ಚನ್ನಪಟ್ಟಣ: ಕೇಂದ್ರ ಸರ್ಕಾರದ ನೀತಿಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಜತೆಗಿನ ಒಪ್ಪಂದ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಕಾಂಗ್ರೆಸ್ ಯುವ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಚಂದ್ರಸಾಗರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದು ಸೂಕ್ತ ನಿರ್ಧಾರವಲ್ಲ. ಇದರಿಂದ ಅಮೆರಿಕಕ್ಕೆ ಅನುಕೂಲವಾಗುತ್ತದೆಯೇ ಹೊರತು ಭಾರತಕ್ಕೆ ಯಾವುದೇ ರೀತಿಯ ಲಾಭವಿಲ್ಲ. ಕಷ್ಟಕಾಲದಲ್ಲಿ ಭಾರತದ ಕೈ ಹಿಡಿದಿದ್ದ ರಷ್ಯಾವನ್ನು ಬಿಟ್ಟು ಟ್ರಂಪ್ ಜತೆಗೆ ಒಪ್ಪಂದ ಮಾಡಿಕೊಂಡಿರುವುದು ಖಂಡನೀಯ ಎಂದು ಕಿಡಿಕಾರಿದರು.
ಎಪ್‌ಸ್ಟೈನ್ ಫೈಲ್ಸ್‌ನಲ್ಲಿ ಪ್ರಧಾನಿ ಮೋದಿ ಹೆಸರು ಕೇಳಿಬರುತ್ತಿದೆ. ಆತನ ಹೆಸರಿನ ಜತೆ ಮೋದಿ ಅವರ ಹೆಸರು ಥಳಕು ಹಾಕಿಕೊಂಡಿರುವುದರಿಂದ ದೇಶದ ಘನತೆಗೆ ಕುಂದುಂಟಾಗಿದೆ. ಈ ಕುರಿತು ಅವರು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಯುವ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.ಪೊಟೋ೧೦ಸಿಪಿಟಿ೧:ಚನ್ನಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.