ಸಾರಾಂಶ
ಕನ್ನಡಪ್ರಭ ವಾರ್ತೆ ಕಲಬುರಗಿ
ಪ್ರಸಕ್ತ 2024-25ನೇ ಶೈಕ್ಷಣಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾ.21 ರಿಂದ ಏ.4ರ ವರೆಗೆ ಕಲಬುರಗಿ ಜಿಲ್ಲೆಯ 131 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆ ಮೇಲೆ ತೀವ್ರ ಕಟ್ಟೆಚ್ಚರ ವಹಿಸಬೇಕು. ಪರೀಕ್ಷೆ ಸುಸೂತ್ರವಾಗಿ ಮತ್ತು ಯಾವುದೇ ರೀತಿಯ ನಕಲು ಮಾಡಲು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಖಡಕ್ ಸೂಚನೆ ನೀಡಿದರು.ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ವೀಕ್ಷಕರೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಜಿಲ್ಲೆಯಾದ್ಯಾಂತ 25,189 ಗಂಡು ಮತ್ತು 23,154 ಹೆಣ್ಣು ಮಕ್ಕಳು ಸೇರಿ ಒಟ್ಟು 48,342 ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆ-1 ಬರೆಯಲಿದ್ದಾರೆ. ಎಲ್ಲಿಯೂ ನಕಲು ಪ್ರಕರಣ ವರದಿಯಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಪರೀಕ್ಷೆ ಸುಗಮವಾಗಿ ನಡೆಯುವ ಸಂಬಂಧ 131 ಪರೀಕ್ಷಾ ಕೇಂದ್ರಕ್ಕೆ ಸ್ಥಳೀಯ ಜಾಗೃತ ಸದಸ್ಯರನ್ನು ನೇಮಿಸಲಾಗಿದೆ. ಪ್ರಶ್ನೆ ಪತ್ರಿಕೆ ಸರಬರಾಜಿಗೆ 49 ಜನ ಅಧಿಕಾರಿಗಳನ್ನು ಮಾರ್ಗಾಧಿಕಾರಿಯನ್ನಾಗಿ ನೇಮಿಸಿದೆ. 101 ಸಾಮಾನ್ಯ, 17 ಸೂಕ್ಣ್ಮ ಹಾಗೂ 13 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದ್ದು, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ನಗರ ಪೊಲೀಸ್ ಆಯುಕ್ತರು ಮತ್ತು ಎಸ್‌ಪಿಗೆ ಡಿಸಿ ತಿಳಿಸಿದರು.ಪರೀಕ್ಷೆ ನಡೆಯುವ ಮುನ್ನವೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲ ಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು, ಶೌಚಾಲಯ ಇರುವುದನ್ನು ಕೇಂದ್ರದ ಮುಖ್ಯಸ್ಥರು ಖಾತ್ರಿಪಡಿಸಿಕೊಳ್ಳಬೇಕು. ಬೇಸಿಗೆ ಇರುವ ಕಾರಣ ಆರೋಗ್ಯ ಇಲಾಖೆಯು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ತಪಾಸಣೆಗೆ ಹತ್ತಿರದ ಪೊಲೀಸ್ ಠಾಣೆಯಿಂದ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕೆಂದು ಸೂಚಿಸಲಾಯಿತು.
ಸಿಸಿಟಿವಿ, ವೆಬ್‌ಕಾಸ್ಟಿಂಗ್ ವ್ಯವಸ್ಥೆ:ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರತಿ ಕೇಂದ್ರದಲ್ಲೂ ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದ್ದು, ವಿಶೇಷವಾಗಿ ಜಿಲ್ಲಾ ಕೇಂದ್ರದಿಂದ ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷೆ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಇದಕ್ಕಾಗಿ 28 ತಂಡಗಳನ್ನು ರಚಿಸಿ ಪರೀಕ್ಷಾ ಕೇಂದ್ರ ಹಂಚಿಕೆ ಮಾಡಲಾಗಿದೆ ಎಂದು ಡಿ.ಸಿ. ತಿಳಿಸಿದರು.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಡಿಡಿಪಿಐ ಸೂರ್ಯಕಾಂತ ಮದಾನೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.