ಸಾರಾಂಶ
ಸಂಡೂರು: ತಾಲೂಕಿನ ತಾಳೂರು ಗ್ರಾಮದಲ್ಲಿ ಶುಕ್ರವಾರ ಸ್ಥಳೀಯ ಸರ್ಕಾರಿ ಪ್ರೌಢ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹರ್ಷ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಡೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಈ.ಅನ್ನಪೂರ್ಣ ತುಕಾರಾಂ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ, ಶುಭ ಕೋರಿದರು.ಶಾಲೆಗಳ ಮಕ್ಕಳು ೨೦೦ ಮೀಟರ್ ಉದ್ದದ ಕನ್ನಡ ಬಾವುಟ ಹಿಡಿದು ಗ್ರಾಮದ ಬೀದಿಗಳಲ್ಲಿ ಸಾಗಿದರು. ವಿದ್ಯಾರ್ಥಿಗಳು ಕನ್ನಡ ನಾಡಿನ ಕವಿಗಳು, ಸಾಹಿತಿಗಳು, ರಾಜರು, ಹೋರಾಟಗಾರರ ವೇಷ ಭೂಷಣಗಳನ್ನು ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿ, ರಾಜ್ಯೋತ್ಸವದ ಮೆರಗನ್ನು ಹೆಚ್ಚಿಸಿದರು. ಗ್ರಾಮದ ಟ್ರ್ಯಾಕ್ಟರ್, ಆಟೋಗಳಿಗೆ ಕನ್ನಡ ಬಾವುಟಗಳನ್ನು ಕಟ್ಟಿ ಸಿಂಗರಿಸಲಾಗಿತ್ತು. ಮೆರವಣಿಗೆಯಲ್ಲಿ ಯಕ್ಷಗಾನ, ಡೊಳ್ಳು ಕುಣಿತ, ಕೋಲಾಟ, ಹುಲಿ ಕುಣಿತ, ವೀರಗಾಸೆ ತಂಡಗಳು ಭಾಗವಹಿಸಿದ್ದವು. ನಂತರ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಶಾಲೆಗೆ ಕೊಡುಗೆ ನೀಡಿದ ಹಲವರನ್ನು ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್. ಅಕ್ಕಿ, ಕ್ಷೇತ್ರ ಸಮನ್ವಯಾಧಿಕಾರಿ ಶರಣಬಸಪ್ಪ ಕರಿಶೆಟ್ಟಿ, ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಮುಖ್ಯ ಶಿಕ್ಷಕರು, ಶಿಕ್ಷಕರು, ಹರ್ಷ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಗ್ರಾಮ ಪಂಚಾಯ್ತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಕ್ಷೇತ್ರದ ನೂತನ ಶಾಸಕಿ ಈ.ಅನ್ನಪೂರ್ಣ ತುಕಾರಾಂ ಚಾಲನೆ ನೀಡಿ ಶುಭ ಕೋರಿದರು.
ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳು ೨೦೦ ಮೀ. ಉದ್ದದ ಕನ್ನಡ ಬಾವುಟವನ್ನು ಹಿಡಿದು ಸಾಗಿದರು.