ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಕನ್ನಡಿಗರು ಮೊದಲು ಕನ್ನಡ ಭಾಷೆಯನ್ನು ಪ್ರೀತಿಸಿ ಗೌರವಿಸಬೇಕು. ಅನ್ಯ ಭಾಷಿಕರಿಗೆ ಕನ್ನಡ ಕಲಿಸುವ ಕೆಲಸ ಮಾಡಬೇಕು ಎಂದು ಶಾಸಕ ಎಚ್.ಟಿ.ಮಂಜು ಕರೆ ನೀಡಿದರು.ಪಟ್ಟಣದ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡದ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮರಾಗಿದ್ದು ಕನ್ನಡ ನಾಡಿನಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು ಎಂದರು.ಕನ್ನಡ ನಾಡಿನಲ್ಲಿ ಕನ್ನಡ ಕಲಿತ ಮಕ್ಕಳಿಗೆ ಉದ್ಯೋಗಗಳು ದೊರಕುತ್ತಿಲ್ಲ. ಕನ್ನಡ ಭಾಷಿಕ ಮಕ್ಕಳಿಗೆ ಉದ್ಯೋಗದ ಅವಕಾಶ ಕಲ್ಪಿಸದಿದ್ದರೆ ನಾವು ನಮ್ಮ ನೆಲದ ಮಕ್ಕಳಿಗೆ ಘೋರ ಅನ್ಯಾಯ ಮಾಡಿದಂತಾಗುತ್ತದೆ. ಸರೋಜಿನಿ ಮಹಿಷಿ ವರದಿಯನ್ನು ಸಮಗ್ರವಾಗಿ ಜಾರಿ ಮಾಡುವ ಇಚ್ಚಾ ಶಕ್ತಿಯನ್ನು ರಾಜ್ಯ ಸರ್ಕಾರ ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.ಸರ್ಕಾರ ಕನ್ನಡ ಶಾಲೆಗಳನ್ನು ಉಳಿಸುವ ಕೆಲಸ ಮಾಡಬೇಕು. ಇದಕ್ಕಾಗಿ ವಿಶೇಷ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಬೇಕು. ಸಾವಿರಾರು ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದೆ. ರಾಷ್ಟ್ರೀಯ ಸ್ಥಾನಮಾನ ಹೊಂದಿದ್ದರೂ ಅನ್ಯ ಭಾಷಿಕರ ಹಾವಳಿಯಿಂದ ಕನ್ನಡ ಭಾಷೆಗೆ ಆಪತ್ತು ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕನ್ನಡಿಗರಾಗಿ ಭಾಷೆ ಬಗ್ಗೆ ನಿರಭಿಮಾನಿಗಳಾಗದೆ ಕಣ ಕಣದಲ್ಲಿಯೂ ಕನ್ನಡ ಪ್ರೇಮವನ್ನು ಬೆಳೆಸಿಕೊಂಡು, ಬೀದಿಗಿಳಿದು ಹೋರಾಟ ನಡೆಸಲು ಸದಾ ಸಿದ್ದರಿರಬೇಕು ಎಂದು ಕರೆ ನೀಡಿದರು.ತಹಸೀಲ್ದಾರ್ ಡಾ.ಅಶೋಕ್ ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದರು. ತಾಪಂ ಇಒ ಕೆ.ಸುಷ್ಮ, ಪೊಲೀಸ್ ಇನ್ಸ್ ಪೆಕ್ಟರ್ ಬಿ.ಸುಮಾರಾಣಿ, ಪುರಸಭೆ ಅಧ್ಯಕ್ಷೆ ಪಂಕಜಾ, ಉಪಾಧ್ಯಕ್ಷೆ ಸೌಭಾಗ್ಯ, ಸದಸ್ಯೆಯರಾದ ಇಂದ್ರಾಣಿ, ಸುಗುಣಾ, ಕಲ್ಪನಾ, ಗಿರೀಶ್, ಶಾಮಿಯಾನ ತಿಮ್ಮೇಗೌಡ, ಬಿಇಒ ಚಂದ್ರಶೇಖರ್, ಪುರಸಭೆ ಮುಖ್ಯಾಧಿಕಾರಿ ನಟರಾಜ್, ಕರವೇ ಜಿಲ್ಲಾ ಅಧ್ಯಕ್ಷ ವೇಣು, ಚೇತನ್ ಕುಮಾರ್, ಟೆಂಪೋ ಶ್ರೀನಿವಾಸ್, ಜಯಕರ್ನಾಟಕ ಸಂಘಟನೆ ಅಧ್ಯಕ್ಷ ಸೋಮಶೇಖರ್, ಸಿಡಿಪಿಓ ಅರುಣ್ ಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಶಿವರಾಮೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್.ಪೂರ್ಣಚಂದ್ರ ತೇಜಸ್ವಿ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪುರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತಾಲೂಕು ಆಡಳಿತ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದ ಆವರಣದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ರೀಡಾಂಗಣದವರೆಗೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಪಥ ಸಂಚಲನದ ಮೂಲಕ ತಾಯಿ ಭುವನೇಶ್ವರಿಯ ಭಾವಚಿತ್ರವನ್ನು ಮೆರವಣಿಯ ಮೂಲಕ ತರಲಾಯಿತು. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಶಾಸಕ ಎಚ್.ಟಿ.ಮಂಜು ಮತ್ತಿತರ ಅತಿಥಿಗಳು ಧ್ವಜ ವಂದನೆ ಸ್ವೀಕರಿಸಿದರು.