ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ತಾಲೂಕಿನ ಕೋಡಿಮೋಳೆ ಕೆರೆಯನ್ನು ತುಂಬಿಸಿ. ಅಲ್ಲಿಂದ ಪಂಪ್ ಮೂಲಕ ಇತರೆ ಕೆರೆಗಳಿಗೆ ನೀರು ಹರಿಸುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಈ ಭಾಗದ ಕೆರೆಗಳನ್ನು ತುಂಬಿಸಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕ್ರಮ ವಹಿಸುವಂತೆ ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪಿ. ಮರಿಸ್ವಾಮಿ ತಿಳಿಸಿದರು.ಮೈಸೂರು ಕಾಡಾ ಕಚೇರಿಯಲ್ಲಿ ನಡೆದ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವಿಧ ಇಲಾಖೆಯ ಅಧಿಕಾರಿಗಳ ಪ್ರಗತಿ ವರದಿಯನ್ನು ಆಲಿಸಿದ ಬಳಿಕ ಮಾತನಾಡಿದ ಅವರು, ನದಿ ಮೂಲದಿಂದ ಕೆರೆಗಳನ್ನು ತುಂಬಿಸುವ ಎರಡನೇ ಹಂತದ ಕಾಮಗಾರಿ ಆರಂಭಗೊಂಡು ಬಹಳ ದಿನವಾಗಿದೆ. ಟವರ್ ಸಮಸ್ಯೆಯಿಂದಾಗಿ ಕೋಡಿಮೋಳೆ ಕೆರೆಯಿಂದ ಇತರೇ ಕೆರೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸಿ ಕೆರೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಬೇಕು ಎಂದರು. ಕಾಡಾ ವ್ಯಾಪ್ತಿಯ ರೈತರು ಬೆಳೆದ ಬೆಳೆಗಳನ್ನು ಸಾಗಿಸಲು ಉತ್ತಮವಾದ ರಸ್ತೆಗಳನ್ನು ನಿರ್ಮಿಸಲು ಕ್ರಿಯಾ ಯೋಜನೆ ಸಿದ್ದಪಡಿಸಿ. ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಗಮನ ಸೆಳೆದು ಅನುದಾನವನ್ನು ಬಿಡುಗಡೆ ಮಾಡಿಸಿ, ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಕ್ರಮ ವಹಿಸಬೇಕು ಎಂದರು. ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಕೆರೆಗೆ ನೀರು ತುಂಬಿಸಲು ಮುಂದಾಗಬೇಕು ಎಂದರು. ಕಾಡಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ರಚನೆಯಾಗಿರುವ ಸಹಕಾರ ಸಂಘಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಲಹೆ ನೀಡಿದರು. ಸಭೆಯಲ್ಲಿ ಕಾಡಾ ಆಡಳಿತಾಧಿಕಾರಿ ಎಚ್.ಕೆ. ದಿವಾಕರ ನಾಯಕ್, ಉಪ ಆಡಳಿತಾಧಿಕಾರಿ ಬಿ.ಆರ್. ರೂಪಾ, ಚಾಮರಾಜನಗರ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಭೂ ಅಭಿವೃದ್ಧಿ ಅಧಿಕಾರಿಗಳಾದ ಚಂದ್ರಕಲಾ , ಶಿವಪ್ರಕಾಶ್, ರವಿಚಂದ್ರನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.