ಜಿಲ್ಲೆಯಲ್ಲಿ ಮೊಳಗಿತು ಕನ್ನಡ ಕಲರವ

| Published : Nov 02 2024, 01:20 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಡಾ.ಬಿ.ಆರ್‌.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಾಯಿ ಭುವನೇಶ್ವರಿ ತಾಯಿಗೆ ಪುಷ್ಪನಮನ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಸಚಿವ ಎಂ.ಬಿ.ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು, ಇದೇ ವೇಳೆ ರಾಷ್ಟ್ರಗೀತೆ ಹಾಗೂ ನಾಡಗೀತೆಗಳು ಮೊಳಗಿದವು. ಬಳಿಕ ತೆರೆದ ವಾಹನದಲ್ಲಿ ಸಚಿವರು ಕವಾಯತು ತಂಡಗಳ ವೀಕ್ಷಣೆ ಮಾಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಡಾ.ಬಿ.ಆರ್‌.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಾಯಿ ಭುವನೇಶ್ವರಿ ತಾಯಿಗೆ ಪುಷ್ಪನಮನ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಸಚಿವ ಎಂ.ಬಿ.ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು, ಇದೇ ವೇಳೆ ರಾಷ್ಟ್ರಗೀತೆ ಹಾಗೂ ನಾಡಗೀತೆಗಳು ಮೊಳಗಿದವು. ಬಳಿಕ ತೆರೆದ ವಾಹನದಲ್ಲಿ ಸಚಿವರು ಕವಾಯತು ತಂಡಗಳ ವೀಕ್ಷಣೆ ಮಾಡಿದರು.

ನಂತರದಲ್ಲಿ ಪೊಲೀಸ್ ಇಲಾಖೆ, ಗೃಹ ರಕ್ಷಕದಳ, ಸ್ಕೌಟ್ಸ್ ಹಾಗೂ ಗೈಡ್ಸ್, ವಿವಿಧ ಶಾಲಾ, ಕಾಲೇಜುಗಳು ಸೇರಿದಂತೆ ವಿವಿಧ ಒಟ್ಟು 14 ಕವಾಯತು ತಂಡಗಳು ಆಕರ್ಷಕ ಪಥಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದರು. ಬಳಿಕ ಎಂ.ಬಿ.ಪಾಟೀಲ್ ಅವರು ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ‌ ನುಡಿಗಳನ್ನಾಡಿದರು. ಜೊತೆಗೆ ತಮ್ಮ ಸರ್ಕಾರ ಕೈಗೊಂಡ ಅಭಿವೃಧ್ಧಿ ಕಾರ್ಯಗಳು ಮತ್ತು ಸಾಧನೆಗಳ ಕುರಿತು ಭಾಷಣದಲ್ಲಿ ನಾಡಿನ ಜನೆತೆಗೆ ತಿಳಿಸಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 25 ಸಾಧಕರಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ವಿವಿಧ ಶಾಲಾ, ಕಾಲೇಜು ಮಕ್ಕಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.

ಈ ವೇಳೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮೇಯರ್ ಮೆಹಜಬಿನ್ ಹೊರ್ತಿ, ಉಪಮೇಯರ್ ದಿನೇಶ ಹಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ ಸೇರಿದಂತೆ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ಸಾರ್ವಜನಿಕರು ಭಾಗವಹಿಸಿದ್ದರು.