ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

| Published : Oct 20 2025, 01:04 AM IST

ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ.

ಮಡಿಕೇರಿ: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಒಟ್ಟಾಗಿ ನ. 1, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದು. ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿ ಗೈರು ಹಾಜರಿಯನ್ನು ಅನ್ಯ ಕಾರ್ಯನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆ ಸಿಅಸುಇ 39:ಸೆಸೆವಿ: 87(1), ದಿನಾಂಕ 13ನೇ ಫೆಬ್ರವರಿ 1989 (ಕರ್ನಾಟಕ ರಾಜ್ಯಪತ್ರ ಭಾಗ-4, 2ಸಿ(1).ಮಾರ್ಚಿ 23, 1989, ಪುಟ 119)ರಲ್ಲಿ ತಿಳಿಸಿರುವಂತೆ ವಿನಾಯಿತಿಯಿದೆ.

ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ 18 ರಿಂದ 50 ವಯಸ್ಸಿನ ಒಳಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ 250 ರು. ಡಿಮ್ಯಾಂಡ್ ಡ್ರಾಫ್ಟ್ನ್ನು ಕಳುಹಿಸಿ ಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.

ಮೂವತ್ತೆಂಟನೆಯ ತಂಡದ ತರಬೇತಿಯು ಇದೇ ಡಿಸೆಂಬರ್ ತಿಂಗಳಿಂದ ಆರಂಭವಾಗಲಿದೆ. ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006, ದೂ.ಸಂ 0821-2345128 ಇವರಿಗೆ ಐದು ರು. ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳು ಪ್ರಭಾರಿ ಅಧಿಕಾರಿಯವರಿಗೆ ನ. 30 2025 ಒಳಗೆ ತಲುಪಬೇಕು.

ಹೆಚ್ಚಿನ ಮಾಹಿತಿಗೆ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ತಿಳಿಸಿದ್ದಾರೆ.