ಕಡೂರುಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯ ಸಮಸ್ಯೆಯಿಂದಾಗಿ ಮಂಗಳವಾರ ಕಡೂರಿನಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಮುಂದೂಡಲಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.

ದೇವೇಗೌಡರ ಆರೋಗ್ಯದ ಹಿನ್ನೆಲೆಯಲ್ಲಿ ನಿರ್ಧಾರ

ಕನ್ನಡಪ್ರಭ ವಾರ್ತೆ, ಕಡೂರುಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯ ಸಮಸ್ಯೆಯಿಂದಾಗಿ ಮಂಗಳವಾರ ಕಡೂರಿನಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಮುಂದೂಡಲಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.ಸೋಮವಾರ ಕಡೂರು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ನ.15ರಂದು ನಿಗದಿಯಾಗಿದ್ದ ಸಭೆಯನ್ನು ದೇವೇಗೌಡರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ನ.24ಕ್ಕೆ ಮುಂದೂಡಲಾಗಿತ್ತು. ಆದರೆ, ಅವರ ಆರೋಗ್ಯದಲ್ಲಿ ಸಮಸ್ಯೆ ಇರುವುದರಿಂದ ಮಂಗಳವಾರವೂ ಆಗಮಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಖುದ್ದಾಗಿ ಕಡೂರಿಗೆ ಆಗಮಿಸಿ ಕಾರ್ಯಕರ್ತರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯದಂತೆ ಸಮಾವೇಶ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.ಕಡೂರು ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ್ದು, ತಾವು ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದೇನೆ. ಇಲ್ಲಿ ದೇವೇ ಗೌಡರ ತೀರ್ಮಾನವೇ ಅಂತಿಮ. ಅವರ ಆರೋಗ್ಯದ ಕಾರಣದಿಂದಲೇ ಸಮಾವೇಶಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಇದರಲ್ಲಿ ಬೇರೆ ಯಾವುದೇ ಕಾರಣವಿಲ್ಲ. ಈ ಕುರಿತು ಹರಡುತ್ತಿರುವ ಅಪಪ್ರಚಾರಗಳಿಗೆ ಯಾರೂ ಕಿವಿಗೊಡಬಾರದು ಎಂದು ಹೇಳಿದರು.ಕಡೂರು ತಾಲೂಕು ಜೆಡಿಎಸ್ ಅಧ್ಯಕ್ಷರ ಆಯ್ಕೆಯಲ್ಲೂ ದೇವೇಗೌಡರ ತೀರ್ಮಾನವೇ ಅಂತಿಮ. ಪ್ರಸ್ತುತ ಅಧ್ಯಕ್ಷರಾದ ಕೆ.ಎಂ.ಮಹೇಶ್ವರಪ್ಪ ಹೊಸ ಅಧ್ಯಕ್ಷರ ಆಯ್ಕೆಯಾಗುವವರೆಗೆ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಬೇರೆ ಯಾರನ್ನೂ ಅಧ್ಯಕ್ಷರ ನ್ನಾಗಿ ನೇಮಕ ಮಾಡಿಲ್ಲ. ಕಾರ್ಯಕರ್ತರ ಅಭಿಪ್ರಾಯ ಪಡೆದು ಸರ್ವಸಮ್ಮತವಾಗಿ ಆಯ್ಕೆ ಮಾಡಲಾಗುವುದು ಎಂದರು.ಜಿಲ್ಲಾ ಮತ್ತು ತಾಲೂಕು ಜೆಡಿಎಸ್ ಅಧ್ಯಕ್ಷರ ಆಯ್ಕೆಯಲ್ಲೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ದೇವೇಗೌಡರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಇದರಲ್ಲಿ ಯಾರಿಗೂ ಅನುಮಾನ ಬೇಡ. ಆದರೆ, ಜಿಲ್ಲಾ ಜೆಡಿಎಸ್ ಅಧ್ಯಕ್ಷರ ಕಾರ್ಯ ವೈಖರಿ ಸರಿಯಿಲ್ಲ. ಇಂತಹವರಿಂದ ಪಕ್ಷಕ್ಕೆ ನಷ್ಟವಾಗುತ್ತಿದೆ ಎಂದು ಹೆಸರು ಪ್ರಸ್ತಾಪಿಸದೆ ಅಸಮಾಧಾನ ವ್ಯಕ್ತಪಡಿಸಿದರು.ಜೆಡಿಎಸ್ ಕಾರ್ಯಕರ್ತರ ಪಕ್ಷವಾಗಿದ್ದು, ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಪಕ್ಷ ಎನ್‌ಡಿಎ ಮೈತ್ರಿಕೂಟದ ಭಾಗ ವಾಗಿರುವುದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಮೈತ್ರಿಕೂಟವೇ ತೀರ್ಮಾನಿಸಲಿದೆ. ಎಲ್ಲರೂ ಅದಕ್ಕೆ ಬದ್ಧರಾಗಿರಬೇಕು ಎಂದರು.ಮಾಜಿ ಶಾಸಕ ವೈ.ಎಸ್.ವಿ.ದತ್ತ, ಹಾಸನ ಹಾಲು ಒಕ್ಕೂಟದ ನಿರ್ದೇಶಕ ಬಿದರೆ ಜಗದೀಶ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಚ್.ಪ್ರೇಂ ಕುಮಾರ್, ಬಿ.ಟಿ.ಗಂಗಾಧರ ನಾಯ್ಕ, ಕಡೂರು ಹರ್ಷಿತ್, ಮಚ್ಚೇರಿ ಮಂಜು, ಬೀರೂರು ಮೋಹನ್ ಗುಜ್ಜೇನಹಳ್ಳಿ ಶಂಕರಪ್ಪ ಇದ್ದರು.