ಸಾರಾಂಶ
ಕೊಪ್ಪಳ:
ಕಲ್ಯಾಣ ಕರ್ನಾಟಕ ಉತ್ಸವವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸೆ. 17ರಂದು ಬೆಳಗ್ಗೆ 8ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧ್ವಜಾರೋಹಣ ನಂತರ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಬೆಳಗಿನ ಉಪಾಹಾರದ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ವೇದಿಕೆ ನಿರ್ಮಾಣ, ಪೆಂಡಾಲ್ ವ್ಯವಸ್ಥೆ, ನಗರಸಭೆಯಿಂದ ಸ್ವಚ್ಛತೆ, ಲೈಟಿಂಗ್, ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಶಾಲಾ-ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕೆಂದು ಹೇಳಿದರು.
ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಂದು ಪೊಲೀಸ್ ಇಲಾಖೆ ಸೇರಿದಂತೆ ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪಥ ಸಂಚಲನ ಭಾಗವಹಿಸಬೇಕು. ಕ್ರೀಡಾಂಗಣದಲ್ಲಿ ಅಗ್ನಿಶಾಮಕ ದಳದ ವಾಹನ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್. ಹೇಮಂತಕುಮಾರ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಕೃಷ್ಣಮೂರ್ತಿ ದೇಸಾಯಿ, ಕೃಷಿ ಇಲಾಖೆಯ ಜಂಟಿ ನಿದೇಶಕ ರುದ್ರೇಶಪ್ಪ ಟಿ.ಎಸ್., ಡಿಡಿಪಿಐ ಸೋಮಶೇಖರಗೌಡ ಪಾಟಿಲ್, ತಹಸೀಲ್ದಾರ್ ವೀಠ್ಠಲ್ ಚೌಗಲಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೀಠ್ಠಲ್ ಜಾಬಗೌಡರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಕರ್ಣಕುಮಾರ, ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.