ಸಂಡೂರು: ವಿದ್ಯಾರ್ಥಿಯ ಶೈಕ್ಷಣಿಕ ಜೀವನದಲ್ಲಿ ಎಸ್‌ಎಸ್‌ಎಲ್‌ಸಿ ಒಂದು ಪ್ರಮುಖ ಘಟ್ಟ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಬಾರದು. ಓದಿದ್ದನ್ನು ಮನನ ಮಾಡಿಕೊಂಡು ಬರೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು. ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ತಹಶೀಲ್ದಾರ್ ಜಿ. ಅನಿಲ್‌ಕುಮಾರ್ ಅಭಿಪ್ರಾಯಪಟ್ಟರು.ಪಟ್ಟಣದ ಗುರುಭವನದಲ್ಲಿ ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ, ಸನ್ಮಾರ್ಗ ಗೆಳೆಯರ ಬಳಗ, ಬಳ್ಳಾರಿ ಹಾಗೂ ಕನ್ನಡಪ್ರಭ ಪತ್ರಿಕೆಯ ಸಂಯುಕ್ತಾಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಎಲ್ಲ ವಿಷಯಗಳಿಗೂ ಸಮಾನ ಪ್ರಾಮುಖ್ಯತೆ ನೀಡಬೇಕು. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಫಲಿತಾಂಶ ಪಡೆಯಲು ಶ್ರಮಿಸಬೇಕು ಎಂದರು.

ತಾಲೂಕು ಪಂಚಾಯ್ತಿ ಪಿಡಿಒ ಮಡಗಿನ ಬಸಪ್ಪ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್, ಟಿವಿಗಳಿಂದ ದೂರವಿದ್ದು, ಶಿಕ್ಷಕರು ಬೋಧಿಸಿದ ವಿಷಯಗಳನ್ನು ಮನನ ಮಾಡಿಕೊಂಡು ಉತ್ತಮ ಫಲಿತಾಂಶ ಪಡೆದುಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್. ಅಕ್ಕಿಯವರು ಮಾತನಾಡಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ತಾಲೂಕಿನಲ್ಲಿ ವಿಷಯವಾರು ಶಿಕ್ಷಕರ ಕಾರ್ಯಾಗಾರ, ವಿಶೇಷ ತರಗತಿಗಳು, ವಿದ್ಯಾರ್ಥಿಗಳ ಮನೆ ಭೇಟಿ, ಪಾಲಕರ ಸಭೆ, ಸನಿವಾಸ ಕಾರ್ಯಾಗಾರ, ಸರಣಿ ಪರೀಕ್ಷೆ, ಸಂಜೆ ಮೊಬೈಲ್ ಹಾಗೂ ಟಿವಿ ಬಂದ್ ಮಾಡುವಂತೆ ಪಾಲಕರಲ್ಲಿ ಜಾಗೃತಿ ಮೂಡಿಸುವುದು, ನಸುಕಿನಲ್ಲಿ ಕರೆ ಮಾಡಿ ವಿದ್ಯಾರ್ಥಿಗಳನ್ನು ಅಭ್ಯಾಸದಲ್ಲಿ ತೊಡಗಿಸುವುದು, ಫೋನ್ ಇನ್ ಕಾರ್ಯಕ್ರಮ, ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳಲ್ಲಿನ ಆತ್ಮವಿಶ್ವಾಸ ಹೆಚ್ಚಿಸಿದ ಕಾರ್ಯಾಗಾರ:


ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ವಿದ್ಯಾರ್ಥಿಗಳಲ್ಲಿನ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಯಿತು. ಸನ್ಮಾರ್ಗ ಗೆಳೆಯರ ಬಳಗದ ಪುರುಷೋತ್ತಮ ಅವರು ಇಂಗ್ಲಿಷ್ ವ್ಯಾಕರಣ ಹಾಗೂ ಗಣಿತ ವಿಷಯವನ್ನು, ಸಿದ್ಧಲಿಂಗೇಶ್ ಅವರು ವಿಜ್ಞಾನ ವಿಷಯ ಹಾಗೂ ಹರಿಪ್ರಸಾದ್ ಅವರು ಕನ್ನಡ ವ್ಯಾಕರಣವನ್ನು ಬೋಧಿಸಿ, ವಿದ್ಯಾರ್ಥಿಗಳನ್ನೂ ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡು, ಸುಲಭವಾಗಿ ಅಂಕಗಳಿಸುವ ವಿಧಾನವನ್ನು ತಿಳಿಸಿಕೊಟ್ಟರು.

ಸನ್ಮಾರ್ಗ ಗೆಳೆಯರ ಬಳಗದ ಜಡೇಶ್ ಎಮ್ಮಿಗನೂರು ಅವರು ದೇಶಭಕ್ತಿ ಗೀತೆ, ಭಾವಗೀತೆಗಳನ್ನು ಹಾಡಿ, ವಿದ್ಯಾರ್ಥಿಗಳ ಮನಸ್ಸಿಗೆ ಮುದ ನೀಡಿದರು.

ಶಿಕ್ಷಣ ಸಂಯೋಜಕ ಗೂಳೆಪ್ಪ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಶರಣಬಸಪ್ಪ ಕರಿಶೆಟ್ಟಿ, ಸಿಆರ್‌ಪಿ ಶೇಖರ್ ಪಾಟೀಲ್, ಮುಖ್ಯಶಿಕ್ಷಕರಾದ ನಾಗರಾಜ, ಟಿ.ಎಂ. ಪುರುಷೋತ್ತಮ್, ಸನ್ಮಾರ್ಗ ಗೆಳೆಯರ ಬಳಗದ ಚಂದ್ರಶೇಖರ ಆಚಾರ್ ಕಪ್ಪಗಲ್, ಮೆಹೆತಾಬ್ ಕಪ್ಪಗಲ್, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಸನ್ಮಾರ್ಗ ಗೆಳೆಯರ ಬಳಗ ಹಾಗೂ ಕನ್ನಡಪ್ರಭ ಪತ್ರಿಕೆಯ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.