ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಜಮೀರ್ ಅಹಮದ್‌ ಖಾನ್‌

| Published : Nov 02 2025, 03:30 AM IST

ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಜಮೀರ್ ಅಹಮದ್‌ ಖಾನ್‌
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿರುವ 4300 ಉರ್ದು ಶಾಲೆ ಹಾಗೂ ಎಲ್ಲ ಮದರಸಾಗಳಲ್ಲಿ ಕಡ್ಡಾಯವಾಗಿ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಹಾಗೂ ತೃತೀಯ ಭಾಷೆ ಇಂಗ್ಲಿಷ್ ಅನ್ನು ಆಯ್ಕೆ ಮಾಡಲಾಗಿದೆ ಮಾಡಿಕೊಳ್ಳಲು ಸೂಚಿಸಲಾಗಿದೆ.

ಹೊಸಪೇಟೆ: ಕನ್ನಡ ಭಾಷೆಗೆ ಪ್ರಾಚೀನ ಇತಿಹಾಸವಿದೆ. ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಹಾಗೂ ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್. ಜಮೀರ್ ಅಹಮದ್‌ ಖಾನ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ನಗರಸಭೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕನ್ನಡ ಭಾಷಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ಪ್ರಸ್ತುತ ವರ್ಷದಿಂದ ರಾಜ್ಯದಲ್ಲಿರುವ 4300 ಉರ್ದು ಶಾಲೆ ಹಾಗೂ ಎಲ್ಲ ಮದರಸಾಗಳಲ್ಲಿ ಕಡ್ಡಾಯವಾಗಿ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಉರ್ದು ಹಾಗೂ ತೃತೀಯ ಭಾಷೆ ಇಂಗ್ಲಿಷ್‌ನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಮೈಸೂರು ರಾಜ್ಯವನ್ನು 1973ರಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ್ ಅರಸು ಕರ್ನಾಟಕ ರಾಜ್ಯವೆಂದು ನಾಮಕರಣ ಮಾಡಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಓಬಳಶೆಟ್ಟಿಹಳ್ಳಿ ಗ್ರಾಮದ ಗೊಲ್ಲರ ಸೂಲಗಿತ್ತಿ ಈರಮ್ಮ 13 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿರುವ ಹಿನ್ನೆಲೆಯಲ್ಲಿ ಸಮಾಜಸೇವಾ ಕಾರ್ಯ ಮತ್ತು ಹೊಸಪೇಟೆ ನಗರದ ಬಾಣದಕೇರಿ ನಿವಾಸಿ ಬಿ.ಮಾರುತಿ ಅವರಿಗೆ ಚಿತ್ರಕಲೆ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ತುಂಬ ಸಂತಸ ತಂದಿದೆ ಎಂದರು.

ವಸತಿ ಆರನೇ ಗ್ಯಾರಂಟಿ:

ಚುನಾವಣೆ ವೇಳೆಯಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಲ್ಲಿ ಅನುಷ್ಠಾನಕ್ಕೆ ತಂದು ಜನರಿಗೆ ತಲುಪಿಸಿದ್ದೇವೆ. ಆದರೆ ನಾವು ಆರನೇ ಗ್ಯಾರಂಟಿ ಘೋಷಣೆ ಮಾಡಿಲ್ಲ. ಆದರೆ ಅದು ಬಡಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ. ಸ್ಲಂಬೋರ್ಡ್ ನಿಂದ 1,80,253 ಮನೆಗಳು ಮತ್ತು ರಾಜೀವ್‌ ಗಾಂಧಿ ವಸತಿ ನಿಗಮದಿಂದ 47,860 ಮನೆಗಳು ಸೇರಿ 2,030,900 ಮನೆಗಳನ್ನು ಈ ಹಿಂದಿನ ನಮ್ಮ ಸರ್ಕಾರದಲ್ಲಿ ಮಂಜೂರು ಮಾಡಲಾಗಿತ್ತು. ವಸತಿ ರಹಿತರ ಸಮಸ್ಯೆಗಳಿಗೆ ಸ್ಪಂದಿಸಿ ಕಳೆದ ವರ್ಷ 36799 ಮನೆಗಳನ್ನು ನೀಡಿ ಇದಕ್ಕಾಗಿ ₹500 ಕೋಟಿ ಬಿಡುಗಡೆ ಮಾಡಲಾಗಿತ್ತು. ನವೆಂಬರ್ ತಿಂಗಳಲ್ಲಿ ಮತ್ತೆ 42, 345 ಮನೆಗಳನ್ನು ನೀಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ 2026 ಅಂತ್ಯದೊಳಗೆ ವಸತಿ ರಹಿತರಿಗೆ ಸೂರು ಕಲ್ಪಿಸಲಾಗುತ್ತದೆ. ಬೆಂಗಳೂರಿನಲ್ಲಿ ಬಡಜನತೆ ಅನುಕೂಲವಾಗುವ ನಿಟ್ಟಿನಲ್ಲಿ 2016ರಲ್ಲಿ 1023 ಎಕರೆಯನ್ನು ರಾಜೀವ್ ಗಾಂಧಿ ವಸತಿ ಯೋಜನೆಗೆ ನೀಡಿ ಬಡಜನರಿಗೆ ಸ್ವಂತ ನಿವಾಸ ಕಟ್ಟಿಕೊಳ್ಳಲು ಸಹಕಾರ ಮಾಡಿದ್ದಾರೆ ಎಂದರು.

ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪರೇಡ್ ಕಮಾಂಡರ್ ಗೋವಿಂದ್ ನೇತೃತ್ವದಲ್ಲಿ ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಸೇರಿ ವಿವಿಧ ಶಾಲೆಗಳ ವಿದ್ಯಾರ್ಥಿಗಳ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಸಲಾಯಿತು.

ಬಳಿಕ ವಿವಿಧ ಶಾಲಾ ಮಕ್ಕಳಿಂದ ಕನ್ನಡ ಭಾಷೆ ಮತ್ತು ನಾಡು, ನುಡಿಯ ಬಗ್ಗೆ ನೃತ್ಯ ಸಂಯೋಜನೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲಾಯಿತು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ, ರಾಜ್ಯ ಉಪಾಧ್ಯಕ್ಷ ಎಸ್.ಆರ್. ಮೆಹರೂಜ್ ಖಾನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಪಂ ಅಕ್ರಮ್ ಷಾ, ಎಸ್ಪಿ ಎಸ್. ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಸಹಾಯಕ ಆಯುಕ್ತ ಪಿ.ವಿವೇಕಾನಂದ, ತಹಸೀಲ್ದಾರ ಎಂ.ಶೃತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಸಾಧಕರಿಗೆ ಸನ್ಮಾನ:

ಕರ್ನಾಟಕ ರಾಜ್ಯೋತ್ಸವ ನಿಮಿತ್ತವಾಗಿ ವಿಜಯನಗರ ಜಿಲ್ಲೆಯಲ್ಲಿನ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ಸನ್ಮಾನಿಸಲಾಯಿತು. ಟಿಪ್ಪುಸಾಬ್ (ಆರೋಗ್ಯ), ವಿ.ಮಲ್ಲೇಶಪ್ಪ (ಜಾನಪದ), ಎ.ಬಸರಾಜ (ಹವ್ಯಾಸಿ ರಂಗಭೂಮಿ), ಪಿ.ಸಿ. ಶಾಂತಾ (ವಿಕಲಚೇತನ), ಎಸ್.ಅಂಜು (ನೃತ್ಯ), ಆರ್.ಬಿ. ನಿಂಗಪ್ಪ (ರಂಗಭೂಮಿ), ಕೊಟ್ರೇಶ್ ತಳವಾರ್ (ಚಿತ್ರಕಲೆ, ಶಿಲ್ಪಕಲೆ), ಎಚ್.ಜೆ. ಪದ್ಮಣ್ಣ (ಶಿಕ್ಷಣ), ಗುಂಡಿ ರಮೇಶ್ (ಸಮಾಜ ಸೇವೆ), ಎನ್.ಎಂ. ರವಿಕುಮಾರ್ (ಸಾಹಿತ್ಯ), ಮಧುಸೂದನ್ ಹವಾಲ್ದಾರ್, ಜಿ.ಚಿನ್ನಪ್ಪ, ನೀಲಪ್ಪ, ವಿ.ಅನುರಾಧ (ಸಂಗೀತ) ಅವರನ್ನು ಸನ್ಮಾನಿಸಲಾಯಿತು.