ಬಳ್ಳಾರಿ: ಕನ್ನಡ ಭಾಷೆ ನಮ್ಮ ಅಸ್ಮಿತೆಯಾಗಿದ್ದು, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಕನ್ನಡಿಗರ ಹೃದಯವಂತಿಕೆ ನಮ್ಮ ಹೆಮ್ಮೆಯಾಗಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲೇಖಕ ಡಾ. ಶಿವಲಿಂಗಪ್ಪ ಹಂದಿಹಾಳು ಹೇಳಿದರು.

ತೋರಣಗಲ್ಲಿನ ಜಿಂದಾಲ್ ಆದರ್ಶ ವಿದ್ಯಾಲಯದಲ್ಲಿ ಕನ್ನಡ ಭಾಷಾ ವಿಭಾಗದಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಜಿಂದಾಲ್ ಆದರ್ಶ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದನ್ನು ಕಂಡಾಗ ಇಲ್ಲಿ ಇಡೀ ಭಾರತವೇ ಅನಾವರಣಗೊಂಡ ಅನುಭವವಾಗುತ್ತದೆ. ವಿವಿಧ ಭಾಷೆ, ಸಂಸ್ಕೃತಿ ಮತ್ತು ಪ್ರದೇಶಗಳಿಂದ ಬಂದ ವಿದ್ಯಾರ್ಥಿಗಳು ಒಂದೇ ಸೂರಿನಡಿ ಸೌಹಾರ್ದತೆಯಿಂದ ಕಲಿಯುತ್ತಿರುವುದು ಭಾರತದ ಏಕತೆ ಹಾಗೂ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಇಂತಹ ವಾತಾವರಣದಲ್ಲಿ ಕನ್ನಡ ನಾಡಿನ ರಾಜ್ಯೋತ್ಸವ ಆಚರಿಸುತ್ತಿರುವುದು ವಿಶೇಷವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಚಾರ್ಯೆ ಈಶ್ವರಿ ಶರ್ಮಾ ಮಾತನಾಡಿ, ಕರ್ನಾಟಕ ರಾಜ್ಯೋತ್ಸವವು ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆ ಸ್ಮರಿಸುವ ಹೆಮ್ಮೆಯ ಸಂದರ್ಭವಾಗಿದೆ. ಕನ್ನಡಿಗರ ಆತಿಥ್ಯ, ಹೃದಯವಂತಿಕೆ ಹಾಗೂ ಮಾನವೀಯ ಮೌಲ್ಯ ವಿಶಿಷ್ಟವಾಗಿವೆ. ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರ ಜತೆಗೆ ನಾಡಿನ ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆ ಗೌರವಿಸಿ ಉಳಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಸಿಬಿಎಸ್‌ಇ ಕನ್ನಡ ಭಾಷೆಯ ಪ್ರಶ್ನೆ ಪತ್ರಿಕೆ ಮಂಡಳಿಯ ಸದಸ್ಯ ಬಸರಕೊಡು ನಾಗರಾಜ್ ಉಪಸ್ಥಿತರಿದ್ದು, ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಕನ್ನಡ ಭಾಷಾ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅತಿಥಿಗಳು ಭಾಗವಹಿಸಿದ್ದರು. ವಿವಿಧ ರಾಜ್ಯಗಳ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಕಾರ್ಯಕ್ರಮವು ವೈವಿಧ್ಯದಲ್ಲಿ ಏಕತೆಯ ಸಂದೇಶ ಸಾರಿತು. ಕನ್ನಡದ ನೆಲದಲ್ಲಿ ಭಾರತೀಯ ಸಂಸ್ಕೃತಿಯ ಸೌಹಾರ್ದತೆ ಪ್ರತಿಬಿಂಬಿಸಿದ ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು.