ್ರಿಕೆ ವಿತರಣೆಗೆ ಒಟ್ಟು 7 ಮಾರ್ಗಗಳನ್ನು ಗುರುತಿಸಲಾಗಿದೆ. ಪ್ರಶ್ನೆಪತ್ರಿಕೆ ಸಾಗಾಟಕ್ಕಾಗಿ ತ್ರಿ-ಸದಸ್ಯ ಸಮಿತಿ ಹಾಗೂ ವಾಹನಕ್ಕೆ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ’ವೆಬ್ ಕಾಸ್ಟಿಂಗ್’ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳನ್ನು ಪರೀಕ್ಷಾ ಕೊಠಡಿಗೆ ಬಿಡುವ ಮುನ್ನ ’ಹಾಲ್ ಟಿಕೆಟ್ ಸ್ಕ್ಯಾನ್’ ಹಾಗೂ ’ಫೇಸ್ ರೆಕಗ್ನಿಷನ್’ ಮೂಲಕ ಪರಿಶೀಲನೆ ನಡೆಸಲಾಗುತ್ತದೆ. ಪ್ರತಿ 5 ಕೇಂದ್ರಗಳಿಗೆ 1 ರಂತೆ ಫ್ಲೈಯಿಂಗ್ ಸ್ಕ್ವಾಡ್ ಹಾಗೂ ಸೂಕ್ತ ಉಡುಪು ಪರಿಶೀಲನೆಗೆ ’ಡ್ರೆಸ್ ಕೋಡ್ ಆಫೀಸರ್’ ಅವರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್, ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ. ಪರೀಕ್ಷಾ ಸಮಯದಲ್ಲಿ ತಡೆರಹಿತ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಇಲಾಖೆಗೆ ನಿರ್ದೇಶಿಸಲಾಗಿದೆ ಎಂದ ಅವರು ಶಾಂತಿಯುತವಾಗಿ ಹಾಗೂ ಸುಗಮವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಖಜಾನೆ ಅಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.