ಸಾರಾಂಶ
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆ.9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಕಲಬುರಗಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆ.9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಬೆ.9.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಪ್ರಯಾಣಿಸಿ ಅಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ನಂತರ ಮ.1.05ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಪ್ರಧಾನಮಂತ್ರಿ ಪ್ರವಾಸ ಹಿನ್ನೆಲೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆಯಲ್ಲದೆ ಶಿಷ್ಠಾಚಾರ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚಿಸಿದ್ದಾರೆ.
ಪ್ರಧಾನಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಗುರುವಾರ ತಮ್ಮ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರಧಾನಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಶಿಷ್ಠಚಾರ, ಭದ್ರತೆ, ಸಾರಿಗೆ ಸೇರಿದಂತೆ ಒಟ್ಟಾರೆ 19 ಅಧಿಕಾರಿಗಳ ತಂಡ ರಚಿಸಲಾಗಿದೆ.
ಈ ಎಲ್ಲಾ ತಂಡಗಳು ಪ್ರಧಾನಮಂತ್ರಿಗಳು ಭದ್ರತೆಯ ಜವಾಬ್ದಾರಿ ಹೊತ್ತಿಕೊಂಡಿರುವ ಎಸ್.ಪಿ.ಜಿ. (ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ತಂಡದೊಂದಿಗೆ ಸಮನ್ವಯತೆ ಸಾಧಿಸಿ ತಮಗೆ ನೀಡಲಾದ ಕೆಲಸಗಳನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದು ಸೂಚಿಸಿದ್ದಾರೆ.
ನಿಲ್ದಾಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನುರಿತ ವೈದ್ಯರೊಂದಿಗೆ ಅಂಬುಲೆನ್ಸ್, ಅಗ್ನಿಶಾಮಕ ವಾಹನ, ಎಸ್.ಪಿ.ಜಿ. ತಂಡದ ಜೊತೆಗೆ ಪೊಲೀಸ್ ಭದ್ರತೆ ಒದಗಿಸಬೇಕು.
ಗಣ್ಯಾತಿಗಣ್ಯರ ಲಘು ಉಪಹಾರ, ಸಾರಿಗೆ, ವಸತಿ ಸರಿಯಾಗಿ ನೋಡಿಕೊಳ್ಳಬೇಕು. ವಿಮಾನ ನಿಲ್ದಾಣದಲ್ಲಿ ಗಣ್ಯರ ಮತ್ತು ಅಧಿಕಾರಿಗಳ ವಾಹನ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು. ಸಂಚಾರ ದಟ್ಟಣೆ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ದೇವಿದಾಸ್ ಪಾಟೀಲ, ಡಿ.ಸಿ.ಎಫ್. ಸುಮಿತ್ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.