ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ

| Published : Nov 02 2024, 01:23 AM IST

ಸಾರಾಂಶ

ಕೊಡಗು ಜಿಲ್ಲಾಡಳಿತ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲಾಡಳಿತ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ನಡೆಯಿತು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಬಾಲಕೀಯರ ಬಾಲ ಮಂದಿರ, ಸಂತ ಮೈಕಲರ ಪ್ರೌಢಶಾಲೆ, ಬಾಲಕರ ಬಾಲ ಭವನ, ಕೊಡಗು ವಿದ್ಯಾಲಯ, ಸಂತ ಜೋಸೆಫರ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಕೋಟೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜಿನ ಯಶಸ್ವಿನಿ ಕೆ.ಜೆ, ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ನಿಶ್ಚಿತ ಎಚ್.ಆರ್, ಮಾಲ್ದಾರೆ ಸರ್ಕಾರಿ ಪ್ರೌಢಶಾಲೆಯ ನಿಶಾಂಕ್ ಜೆ.ಎಲ್, ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಗಾನಶ್ರೀ, ಕುಶಾಲನಗರ ಸರ್ಕಾರಿ ಸಂಯುಕ್ತ ಬಾಲಕಿಯರ ಪ್ರೌಢಶಾಲೆಯ ನೇತ್ರಾವತಿ ಹಾಗೂ ಪಿಯುಸಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಯಿಷ ರಿಷಾನಾ, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದೇವಿ, ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮನಿಶಾ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕದ ಡಾ.ಮಂತರ್ ಗೌಡ ಅಧ್ಯಕ್ಷತೆ ವಹಿಸಿದ್ದರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಡಿವೈಎಸ್ ಪಿ ಮಹೇಶ್ ಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ತಹಸೀಲ್ದಾರರಾದ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ. ದೊಡ್ಡೇಗೌಡ, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

-------------ಮಡಿಕೇರಿಯಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಸ್ಥಾಪನೆ

ಕರ್ನಾಟಕ ಸುವರ್ಣ ಸಂಭ್ರಮ 50 ರ ಅಂಗವಾಗಿ ರಾಜ್ಯ ಸರ್ಕಾರದ ಆದೇಶದಂತೆ ಕನ್ನಡದ ಪ್ರಥಮ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಮಡಿಕೇರಿಯ ಜಿಲ್ಲಾಡಳಿತದ ಭವನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಸುವರ್ಣ ಸಂಭ್ರಮವನ್ನು ಆಚರಿಸುತ್ತಿರುವ ಸಂದರ್ಭ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸ್ಥಾಪಿಸಲು ಕ್ರಮ ವಹಿಸಿದೆ. ಇದರಿಂದ ನಮ್ಮ ಭಾಷೆ ನಾಡು ನುಡಿ, ಸಂಸ್ಕೃತಿಯನ್ನು ಪ್ರತಿಬಿಂಬಿಸಿ ಸಾಮಾನ್ಯರಿಗೆ ಶಾಸನದ ಬಗ್ಗೆ ತಿಳಿಯಬಹುದಾಗಿದೆ ಎಂದರು.

ನಮ್ಮ ಮಾತೃಭಾಷೆಯ ಬಗ್ಗ ಅಭಿಮಾನ ಮೂಡಿಸಿರುವ ಹಲ್ಮಿಡಿ ಶಾಸನದ ಪ್ರತಿಕೃತಿ ಸ್ಥಾಪಿಸುವ ಮೂಲಕ ಈ ಶಾಸನಕ್ಕೆ ಗೌರವ ತಂದಂತಾಗುತ್ತದೆ ಎಂದು ಹೇಳಿದರು.

----------

ಕನ್ನಡ ಭಾಷೆ, ಸಾಹಿತ್ಯ ಹಿರಿಮೆ ವಿಶ್ವವ್ಯಾಪ್ತಿಯಾಗಿದೆ: ಬೋಸರಾಜು

ಕನ್ನಡಪ್ರಭ ವಾರ್ತೆ ಮಡಿಕೇರಿ

ಸುಮಾರು ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಹಾಗೂ ಸಾಹಿತ್ಯದ ಹಿರಿಮೆ ವಿಶ್ವವ್ಯಾಪಿಯಾಗಿದ್ದು, ಪಂಪ, ರನ್ನ, ಜನ್ನ, ಪೊನ್ನ, ಕುಮಾರವ್ಯಾಸ ಮುಂತಾದ ಕವಿಗಳು ಕನ್ನಡ ಭಾಷಾ ದೀವಿಗೆಯನ್ನು ಆಗಸದೆತ್ತರಕ್ಕೆ ಬೆಳಗಿಸಿದ್ದಾರೆ. ಪುರಂದರದಾಸ, ಕನಕದಾಸರ ಭಕ್ತಿಪಂಥ ಮತ್ತು ಕೀರ್ತನೆಗಳ ಮೂಲಕ ಹಾಗೂ ಬಸವಾದಿ ಶರಣರು ತಮ್ಮ ವಚನಗಳ ಮೂಲಕ ಅದ್ಭುತವಾದ ಸಾಮಾಜಿಕ ಕ್ರಾಂತಿ ಮಾಡಿ ಕನ್ನಡ ನಾಡು- ನುಡಿಯನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಉಸ್ತುವಾರಿ ಸಚಿವ ಬೋಸರಾಜು ಹೇಳಿದರು.

ಜಿಲ್ಲಾಡಳಿತ ವತಿಯಿಂದ ೬೯ ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಾಹಿತ್ಯ, ಸಂಸ್ಕೃತಿ, ಸಂಗೀತ, ಸದಾಭಿರುಚಿ, ಸಂಪ್ರದಾಯ, ಸಂಸ್ಕಾರ ಯಾವುದೇ ಕ್ಷೇತ್ರದಲ್ಲೂ ಕನ್ನಡಿಗರು ಕಡಿಮೆಯಿಲ್ಲ. ಇಂತಹ ಪವಿತ್ರ ನೆಲದಲ್ಲಿ ಜನಿಸಿದ ನಾವೆಲ್ಲರೂ ಪುಣ್ಯವಂತರು. ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪಸರಿಸುವಲ್ಲಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಮೈಸೂರು ರಾಜ್ಯವು ‘ಕರ್ನಾಟಕ’ ಎಂದು ಮರು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿದೆ. ಈ ಶುಭ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ‘ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಹಾಗೂ ಯುವಜನತೆಯಲ್ಲಿ ಕನ್ನಡ- ಕನ್ನಡಿಗ- ಕರ್ನಾಟಕದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಕರ್ನಾಟಕ ಸಂಭ್ರಮ 50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನದ ನಿಮಿತ್ತ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ಈಗಾಗಲೇ ನಡೆದಿದೆ ಎಂದರು.

ಮಡಿಕೇರಿಯ ಗಾಂಧಿ ಮೈದಾನದಲ್ಲಿ ಶಾಶ್ವತವಾಗಿ ರಂಗ ಮಂದಿರ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಈ ವರ್ಷ ದಸರಾ ಯಶಸ್ವಿಯಾಗಿ ಮುಗಿದಿದ್ದು, ಮುಂದಿನ ವರ್ಷ ದಸರಾಗೆ ಈಗಿನಿಂದಲೇ ಸಿದ್ಧತೆಗಳು ನಡೆಯಬೇಕಿದೆ.

ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಮುಂಗಾರು ಅವಧಿಯಲ್ಲಿ ಯಾವುದೇ ಮಾನವಹಾನಿ ಸಂಭವಿಸಿರುವುದಿಲ್ಲ. ಮನೆಹಾನಿ, ಜಾನುವಾರು ಹಾನಿಗಳಿಗೆ ಸಂಬಂಧಿಸಿದಂತೆ ಪರಿಹಾರವನ್ನು ಈಗಾಗಲೇ ನೀಡಲಾಗಿದೆ. ಮುಖ್ಯಮಂತ್ರಿ ನೇತೃತ್ವದ ಸರ್ಕಾರ ಕನ್ನಡ ನಾಡಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕನ್ನಡ ನಾಡು-ನುಡಿಗೆ ವಿಶೇಷ ಆದ್ಯತೆ ನೀಡಿರುವುದು ವಿಶೇಷವಾಗಿದೆ ಎಂದರು.