ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಕಲಿಕೆಗೆ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದರಿಂದ ಮಕ್ಕಳಲ್ಲಿ ನಾಯಕತ್ವ ಗುಣ, ಶಿಸ್ತು, ಸಹಕಾರ ಮನೋಭಾವ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ.

ಕನ್ನಡಪ್ರಭ ವಾರ್ತೆ ದೇವಲಾಪುರ

ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಜೊತೆಗೆ ಅವರ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಕಲಾತ್ಮಕ ಅಭಿವ್ಯಕ್ತಿಗೆ ಕಲೋತ್ಸವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಕರಡಹಳ್ಳಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎನ್.ಸಿ.ಶಿವಕುಮಾರ್ ಅಭಿಪ್ರಾಯಪಟ್ಟರು.

ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದ ಕೆಪಿಎಸ್ಸಿ ಶಾಲೆ ಆವರಣದಲ್ಲಿ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಮಾತನಾಡಿ, ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಕಲಿಕೆಗೆ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದರಿಂದ ಮಕ್ಕಳಲ್ಲಿ ನಾಯಕತ್ವ ಗುಣ, ಶಿಸ್ತು, ಸಹಕಾರ ಮನೋಭಾವ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.

ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಜವರೇಗೌಡ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತನ್ನದೇ ಆದ ವಿಶಿಷ್ಟ ಪ್ರತಿಭೆ ಮತ್ತು ಸಾಮರ್ಥ್ಯ ಅಡಗಿದೆ. ಇದನ್ನು ಗುರುತಿಸಿ ಹೊರತರುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ. ಇಂತಹ ಕಲೋತ್ಸವಗಳು ಮಕ್ಕಳ ಪ್ರತಿಭೆ ಪ್ರದರ್ಶಿಸಲು ಮತ್ತು ಅವರಲ್ಲಿ ಆತ್ಮವಿಶ್ವಾಸ ಬೆಳೆಸಲು ಉತ್ತಮ ಅವಕಾಶ ಕಲ್ಪಿಸುತ್ತವೆ ಎಂದರು.

ಇದೇ ವೇಳೆ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮಲ್ಲಿನ ಕಲಾ ಪ್ರತಿಭೆ ಅನಾವರಣಗೊಳಿಸಿ ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಕಲಾ ಪ್ರದರ್ಶನಗಳ ಮೂಲಕ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆ ಮುಖ್ಯ ಶಿಕ್ಷಕ ಶ್ರೀನಿವಾಸ್, ಹೋಬಳಿ ವಿವಿಧ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಕೆಪಿಎಸ್ಸಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಾಸು, ಪತ್ರಕರ್ತ ಜಗದೀಶ್ ಹಾಗೂ ಶಾಲಾ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಇಂದು ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ

ಮಂಡ್ಯ:ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಸದ್ವಿದ್ಯಾ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ನ.೧೭ರಂದು ಬೆಳಗ್ಗೆ ೧೦ ಗಂಟೆಗೆ ಸದ್ವಿದ್ಯಾ ಪದವಿಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ, ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಚೆಸ್ಕಾಂ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಹಾಜರಿರುವರು. ಅಧ್ಯಕ್ಷತೆಯನ್ನು ಶಾಸಕ ಪಿ.ರವಿಕುಮಾರ್ ವಹಿಸುವರು.