ಕನ್ನಡಪ್ರಭ ವಾರ್ತೆ ಬೆಳಗಾವಿ
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಕಾಂಗ್ರೆಸ್ ಸರ್ಕಾರದ ಆರೋಪ ಸುಳ್ಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ಶಹಾಪುರದ ಮಹಾತ್ಮಫುಲೆ ರಸ್ತೆಯ ಬಸವೇಶ್ವರ ಮಂಗಳ ಕಾರ್ಯಾಲಯದಲ್ಲಿ ಬುಧವಾರ ನಡೆದ ವಿಕಸಿತ ಭಾರತ ಕೇಂದ್ರ ಜನಪರ ಬಜೆಟ್ ಕುರಿತು ಮಹಿಳಾ ಸಂವಾದದಲ್ಲಿ ಅವರು ಮಾತನಾಡಿದರು. ರೈತರು, ಬಡವರು, ಯುವಕರು ಮತ್ತು ಮಹಿಳೆಯರ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರದ ನೀತಿಗಳು ರೂಪುಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಿದ್ದು, ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯಾಗಿ ನೇಮಕ ಮಾಡುವ ಮೂಲಕ ಮಹಿಳಾ ಶಕ್ತಿಗೆ ಗೌರವ ನೀಡಲಾಗಿದೆ. ಪ್ರಧಾನಿಯಾಗಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಮಹತ್ವದ ಬದಲಾವಣೆಗಳು ಕಂಡುಬಂದಿವೆ. ಆದರೂ ಕಾಂಗ್ರೆಸ್ ನಾಯಕರು ಪ್ರತಿನಿತ್ಯ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರ ಕಳೆದ ಎರಡು ವರ್ಷಗಳಿಂದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂಬ ಒಂದೇ ಸುಳ್ಳನ್ನು ನೂರು ಬಾರಿ ಹೇಳುತ್ತಿದೆ. ಕಾಂಗ್ರೆಸ್ ದೇಶ ಮತ್ತು ರಾಜ್ಯದಲ್ಲಿ ದೀರ್ಘಕಾಲ ಆಡಳಿತ ನಡೆಸಿದರೂ ಬಡತನ ನಿರ್ಮೂಲನೆ ಆಗಿಲ್ಲ. ಚುನಾವಣೆಗೆ ಮುನ್ನ ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವುದು ರಾಜ್ಯದ ಸ್ಥಿತಿಯನ್ನು ತೋರಿಸುತ್ತದೆ. ಎರಡು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಏನು ಸಾಧಿಸಿದೆ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪದೇಪದೇ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ ಎಂದು ದೂರಿದರು.ಯುಪಿಎ ಸರ್ಕಾರದ ಅವಧಿಯಲ್ಲಿ ಹಲವು ಹಗರಣಗಳು ನಡೆದಿದ್ದರೆ, ಮೋದಿ ಸರ್ಕಾರದ 12 ವರ್ಷಗಳಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿಲ್ಲ. ಮೋದಿ ನೇತೃತ್ವದಲ್ಲಿ ಭಾರತ ಆರ್ಥಿಕವಾಗಿ ಬಲಿಷ್ಠವಾಗಿದ್ದು, ಜಾಗತಿಕ ಮಟ್ಟದಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ. ದೇಶದ ಅಭಿವೃದ್ಧಿ ಮತ್ತು ಭದ್ರತೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪದ್ಮಶ್ರೀ ಪುರಸ್ಕೃತ ಡಾ.ಪ್ರಭಾಕರ ಕೋರೆ ಅವರು, ಬಿಜೆಪಿಯಲ್ಲಿ ಮಹಿಳಾ ಶಕ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಪಕ್ಷದ ಸಂಘಟನೆ ತಾಲೂಕು ಮಟ್ಟದಿಂದಲೇ ಬಲಪಡಿಸುವ ಕೆಲಸ ನಡೆಯುತ್ತಿದೆ. ಪಕ್ಷದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಅವಕಾಶ ನೀಡಲಾಗುತ್ತಿದ್ದು, ಜಿಲ್ಲಾಮಟ್ಟದ ಸ್ಥಾನಮಾನಕ್ಕಾಗಿ ಕೆಲಸ ಮಾಡುವವರಿಗೆ ಆದ್ಯತೆ ಸಿಗುತ್ತದೆ. ಪಕ್ಷದಲ್ಲಿ ಕೆಲಸ ಮಾಡದವರಿಗೆ ಅವಕಾಶ ಸಿಗುವುದಿಲ್ಲ, ಕಾರ್ಯನಿರ್ವಹಿಸಿದ ಮಹಿಳೆಯರಿಗೆ ಮಾತ್ರ ಮುಂದಿನ ದಿನಗಳಲ್ಲಿ ಟಿಕೆಟ್ ಸೇರಿದಂತೆ ಜವಾಬ್ದಾರಿಗಳು ಸಿಗಲಿವೆ. 2029ರೊಳಗೆ ಮಹಿಳಾ ಮೀಸಲಾತಿ ಜಾರಿಗೆ ಬರುವ ಸಾಧ್ಯತೆ ಇದ್ದು, ಅದಕ್ಕೆ ಪಕ್ಷ ಈಗಿನಿಂದಲೇ ಮಹಿಳಾ ಕಾರ್ಯಕರ್ತರನ್ನು ಸಿದ್ಧಗೊಳಿಸುತ್ತಿದೆ. ಜಾತಿ, ಪಂಥ ಅಥವಾ ಆರ್ಥಿಕ ಸ್ಥಿತಿ ನೋಡದೆ ಪಕ್ಷದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಅವಕಾಶ ಸಿಗಲಿದೆ. ಯಾರು ಪಕ್ಷದ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೋ ಅವರಿಗೆ ಮುಂದಿನ ಚುನಾವಣೆಯಲ್ಲಿ ಅವಕಾಶ ದೊರೆಯಲಿದೆ ಎಂದು ಹೇಳಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಲವು ಬಾರಿ ಕೇಂದ್ರ ಬಜೆಟ್ ಮಂಡಿಸಿರುವುದು ಮಹಿಳಾ ಶಕ್ತಿಯ ಪ್ರತೀಕ. ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಮೇಲೆ ನಂಬಿಕೆ ಇಟ್ಟು ದೇಶ ಮುನ್ನಡೆಸುತ್ತಿದ್ದಾರೆ. ತಮಗೆ ನೀಡಿದ ಸತ್ಕಾರ ಮತ್ತು ಗೌರವ ವ್ಯಕ್ತಿಗತವಲ್ಲ, ಜಿಲ್ಲೆಯ ಎಲ್ಲಾ ನಾಗರಿಕರ ಆಶೀರ್ವಾದದಿಂದ ಸಿಕ್ಕಿದ್ದು. ಮುಂದಿನ ದಿನಗಳಲ್ಲಿ ಮಹಿಳಾ ಶಕ್ತಿಯೊಂದಿಗೆ ಬಿಜೆಪಿ ರಾಜ್ಯ ಮತ್ತು ದೇಶದಲ್ಲಿ ಮತ್ತಷ್ಟು ಬಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಅಭಯ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ. ಮಾಜಿ ಶಾಸಕರಾದ ಅನಿಲ ಬೆನಕೆ, ಅರವಿಂದ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಆರ್.ಎಸ್.ಮುತಾಲಿಕ, ರಮೇಶ ದೇಶಪಾಂಡೆ ಮೊದಲಾದವರು ಉಪಸ್ಥಿತರಿದ್ದರು.-----
ಕೋಟ್ರಾಜ್ಯದ ಒಟ್ಟು ತೆರಿಗೆಗಳಲ್ಲಿ ಬೆಂಗಳೂರು ಶೇ.90ರಷ್ಟು ಕೊಡುಗೆ ನೀಡುತ್ತದೆ. ಬೆಂಗಳೂರಿನ ಜನರು ತಮ್ಮ ತೆರಿಗೆ ಹಣ ಸಂಪೂರ್ಣ ಬೆಂಗಳೂರಿನ ಅಭಿವೃದ್ಧಿಗೆ ಬಳಸಬೇಕು ಎಂದು ಕೇಳಿದರೆ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರು ಏನು ಉತ್ತರ ನೀಡುತ್ತಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಹೆಚ್ಚು ತೆರಿಗೆ ನೀಡುವ ರಾಜ್ಯಗಳು. ಈ ಹಣದಿಂದ ಹಿಂದುಳಿದ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ.
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ