ಕಾರ್ಕಳ ; ಯುವಜನತೆಯಲ್ಲಿ ಸೇವಾ ಮನೋಭಾವ, ಶಿಸ್ತು, ಸಾಮಾಜಿಕ ಕಳಕಳಿ ಹಾಗೂ ದೇಶಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಿರುವ ನಾಲ್ಕನೇ ವರ್ಷದ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವು ಕಡ್ತಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.ಎಂಆರ್‌ಪಿಎಲ್ ಸಂಸ್ಥೆಯ ಮುಖ್ಯ ಲೆಕ್ಕಾಧಿಕಾರಿ ಅಶೋಕ್ ಕುಮಾರ್ ಹೆಗ್ಡೆ ಶಿಬಿರ ಉದ್ಘಾಟಿಸಿ ಮಾತನಾಡಿ, ಎನ್‌ಎಸ್‌ಎಸ್ ಶಿಬಿರ ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ದೇಶಕ್ಕೆ ಕೊಡುಗೆ ನೀಡಲು ಉತ್ತಮ ಅವಕಾಶವಾಗಿದೆ. ಶಿಸ್ತುಬದ್ಧ ಜೀವನಕ್ಕೆ ಅಡಿಪಾಯ ಹಾಕುವ ಇಂತಹ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಕ್ರಿಯೇಟಿವ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಶಿಬಿರದ ರೂವಾರಿ ಡಾ. ಗಣನಾಥ ಶೆಟ್ಟಿ ಬಿ. ಪ್ರಾಸ್ತಾವಿಕವಾಗಿ ಮಾತನಾಡಿ, ಏಳು ದಿನಗಳ ಕಾಲ ನಡೆಯುವ ಶಿಬಿರವು ‘ನನ್ನ ಭಾರತಕ್ಕಾಗಿ ಯುವಜನತೆ’ ಎಂಬ ಶೀರ್ಷಿಕೆಯಡಿ ಆಯೋಜಿಸಲಾಗಿದೆ. ಯುವಜನತೆ ದೇಶದ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಭವ್ಯ ಭಾರತದ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಪ್ರಜ್ಞೆ ಮತ್ತು ಸಾಮಾಜಿಕ ಹೊಣೆಗಾರಿಕೆ ಬೆಳೆಸುವುದು ಶಿಬಿರದ ಉದ್ದೇಶವಾಗಿದೆ ಎಂದರು.ಕಡ್ತಲ ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷ ಸುಕೇಶ್ ಹೆಗ್ಡೆ ಮಾತನಾಡಿ, ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯದಲ್ಲಿ ಕ್ರಿಯೇಟಿವ್ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ. ಎನ್‌ಎಸ್‌ಎಸ್‌ನಂತಹ ಶಿಬಿರಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿವೆ ಎಂದರು.ಅಜೆಕಾರು ಪೊಲೀಸ್ ಠಾಣೆಯ ಪಿಎಸ್‌ಐ ಲಕ್ಷ್ಮಣ ಪ್ರಭು ಮಾತನಾಡಿ, ಎನ್‌ಎಸ್‌ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರಿಯೇಟಿವ್ ಕಾಲೇಜಿನ ಸಹ ಸಂಸ್ಥಾಪಕ ಆದರ್ಶ ಎಂ.ಕೆ. ಮಾತನಾಡಿ, ಸಾಮಾಜಿಕ ಕಳಕಳಿ, ಶಿಸ್ತು ಹಾಗೂ ದೇಶಭಕ್ತಿಯನ್ನು ಬೆಳೆಸುವುದು ಎನ್‌ಎಸ್‌ಎಸ್‌ನ ಪ್ರಮುಖ ಉದ್ದೇಶವಾಗಿದೆ. ನಿಸ್ವಾರ್ಥವಾಗಿ ಸಮಾಜಸೇವೆ ಮಾಡುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಿವೆ ಎಂದರು.

ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕರುಣಾಕರ ಹೆಗ್ಡೆ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಉಮೇಶ್ ಹಾಗೂ ಅಜೆಕಾರು ಪೊಲೀಸ್ ಠಾಣೆಯ ಆನಂದ್ ಉಪಸ್ಥಿತರಿದ್ದರು. ಅತಿಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಲೋಹಿತ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಉಪನ್ಯಾಸಕ ವರ್ಗದವರು ಹಾಗೂ ಊರಿನ ಗಣ್ಯರು ಭಾಗವಹಿಸಿದ್ದರು.