ರಾಜ್ಯ ಸರ್ಕಾರ ಘೋಷಿಸಿರುವ ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಕಲಬುರಗಿ ಕೈಬಿಟ್ಟು ಹೋಗಿರುವ ವಿಷಯ ಮುಂದಿಟ್ಟುಕೊಂಡು ಬಿಜೆಪಿ ಕಲಬುರಗಿ ನಗರದಲ್ಲಿ ಬುಧವಾರ ಪೂರ್ವಾನುಮತಿ ಪಡೆಯದೆ ಪ್ರತಿಭಟನೆ ನಡೆಸಿರುವುದು ಹಾಗೂ ಪ್ರತಿಭಟನೆಯಲ್ಲಿ ಸಾರ್ವಜನಿಕರಿಗೆ ಅಡ್ಡಿಪಡಿಸಿ ಬೈಕ್ ಸವಾರನ ಹೆಲ್ಮೆಟ್ ಒಡೆದ ಆರೋಪದಡಿ ಕಲಬುರಗಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪೊಲೀಸರೇ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಕಲಬುರಗಿ ಕೈಬಿಟ್ಟು ಹೋಗಿರುವ ವಿಷಯ ಮುಂದಿಟ್ಟುಕೊಂಡು ಬಿಜೆಪಿ ಕಲಬುರಗಿ ನಗರದಲ್ಲಿ ಬುಧವಾರ ಪೂರ್ವಾನುಮತಿ ಪಡೆಯದೆ ಪ್ರತಿಭಟನೆ ನಡೆಸಿರುವುದು ಹಾಗೂ ಪ್ರತಿಭಟನೆಯಲ್ಲಿ ಸಾರ್ವಜನಿಕರಿಗೆ ಅಡ್ಡಿಪಡಿಸಿ ಬೈಕ್ ಸವಾರನ ಹೆಲ್ಮೆಟ್ ಒಡೆದ ಆರೋಪದಡಿ ಕಲಬುರಗಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪೊಲೀಸರೇ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬುಧವಾರ ಮಧ್ಯಾಹ್ನ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಕಡೆಗೆ ಬಿಜೆಪಿ ವತಿಯಿಂದ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲಾಗುತ್ತಿತ್ತು. ಈ ವೇಳೆ ಯಾವುದೇ ಅನುಮತಿ ಪಡೆಯದೆ ಏಕಾಏಕಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳ ಸೂಚನೆಯಂತೆ ಸ್ಥಳಕ್ಕೆ ತೆರಳಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಂದೋಬಸ್ತ್ ಕೈಗೊಂಡ ಸಂದರ್ಭ ಅಶೋಕ ಬಗಲಿ, ರಾಜಕುಮಾರ ಪಾಟೀಲ್ ತೇಲ್ಕೂರ ಸಹಿತ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.ಆ ಹೊತ್ತಲ್ಲಿ ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋ, ಬೈಕ್, ಕಾರು ಹಾಗೂ ಬಸ್‌ಗಳನ್ನು ತಡೆದು, ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಏಕೆ ಮಧ್ಯೆ ಬರುತ್ತಿದ್ದೀರಿ ಎಂದು ಅವಾಚ್ಯ ಪದಗಳಿಂದ ನಿಂದಿಸಿ, ಅಲ್ಲಿಂದ ತೆರಳದಿದ್ದರೆ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಸ್ಟೇಷನ್‌ ಬಜಾರ್‌ ಠಾಣೆಯ ಎಎಸ್‌ಐ ಮಹಾಂತಪ್ಪ ಠಾಣೆಗೆ ನೀಡಿರುವ ಲಿಖಿತ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಇದೇ ಸಂದರ್ಭ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಬೈಕ್ ಸವಾರನನ್ನು ತಡೆದು ಆತನೊಂದಿಗೆ ವಾಗ್ವಾದ ನಡೆಸಿದ್ದೂ ಅಲ್ಲದೇ ಆತ ಧರಿಸಿದ್ದ ತಲೆಯ ಮೇಲಿದ್ದ ಹೆಲ್ಮೆಟ್ ತೆಗೆದು ನೆಲಕ್ಕೆ ಬಡಿದು ಹಾನಿಗೊಳಿಸಿದ್ದಾರೆ. ಹೆಲ್ಮೆಟ್‌ಗೆ ಸುಮಾರು 500 ರು. ನಷ್ಟವಾಗಿದೆ ಎಂದು ದೂರಿನಲ್ಲಿ ದಾಖಲಾಗಿದೆ. ಪ್ರತಿಭಟನೆಯ ಬಂದೋಬಸ್ತ್‌ಗೆ ಬಂದಿದ್ದ ಪೊಲೀಸರು ನಾವು ಹೋರಾಟಗಾರರ ಈ ಧೋರಣೆ ತಡೆಯಲು ಯತ್ನಿಸಿದರೂ ಅವರು ಯಾರೂ ನಮ್ಮ ಮಾತು ಕೇಳದೆ ಸಾರ್ವಜನಿಕರಿಗೆ ಅಡ್ಡಿಪಡಿಸುತ್ತಲೇ ಸಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರುದಾರ ಎಎಸ್‌ಐ ತಮ್ಮ ದೂರಿನಲ್ಲಿ ಆಗ್ರಹಿಸಿದ್ದಾರೆ.

ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

-----ಫೋಟೊ------ಫೋಟೋ- ತೇಲ್ಕೂರ್‌